HomeGadag News2030 ಗುರಿ ಸಾಕಾರಕ್ಕೆ ಭಾರತ ಸಜ್ಜು

2030 ಗುರಿ ಸಾಕಾರಕ್ಕೆ ಭಾರತ ಸಜ್ಜು

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಗದಗ: ಭಾರತವು ಸುಸ್ಥಿರ ಅಭಿವೃದ್ಧಿ ಗುರಿಗಳ (SDGs) ಅನುಷ್ಠಾನದಲ್ಲಿ ಸಾಮಾಜಿಕ, ಆರ್ಥಿಕ ಹಾಗೂ ಪರಿಸರ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಮಾಡಿದ್ದು, 2030ರ ಗುರಿ ತಲುಪುವ ವಿಶ್ವಾಸ ಮೂಡಿಸಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಎ.ಎ. ಕಂಬಾಳಿಮಠ ಹೇಳಿದರು.

ಗದಗ ಜಿಲ್ಲಾ ತರಬೇತಿ ಸಂಸ್ಥೆಯಲ್ಲಿ ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾಡಳಿತ ವ್ಯಾಪ್ತಿಯ ವಿವಿಧ ಇಲಾಖೆಗಳ ‘ಸಿ’ ವೃಂದದ ಅಧಿಕಾರಿಗಳು ಮತ್ತು ಸಿಬ್ಬಂದಿಗಾಗಿ ಆಯೋಜಿಸಿದ್ದ ಎರಡು ದಿನಗಳ ಸುಸ್ಥಿರ ಅಭಿವೃದ್ಧಿ ಗುರಿಗಳ ಪರಿಚಯಾತ್ಮಕ ತರಬೇತಿ ಕಾರ್ಯಾಗಾರದ ಸಮಾರೋಪದಲ್ಲಿ ಅವರು ಮಾತನಾಡಿದರು.

ಭಾರತದಲ್ಲಿ 24.8 ಕೋಟಿ ಜನರು ಬಹುಮಟ್ಟದ ಬಡತನದಿಂದ ಹೊರಬಂದಿರುವುದು, ಮಹತ್ವಾಕಾಂಕ್ಷಿ ಜಿಲ್ಲೆಗಳ ಅಭಿವೃದ್ಧಿ ಕಾರ್ಯಕ್ರಮ, ಉಚಿತ ಆಹಾರ ಧಾನ್ಯ ವಿತರಣೆ, ಪೋಷಣ ಅಭಿಯಾನ, ಆಯುಷ್ಮಾನ್ ಭಾರತ್ ಆರೋಗ್ಯ ಯೋಜನೆ ಹಾಗೂ ಗ್ರಾಮೀಣ ಭಾಗದಲ್ಲಿ ತಾಯಿ-ಮಗು ಆರೋಗ್ಯ ಸೇವೆಗಳ ವಿಸ್ತರಣೆಯಂತಹ ಕ್ರಮಗಳು ಸುಸ್ಥಿರ ಅಭಿವೃದ್ಧಿಯ ಮಹತ್ವದ ಮೈಲಿಗಲ್ಲುಗಳಾಗಿವೆ ಎಂದು ತಿಳಿಸಿದರು.

“ಸಮಾನತೆ ಮತ್ತು ಹಸಿರು ಭವಿಷ್ಯದತ್ತ ಭಾರತ ಮುನ್ನಡೆ”

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತರಬೇತಿ ಸಂಸ್ಥೆಯ ಪ್ರಾಚಾರ್ಯೆ ಜಯದೇವಿ ಅಡಕೇರಿಮಠ ಮಾತನಾಡಿ, ಶುದ್ಧ ಇಂಧನ, ಡಿಜಿಟಲ್ ಮೂಲಸೌಕರ್ಯ, ಪರಿಸರ ಸಂರಕ್ಷಣೆ ಹಾಗೂ ಸಾಮಾಜಿಕ ಸಮಾನತೆಯ ಮೂಲಕ ಭಾರತ ಸಮಗ್ರ ಅಭಿವೃದ್ಧಿಯತ್ತ ಸಾಗುತ್ತಿದೆ. ಸುಸ್ಥಿರ ಅಭಿವೃದ್ಧಿ ಗುರಿಗಳು ದೇಶದ ಹಸಿರು ಮತ್ತು ಸಮೃದ್ಧ ಭವಿಷ್ಯಕ್ಕೆ ಭದ್ರ ಅಡಿಪಾಯ ಹಾಕಿವೆ ಎಂದು ಹೇಳಿದರು.

ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಎಂ.ವಿ. ಚಳಗೇರಿ ಮಾತನಾಡಿ, ರಾಷ್ಟ್ರೀಯ ಗ್ರೀನ್ ಹೈಡ್ರೋಜನ್ ಮಿಷನ್, ಪಿಎಂ-ಕುಸುಮ್ ಯೋಜನೆ, ಪಿಎಂ ಸೂರ್ಯ ಘರ್ ಉಚಿತ ವಿದ್ಯುತ್ ಯೋಜನೆ, ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯ ಹಾಗೂ ಎಸ್‌ಡಿಜಿ ಇಂಡಿಯಾ ಇಂಡೆಕ್ಸ್ ಮೂಲಕ ದೇಶ ಅಭಿವೃದ್ಧಿಯ ಹೊಸ ದಿಕ್ಕಿನತ್ತ ಸಾಗುತ್ತಿದೆ ಎಂದು ವಿವರಿಸಿದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ವಸಂತ ಬಿ. ಮಡ್ಲೂರ ಮಾತನಾಡಿ, ಸುಸ್ಥಿರ ಅಭಿವೃದ್ಧಿ ಗುರಿಗಳ ಕುರಿತು ಜನಜಾಗೃತಿ ಮೂಡಿಸುವಲ್ಲಿ ಮಾಧ್ಯಮಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಹೇಳಿದರು.

ಉಪಪ್ರಾಚಾರ್ಯ ಐ.ಜೆ. ಪಾಪಣ್ಣ ಮಾತನಾಡಿ, 2030ರೊಳಗೆ ಸುಸ್ಥಿರ ಅಭಿವೃದ್ಧಿ ಗುರಿಗಳನ್ನು ಸಾಧಿಸಲು ಅಗತ್ಯ ವಾತಾವರಣ ಈಗಾಗಲೇ ನಿರ್ಮಾಣವಾಗಿದ್ದು, ಮುಂದಿನ ನಾಲ್ಕು ವರ್ಷಗಳಲ್ಲಿ ನಿರೀಕ್ಷಿತ ಸಾಧನೆ ಸಾಧ್ಯವಾಗುವ ವಿಶ್ವಾಸವಿದೆ ಎಂದು ತಿಳಿಸಿದರು.

ಮೈಸೂರು ಆಡಳಿತ ತರಬೇತಿ ಸಂಸ್ಥೆಯ ಸುಸ್ಥಿರ ಅಭಿವೃದ್ಧಿ ಗುರಿಗಳ ಕರ್ನಾಟಕ ಕೇಂದ್ರದ ಸಂಯೋಜಕ ಡಾ. ಸಿದ್ದರಾಮ ಎಚ್.ಎಂ. ವಿಶೇಷ ಉಪನ್ಯಾಸ ನೀಡಿದರು. ತರಬೇತಿ ಸಂಸ್ಥೆಯ ಬೋಧಕರಾದ ಎಸ್.ಎಂ. ಸುಣಗಾರ, ಆರ್.ಎಂ. ಹರಿಜನ, ಮಂಜುನಾಥ ಪತ್ತಾರ, ಶಂಕರ ಬಿರಾದಾರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.

“ಸುಸ್ಥಿರ ಅಭಿವೃದ್ಧಿ ಗುರಿಗಳ ಅನುಷ್ಠಾನದಲ್ಲಿ ಭಾರತ ಸಾಧಿಸಿರುವ ಪ್ರಗತಿ ವಿಶ್ವದ ಗಮನ ಸೆಳೆದಿದ್ದು, 2030ರ ಗುರಿ ತಲುಪುವ ವಿಶ್ವಾಸ ಮತ್ತಷ್ಟು ಬಲಗೊಂಡಿದೆ.”

ಎ.ಎ. ಕಂಬಾಳಿಮಠ, ಮುಖ್ಯ ಯೋಜನಾಧಿಕಾರಿ, ಜಿಲ್ಲಾ ಪಂಚಾಯತ್, ಗದಗ

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img