ಹೈದರಾಬಾದ್: ಕಳೆದ ಕೆಲವು ದಿನಗಳಿಂದ ಬೆಂಗಳೂರಿನಲ್ಲಿ ಹಲವು ಇಂಡಿಗೋ ವಿಮಾನಗಳ ಹಾರಾಟ ರದ್ದಾಗಿವೆ. ಇದರಿಂದ ಸಾವಿರಾರು ಪ್ರಯಾಣಿಕರು ವಿಮಾನ ನಿಲ್ದಾಣದಲ್ಲಿ ಪರದಾಡುತ್ತಿದ್ದಾರೆ. ಇದರ ಬೆನ್ನಲ್ಲೇ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿದ್ದು, ವಿಮಾನವನ್ನು ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ.
180 ಪ್ರಯಾಣಿಕರು ಮತ್ತು ಆರು ಸಿಬ್ಬಂದಿಯನ್ನು ಹೊತ್ತು ಮದೀನಾದಿಂದ ಹೈದರಾಬಾದ್ʼಗೆ ಬರುತ್ತಿದ್ದ 6E58 ವಿಮಾನ ಮಧ್ಯಾಹ್ನ 12:30 ರ ಸುಮಾರಿಗೆ ಅಹಮದಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಆಗಿದೆ.
ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಾಗ ವಿಮಾನವು ಆಕಾಶದಲ್ಲೇ ಇತ್ತು. ಬಳಿಕ ಅಹಮದಾಬಾದ್ ಹತ್ತಿರದ ವಿಮಾನ ನಿಲ್ದಾಣವಾಗಿದ್ದರಿಂದ, ಮುನ್ನೆಚ್ಚರಿಕೆ ಕ್ರಮವಾಗಿ ಅಧಿಕಾರಿಗಳು ವಿಮಾನವನ್ನು ಅಲ್ಲಿ ಲ್ಯಾಂಡ್ ಮಾಡುವಂತೆ ಸೂಚಿಸಿದ್ದರು ಎಂದು ತಿಳಿದು ಬಂದಿದೆ.
ಲ್ಯಾಂಡಿಂಗ್ ನಂತರ, ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಸಿಬ್ಬಂದಿ, ಸ್ಥಳೀಯ ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ವಿಮಾನವನ್ನು ಸಂಪೂರ್ಣವಾಗಿ ಪರಿಶೀಲಿಸಿದ್ದಾರೆ. ಈ ವೇಳೆ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ.



