HomeIndia NewsKPSC ಹಗರಣದಿಂದ ವಿದ್ಯಾರ್ಥಿಗಳಿಗೆ ಅನ್ಯಾಯ; ಸಿಎಂ ಉತ್ತರಿಸಲಿ ಎಂದ ಬಿಜೆಪಿ ಸಂಸದ!

KPSC ಹಗರಣದಿಂದ ವಿದ್ಯಾರ್ಥಿಗಳಿಗೆ ಅನ್ಯಾಯ; ಸಿಎಂ ಉತ್ತರಿಸಲಿ ಎಂದ ಬಿಜೆಪಿ ಸಂಸದ!

For Dai;y Updates Join Our whatsapp Group

ನವದೆಹಲಿ: NEET ಹಗರಣದ ವಿರುದ್ಧ ದೆಹಲಿಯಲ್ಲಿ ಪ್ರತಿಭಟನೆ ನಡೆಸುವ ಮುಖ್ಯಮಂತ್ರಿ, ಕರ್ನಾಟಕದಲ್ಲಿ ನಡೆಯುತ್ತಿರುವ KPSC ಹಗರಣದ ವಿರುದ್ಧ ಹೋರಾಟ ನಡೆಸುತ್ತಿರುವ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಗಮನಿಸುತ್ತಿಲ್ಲವೇ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಪ್ರಶ್ನಿಸಿದ್ದಾರೆ.

ಲೋಕಸಭೆಯಲ್ಲಿ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕಟ್ಟುನಿಟ್ಟಿನ ತಡೆ ಕಾಯ್ದೆಗೆ ತಿದ್ದುಪಡಿ ತರುವ ಮಸೂದೆ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ತೇಜಸ್ವಿ ಸೂರ್ಯ, ಕನ್ನಡದಲ್ಲೇ ಮುಖ್ಯಮಂತ್ರಿ ವಿರುದ್ಧ ವಾಗ್ದಾಳಿ ನಡೆಸಿದರು.

“ಮುಖ್ಯಮಂತ್ರಿಗಳು NEET ಹಗರಣದ ವಿರುದ್ಧ ದೆಹಲಿಗೆ ಬಂದು ಪ್ರತಿಭಟನೆ ಮಾಡುತ್ತಾರೆ. ಆದರೆ KPSC ಹಗರಣದಲ್ಲಿ ಸಾವಿರಾರು ವಿದ್ಯಾರ್ಥಿಗಳು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಹೋರಾಟ ಮಾಡುತ್ತಿದ್ದಾರೆ. ಅವರ ನೋವು ಮುಖ್ಯಮಂತ್ರಿಗಳಿಗೆ ಕಾಣುತ್ತಿಲ್ಲವೇ?” ಎಂದು ಪ್ರಶ್ನಿಸಿದರು.

KPSC ಹಗರಣ ಪ್ರಸ್ತಾಪ:

ಇತ್ತೀಚೆಗೆ KPSC ಅಧ್ಯಕ್ಷರನ್ನು ಅಮಾನತು ಮಾಡಲಾಗಿದ್ದು, ತಮ್ಮ ಮಕ್ಕಳಿಗೆ ನಕಲಿ ದಾಖಲೆಗಳನ್ನು ಸೃಷ್ಟಿಸಿರುವ ಆರೋಪದ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತೇಜಸ್ವಿ ಸೂರ್ಯ ಹೇಳಿದರು.

“ವೆಟರ್ನರಿ ಕಾಲೇಜಿನಲ್ಲಿ ಒಂದು ಸೀಟಿಗೆ ₹80 ಲಕ್ಷ ವಸೂಲಿ ಮಾಡಿದ ಹಗರಣವೂ ನಡೆದಿದೆ. ಅನ್ಯಾಯಕ್ಕೊಳಗಾದ ಪ್ರತಿಯೊಬ್ಬ ವಿದ್ಯಾರ್ಥಿಯ ಪರವಾಗಿ ನಾನು ಮಾತನಾಡುತ್ತಿದ್ದೇನೆ. ಈ ಎಲ್ಲ ವಿಚಾರಗಳ ಬಗ್ಗೆ ಮುಖ್ಯಮಂತ್ರಿ ಉತ್ತರ ನೀಡಬೇಕು” ಎಂದು ಹೇಳಿದರು.

