ರಾಷ್ಟ್ರೀಯ ಹಬ್ಬವನ್ನು ಸಂಭ್ರಮದಿಂದ ಆಚರಿಸೋಣ

0
Independence Day pre-meeting
Spread the love

ವಿಜಯಸಾಕ್ಷಿ ಸುದ್ದಿ, ಗದಗ : ಜಿಲ್ಲೆಯಲ್ಲಿ ಆಗಸ್ಟ್ 15ರಂದು ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಶಿಸ್ತು ಹಾಗೂ ಸಂಭ್ರಮದಿಂದ ಯಾವುದೇ ಲೋಪದೋಷಗಳಿಲ್ಲದಂತೆ ವ್ಯವಸ್ಥಿತವಾಗಿ ಹಾಗೂ ಅಚ್ಚುಕಟ್ಟಾಗಿ ಆಚರಿಸಲು ವಿವಿಧ ಇಲಾಖೆಗಳ ಅಧಿಕಾರಿಗಳು ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ತಿಳಿಸಿದರು.

Advertisement

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಜರುಗಿದ ಸ್ವಾತಂತ್ರ್ಯೋತ್ಸವ ದಿನಾಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಆಗಸ್ಟ್ 14 ಹಾಗೂ 15ರಂದು ಎರಡು ದಿವಸಗಳ ಕಾಲ ಜಿಲ್ಲಾಡಳಿತ ಭವನದ ಸೇರಿದಂತೆ ವಿವಿಧ ಸರ್ಕಾರಿ ಕಟ್ಟಡಗಳು, ನಗರದ ಪ್ರಮುಖ ವೃತ್ತಗಳಲ್ಲಿ ವಿದ್ಯುತ್ ದೀಪಾಲಂಕಾರ ಮಾಡಬೇಕು. ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಆ. 15ರಂದು ಬೆಳಿಗ್ಗೆ 7.30 ಗಂಟೆಗೆ ಜಿಲ್ಲಾಡಳಿತ ಭವನದ ಆವರಣದಲ್ಲಿ ಜಿಲ್ಲಾಧಿಕಾರಿಗಳಿಂದ ಧ್ವಜಾರೋಹಣ ಕಾರ್ಯಕ್ರಮ ಜರುಗುವುದು. ನಂತರ ಬೆಳಿಗ್ಗೆ 9 ಗಂಟೆಗೆ ನಗರದ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಸಾರ್ವಜನಿಕ ಧ್ವಜಾರೋಹಣ ಕಾರ್ಯಕ್ರಮ ಜರುಗಲಿದ್ದು, ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಅಂದು ಶಾಲಾ ಕಾಲೇಜು ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಎಲ್ಲ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ಕಡ್ಡಾಯವಾಗಿ ಸಮಯಕ್ಕೆ ಸರಿಯಾಗಿ ಕ್ರೀಡಾಂಗಣದಲ್ಲಿ ಹಾಜರಿರಬೇಕು.

Independence Day pre-meeting

ನಗರದ ಜಿಲ್ಲಾ ಕ್ರೀಡಾಂಗಣ ಹಾಗೂ ಪ್ರಮುಖ ವೃತ್ತಗಳ ಸ್ವಚ್ಛತೆಗೆ ನಗರಸಭೆ ಪೌರಾಯುಕ್ತರು ಕ್ರಮ ವಹಿಸಬೇಕು ಎಂದು ಸೂಚಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಕಾರಿ ಬಿ.ಎಸ್. ನೇಮಗೌಡ ಮಾತನಾಡಿ, ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ ಮಾಡಲಾಗುತ್ತದೆ. ಆ ಸಂದರ್ಭದಲ್ಲಿ ಸನ್ಮಾನಿತರಿಗಾಗಿ ಪ್ರತ್ಯೇಕವಾಗಿ ಮುಂಚಿತವಾಗಿಯೇ ನಿಗದಿತ ಆಸನದ ವ್ಯವಸ್ಥೆ ಮಾಡಿದರೆ ಅವರನ್ನು ಕರೆತಂದು ಸನ್ಮಾನ ಸಮಾರಂಭ ಜರುಗಿಸಲು ಸುಲಭವಾಗುತ್ತದೆ ಎಂದರು.

ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್ ಮಾತನಾಡಿ, ಸ್ವಾತಂತ್ರ್ಯೋತ್ಸವ ದಿನಾಚರಣೆಯ ದಿನ ಸಾರ್ವಜನಿಕ ಧ್ವಜಾರೋಹಣ ಕಾರ್ಯಕ್ರಮ ಪ್ರಾರಂಭವಾಗುವದಕ್ಕಿಂತ ಮುಂಚೆಯೇ ಎಲ್ಲ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಗಳು ನಿಗದಿತ ಸ್ಥಾನಗಳಲ್ಲಿ ಉಪಸ್ಥಿತರಿದ್ದು ಶಿಸ್ತಿನಿಂದ ತಮ್ಮ ಕಾರ್ಯ ನಿರ್ವಹಿಸಬೇಕು. ಅಂದಾಗ ಕಾರ್ಯಕ್ರಮದಲ್ಲಿ ಗೊಂದಲಗಳಾಗದಂತೆ ಅಚ್ಚುಕಟ್ಟಾಗಿ ನಿರ್ವಹಿಸಲು ಸಾಧ್ಯವಾಗುತ್ತದೆ ಎಂದರು.

ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ. ಮಾತನಾಡಿ, ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮದ ಸಂದರ್ಭದಲ್ಲಿ ವಿವಿಧ ರಂಗಗಳಲ್ಲಿ ಸಾಧನೆ ಮಾಡಿದವರಿಗೆ ಸನ್ಮಾನಕ್ಕೆ ಆಯಾ ಇಲಾಖಾಧಿಕಾರಿಗಳು ಕ್ರಮ ವಹಿಸಬೇಕು. ಒಟ್ಟಾರೆಯಾಗಿ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ವಿಶೇಷ ಆಸಕ್ತಿಯಿಂದ ಆಚರಿಸಲು ವಿವಿಧ ಇಲಾಖೆಯ ಅಧಿಕಾರಿಗಳು ಕ್ರಮ ವಹಿಸಬೇಕು ಎಂದರು.

ಆಮಂತ್ರಣ ಪತ್ರಿಕೆ ಮುದ್ರಣ, ಅಲ್ಪೋಪಹಾರದ ವ್ಯವಸ್ಥೆ, ಪರೇಡ್ ವ್ಯವಸ್ಥೆ, ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ, ಧನಿವರ್ಧಕ ಸೇರಿದಂತೆ ಕಾರ್ಯಕ್ರಮದ ವೇದಿಕೆ ವ್ಯವಸ್ಥೆ ಕುರಿತು ಚರ್ಚಿಸಲಾಯಿತು. ಸಭೆಯಲ್ಲಿ ಎನ್‌ಸಿಸಿ ಅಧಿಕಾರಿ ಕರ್ನಲ್ ರೂಪೇಂದ್ರ ಸಿಂಗ್, ಜಂಟಿ ಕೃಷಿ ನಿರ್ದೇಶಕಿ ತಾರಾಮಣಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಪ್ರಶಾಂತ ವರಗಪ್ಪನವರ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಎ. ರಡ್ಡೇರ, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಿ.ಕುರ್ತಕೋಟಿ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರವಿ ಗುಂಜೀಕರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಬಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪಿ.ವೈ.ಶೆಟ್ಟೆಪ್ಪನವರ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಶರಣು ಗೋಗೇರಿ, ಸುಬೇದಾರ ಮೇಜರ್ ಮಲ್ಲಪ್ಪ ಬ್ಯಾಳಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಜರುಗಲಿದ್ದು, ಗಣ್ಯ ವ್ಯಕ್ತಿಗಳಿಗೆ ಶಿಷ್ಟಾಚಾರದನ್ವಯ ಆಸನದ ವ್ಯವಸ್ಥೆ ಹಾಗೂ ಸನ್ಮಾನ ಕಾರ್ಯಕ್ರಮಕ್ಕೂ ಸಹ ಸೂಕ್ತ ಆಸನದ ವ್ಯವಸ್ಥೆಗೆ ಕ್ರಮ ಕೈಗೊಳ್ಳಬೇಕು. ಜಿಲ್ಲಾ ಕ್ರೀಡಾಂಗಣ ಸೇರಿದಂತೆ ಪ್ರಮುಖ ಬೀದಿ ಹಾಗೂ ವೃತ್ತಗಳ ಸ್ವಚ್ಛತೆ ಕುರಿತು ನಗರಸಭೆ ಪೌರಾಯುಕ್ತರು ನಿಗಾ ವಹಿಸಬೇಕು. ಕಾರ್ಯಕ್ರಮದ ದಿನ ತುರ್ತು ಸೇವೆಗಾಗಿ ಆಂಬ್ಯುಲೆನ್ಸ್ ವ್ಯವಸ್ಥೆಗೆ ಕ್ರಮ ವಹಿಸಬೇಕು. ಒಟ್ಟಾರೆಯಾಗಿ ರಾಷ್ಟ್ರೀಯ ಹಬ್ಬವಾದ ಸ್ವಾತಂತ್ರ್ಯೋತ್ಸವ ಸಮಾರಂಭವನ್ನು ಅತ್ಯಂತ ಕಾಳಜಿಯಿಂದ ಆಚರಿಸಲು ಕ್ರಮ ವಹಿಸಬೇಕು.
– ಗೋವಿಂದರೆಡ್ಡಿ.
ಗದಗ ಜಿಲ್ಲಾಧಿಕಾರಿಗಳು.

 


Spread the love

LEAVE A REPLY

Please enter your comment!
Please enter your name here