ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಮಸ್ಯೆಗಳು ಮತ್ತು ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಜಿಲ್ಲೆಯ ಗ್ರಾಮ ಆಡಳಿತ ಅಧಿಕಾರಿಗಳು ಸೋಮವಾರ ಕರ್ತವ್ಯಕ್ಕೆ ಗೈರಾಗುವ ಮೂಲಕ 2ನೇ ಹಂತದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದರು.
ಜಿಲ್ಲೆಯ 7 ತಾಲೂಕುಗಳ 163 ಗ್ರಾಮ ಆಡಳಿತಾಧಿಕಾರಿಗಳು ಕರ್ತವ್ಯಕ್ಕೆ ಗೈರಾಗಿ, ಕೈಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಆಯಾ ತಹಸೀಲ್ದಾರ ಕಚೇರಿ ಎದುರು ಮೌನವಾಗಿ ಕುಳಿತು ಮುಷ್ಕರ ನಡೆಸಿದರು. ಈ ವೇಳೆ ಜಿಲ್ಲಾ ಸರಕಾರಿ ನೌಕರರ ಸಂಘ, ಜಿಲ್ಲಾ ಕಂದಾಯ ನೌಕರರ ಸಂಘ, ವಿವಿಧ ರೈತರ ಸಂಘಟನೆಗಳು, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಹಾಗೂ ವಿವಿಧ ಸಂಘಟನೆಗಳು ಮುಖಂಡರು ಮುಷ್ಕರದಲ್ಲಿ ಪಾಲ್ಗೊಂಡು ಬೆಂಬಲ ಸೂಚಿಸಿದರು.
ಗ್ರಾಮ ಆಡಳಿತ ಅಧಿಕಾರಿಗಳ ಪ್ರಮುಖ ಬೇಡಿಕೆಗಳಾದ ರಾಜ್ಯಾದ್ಯಂತ ಆಧಾರ್ ಸೀಡಿಂಗ್ ಪ್ರಕ್ರಿಯೆಯಲ್ಲಿ ಪತ್ತೆಯಾಗಿರುವ 51.5 ಲಕ್ಷ ಮೃತ ಖಾತೆದಾರರ ಪಹಣಿ ದಾಖಲೆ ಅಭಿಯಾನ ಮಾದರಿಯಲ್ಲಿ ವಾರಸುದಾರರ ಹೆಸರುಗಳಿಗೆ ಪೌತಿ ಖಾತೆ ದಾಖಲಿಸುವಂತೆ ಇ-ಪೌತಿ ಖಾತಾ ಆಂದೋಲನ ಕೈಬಿಡಬೇಕು. ಚಿಕ್ಕಮಗಳೂರು ಜಿಲ್ಲೆಯಲ್ಲಿ 30 ಗ್ರಾಮ ಆಡಳಿತ ಅಧಿಕಾರಿಗಳ ವಾರ್ಷಿಕ ವೇತನ ಬಡ್ತಿಯನ್ನು ತಡೆದು ನೈಸರ್ಗಿಕ ನ್ಯಾಯ ತತ್ವಗಳನ್ನು ಹಾಗೂ ಎಲ್ಲ ನಿಯಮಗಳನ್ನು ಉಲ್ಲಂಘಿಸಿ ಹೊರಡಿಸಿರುವ ದಂಡನಾ ಆದೇಶವನ್ನು ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿದರು.
ಕಂದಾಯ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರಕಾರಿ ನೌಕರರ ಎಲ್ಲಾ ವೃಂದಗಳನ್ನು ಒಳಗೊಂಡಂತೆ ನೀಡುತ್ತಿರುವ ಅನುಕಂಪದ ನೇಮಕಾತಿಯ ಹುದ್ದೆಯ ವೃಂದ ಹಾಗೂ ನೇಮಕಾತಿ ತಿದ್ದುಪಡಿ ಮಾಡಬೇಕು. ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ಜೀವಹಾನಿ ಸಂಭವಿಸಿದಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ಮಂಜೂರು ಮಾಡಬೇಕು. ಪ್ರಯಾಣ ಭತ್ಯೆಯನ್ನು 500ನಿಂದ 5000 ರೂ.ಗೆ ಹೆಚ್ಚಳ ಮಾಡಬೇಕು ಎಂದು ಒತ್ತಾಯಿಸಿದರು.
