ಭಾರತೀಯ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ದಾಂಪತ್ಯದಲ್ಲಿ ಬಿರುಗಾಳಿ ಎದ್ದಿದ್ದು, ಸೈನಾ ನೆಹ್ವಾಲ್ ಮತ್ತು ಪರುಪಳ್ಳಿ ಕಶ್ಯಪ್ ಬೇರ್ಪಡುತ್ತಿದ್ದೇವೆ ಎಂದು ಪ್ರಕಟಿಸಿದ್ದಾರೆ. ಸೈನಾ ಅವರು ಇನ್ಸ್ಟಾಗ್ರಾಮ್ನಲ್ಲಿಈ ನಿರ್ಧಾರವನ್ನು ಪ್ರಕಟಿಸಿದ್ದು, ಕೆಲವೊಮ್ಮೆ ಜೀವನವು ನಮ್ಮನ್ನು ವಿಭಿನ್ನ ದಿಕ್ಕುಗಳಲ್ಲಿ ಕರೆದೊಯ್ಯುತ್ತದೆ.
ಸಾಕಷ್ಟು ಚಿಂತನೆ ಮತ್ತು ಪರಿಗಣನೆಯ ನಂತರ ಪರುಪಳ್ಳಿ ಕಶ್ಯಪ್ ಮತ್ತು ನಾನು ಬೇರೆಯಾಗಲು ನಿರ್ಧರಿಸಿದ್ದೇವೆ. ನಾವು, ನಮ್ಮಿಬ್ಬರಿಗಾಗಿ ಈ ಮಾರ್ಗವನ್ನು ಆರಿಸಿಕೊಳ್ಳುತ್ತಿದ್ದೇವೆ. ನಮ್ಮ ನೆನಪುಗಳಿಗೆ ಕೃತಜ್ಞನಾಗಿದ್ದೇನೆ. ನಮ್ಮ ಗೌಪ್ಯತೆಯನ್ನು ಅರ್ಥಮಾಡಿಕೊಂಡಿದ್ದಕ್ಕಾಗಿ ಮತ್ತು ಗೌರವಿಸಿದ್ದಕ್ಕಾಗಿ ಧನ್ಯವಾದಗಳು ಎಂದು ನೆಹ್ವಾಲ್ ಬರೆದುಕೊಂಡಿದ್ದಾರೆ.
ಸೈನಾ ಅವರು ಬಹಿರಂಗವಾಗಿಯೇ ಈ ನಿರ್ಧಾರ ತಿಳಿಸಿದರೆ ಕಶ್ಯಪ್ ಅವರು ಇಲ್ಲಿಯವರೆಗೆ ಯಾವುದೇ ಹೇಳಿಕೆ, ಪೋಸ್ಟ್ ಹಾಕಿಕೊಂಡಿಲ್ಲ. ನೆಹ್ವಾಲ್ ಒಲಿಂಪಿಕ್ಸ್ ಕಂಚಿನ ಪದಕ ಮತ್ತು ವಿಶ್ವದ ನಂ. 1 ಶ್ರೇಯಾಂಕ ಪಡೆದಿದ್ದರೆ ಪರುಪಳ್ಳಿ ಕಶ್ಯಪ್ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನ ಗೆದಿದ್ದರು.
ಒಂದು ದಶಕಕ್ಕೂ ಹೆಚ್ಚು ಕಾಲ ಗೆಳೆಯರಾಗಿದ್ದ ಇವರು 2018 ರಲ್ಲಿ ಮದುವೆಯಾಗಿದ್ದರು. ಕ್ರೀಡೆಯಿಂದ ನಿವೃತ್ತರಾದ ನಂತರ ಕಶ್ಯಪ್ ಈಗ ತರಬೇತಿ ನೀಡುತ್ತಿದ್ದರೆ ಸೈನಾ ನೆಹ್ವಾಲ್ ಇನ್ನೂ ನಿವೃತ್ತಿ ಹೇಳಿಲ್ಲ. 2019 ರ ರಾಷ್ಟ್ರೀಯ ಚಾಂಪಿಯನ್ಶಿಪ್ನಲ್ಲಿ ನೆಹ್ವಾಲ್ ಪಿವಿ ಸಿಂಧು ಅವರನ್ನು ಸೋಲಿಸಿದಾಗ ಮೈದಾನದಲ್ಲಿ ಕಶ್ಯಪ್ ಅವರು ಮಾರ್ಗದರ್ಶನ ನೀಡಿದ್ದರು.