ಚಿಕ್ಕೋಡಿ: ಇಸ್ರೇಲ್–ಅಮೆರಿಕ ಹಾಗೂ ಇರಾನ್ ನಡುವೆ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸಲು ಭಾರತ ಸರ್ಕಾರ ಕೂಡಲೇ ಮಧ್ಯಪ್ರವೇಶ ಮಾಡಬೇಕು ಎಂದು ಶ್ರೀಶೈಲ ಜಗದ್ಗುರು ಡಾ. ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಶ್ರೀಗಳು ಮನವಿ ಮಾಡಿದ್ದಾರೆ.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಡೂರದ ವೀರಭದ್ರ ದೇವಸ್ಥಾನದ ಕಳಸಾರೋಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು. ಕಾರ್ಯಕ್ರಮದಲ್ಲಿ ಭಾರತದ ಉಪರಾಷ್ಟ್ರಪತಿ ಜಗದೀಪ್ ಧನಖರ್ ಉಪಸ್ಥಿತರಿದ್ದರು.
ಪ್ರಸ್ತುತ ಗಲ್ಫ್ ದೇಶಗಳಲ್ಲಿ ಯುದ್ಧ ಪರಿಸ್ಥಿತಿ ನಿರ್ಮಾಣವಾಗಿರುವುದು ಆತಂಕಕಾರಿ ಬೆಳವಣಿಗೆ. ಭಾರತವು ಪ್ರಾಚೀನ ಕಾಲದಿಂದಲೂ ವಿಶ್ವಶಾಂತಿಯನ್ನು ಪ್ರತಿಪಾದಿಸುತ್ತ ಬಂದಿರುವ ನಾಡಾಗಿದ್ದು, ಜಾಗತಿಕ ಮಟ್ಟದಲ್ಲಿ ಶಾಂತಿ ನೆಲೆಸುವಂತೆ ಮಾಡಲು ಕೇಂದ್ರ ಸರ್ಕಾರ ಪ್ರಾಮಾಣಿಕ ಪ್ರಯತ್ನ ಕೈಗೊಳ್ಳಬೇಕು. ಯುದ್ಧ ನಿಲ್ಲಿಸುವ ದಿಕ್ಕಿನಲ್ಲಿ ಭಾರತ ಮಧ್ಯಸ್ಥಿಕೆ ವಹಿಸಿದರೆ ದೇಶದ ಗೌರವ ಮತ್ತು ಘನತೆ ಮತ್ತಷ್ಟು ಹೆಚ್ಚಾಗುತ್ತದೆ ಎಂದು ಹೇಳಿದರು.
ಇದೇ ವೇಳೆ ದೇಶದ ಆಂತರಿಕ ವಿಚಾರಗಳ ಕುರಿತು ಮಾತನಾಡಿದ ಶ್ರೀಗಳು, ಸಮಾನತೆ ಸಾಧಿಸುವ ನಿಟ್ಟಿನಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರುವುದು ಅತ್ಯಗತ್ಯವಾಗಿದೆ. ಈ ಕಾನೂನು ಜಾರಿಗೆ ಉಪರಾಷ್ಟ್ರಪತಿಗಳು ಮುತುವರ್ಜಿ ವಹಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.