ಜಿಲ್ಲಾ ಘಟಕದ ಗೌರವ ಅಧ್ಯಕ್ಷ ಪಿ.ಬಿ. ಘೋರೆಖಾನ್, ಅಧ್ಯಕ್ಷ ಅರುಣಗೌಡ ಮಂಟೂರ, ಉಪಾಧ್ಯಕ್ಷರಾದ ಚಂದ್ರಶೇಖರ ನಾಯಕ, ರಾಧಾ ದೇಸಾಯಿಪಟ್ಟಿ, ಪ್ರಧಾನ ಕಾರ್ಯದರ್ಶಿ ಐ.ವೈ. ಕಳಸಣ್ಣವರ, ಖಜಾಂಜಿ ಯೋಗೇಶ ಬಡಿಗೇರ, ಮುಂಡರಗಿ ತಾಲೂಕಾಧ್ಯಕ್ಷ ಬಸವರಾಜ ಪೊಲೂರ, ಶಿರಹಟ್ಟಿ ತಾಲೂಕಾಧ್ಯಕ್ಷ ನಾಗರಾಜ ಚೋಳಮ್ಮನವರ, ಲಕ್ಷೇಶ್ವರ ತಾಲೂಕಾಧ್ಯಕ್ಷ ಡಿ.ಎಸ್. ಕುಲಕರ್ಣಿ, ಗದಗ ತಾಲೂಕಾಧ್ಯಕ್ಷ ಸಂತೋಷ ಜಾಧವ, ರೋಣದ ಶಂಕರಗೌಡ ಗಿರಿಯಪ್ಪಗೌಡರ, ಗಜೇಂದ್ರಗಡದ ಉಮೇಶ ಅರಳಿಗಿಡದ, ನರಗುಂದ ಅನಿಲಕುಮಾರ ಭೋವಿ ಸೇರಿ ಜಿಲ್ಲೆಯ ಎಲ್ಲ ಗ್ರಾಮ ಆಡಳಿತ ಅಧಿಕಾರಿಗಳು ಪಾಲ್ಗೊಂಡಿದ್ದರು.
ಬೆಳೆ ಸಮೀಕ್ಷೆ, ಬೆಳೆ ಹಾನಿ ಪರಿಹಾರದ ಕೆಲಸವನ್ನು ಕೃಷಿ, ತೋಟಗಾರಿಕೆ ಇಲಾಖೆಗೆ ನಿರ್ವಹಿಸುವಂತೆ ಆದೇಶಿಸಬೇಕು. ಮ್ಯೂಟೇಶನ್ ಅವಧಿ ದಿನವನ್ನು ವಿಸ್ತರಿಸಬೇಕು. ಪ್ರೋಟೋಕಾಲ್ ಕೆಲಸದಿಂದ ಗ್ರಾಮ ಆಡಳಿತ ಅಧಿಕಾರಿಗಳನ್ನು ಕೈಬಿಡಬೇಕು. ಜಾಬ್ ಚಾರ್ಟ್ ನಿಗದಿಪಡಿಸಬೇಕು. ದಫ್ತರ್ ಹಾಗೂ ಜಮಾಬಂದಿಯನ್ನು ರದ್ದುಪಡಿಸಬೇಕು ಹಾಗೂ ರಾಜ್ಯದ ಗ್ರಾಮ ಸಹಾಯಕರಿಗೆ ಸೇವಾಭದ್ರತೆಯನ್ನು ಒದಗಿಸಬೇಕು ಎಂದು ಮನವಿ ಮಾಡಿಕೊಂಡರು.