ವಿದ್ಯಾರ್ಥಿಗಳಿಗೆ ಬೇಕಿರುವುದು ನ್ಯಾಯಯುತ ವ್ಯವಸ್ಥೆ:

ದೇಶದ ಯುವಕರು ರಾಜಕೀಯ ಆರೋಪ-ಪ್ರತ್ಯಾರೋಪಗಳನ್ನು ಗಮನಿಸುತ್ತಿಲ್ಲ. ಅವರಿಗೆ ನ್ಯಾಯಯುತ ಪರೀಕ್ಷಾ ವ್ಯವಸ್ಥೆ ಹಾಗೂ ಶಾಶ್ವತ ಪರಿಹಾರ ಬೇಕಾಗಿದೆ ಎಂದು ತೇಜಸ್ವಿ ಸೂರ್ಯ ಹೇಳಿದರು.

“ಪೇಪರ್ ಲೀಕ್‌ನಿಂದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗುತ್ತಿದೆ. ಬಡ ಮತ್ತು ಸಾಮಾನ್ಯ ಕುಟುಂಬಗಳ ಮಕ್ಕಳಿಗೆ ನ್ಯಾಯಯುತ ಪರೀಕ್ಷಾ ವ್ಯವಸ್ಥೆಯೇ ಬದುಕು ಕಟ್ಟಿಕೊಳ್ಳುವ ಪ್ರಮುಖ ಅವಕಾಶ” ಎಂದು ಹೇಳಿದರು.

ಶಿಕ್ಷಣ ವ್ಯವಸ್ಥೆಯಲ್ಲಿ ಬದಲಾವಣೆ ಅಗತ್ಯ:

ಪ್ರಸ್ತುತ ಶಿಕ್ಷಣ ಪದ್ಧತಿ ಮಕ್ಕಳನ್ನು ಕೇವಲ ಕಂಠಪಾಠ ಮಾಡಿ ಪರೀಕ್ಷೆ ಬರೆಯುವಂತೆ ಮಾಡುತ್ತಿದೆ. ಒಂದು ದಿನದ ಮೂರು ಗಂಟೆಗಳ ಪರೀಕ್ಷೆ ವಿದ್ಯಾರ್ಥಿಯ ಇಡೀ ಭವಿಷ್ಯ ನಿರ್ಧರಿಸಬಾರದು ಎಂದು ಅಭಿಪ್ರಾಯಪಟ್ಟರು.

ಪ್ರಶ್ನೆಗಳಲ್ಲಿ ಹೊಸತನ, ಬಹುಶಿಸ್ತೀಯ ಶಿಕ್ಷಣ ವ್ಯವಸ್ಥೆ ಅಗತ್ಯವಿದೆ. ಇದೇ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ 34 ವರ್ಷಗಳ ಬಳಿಕ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತಂದಿದೆ ಎಂದು ಹೇಳಿದರು.

ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ:

ಕಳೆದ ಒಂದು ವಾರದಿಂದ ವಿರೋಧ ಪಕ್ಷಗಳು ಪೇಪರ್ ಲೀಕ್ ವಿಚಾರ ಚರ್ಚೆಗೆ ಒತ್ತಾಯಿಸಿದ್ದವು. ಆದರೆ ಸರ್ಕಾರವೇ ಕಠಿಣ ಕಾನೂನು ತಿದ್ದುಪಡಿ ಮಸೂದೆ ತಂದಾಗ, ರಾಜಕೀಯ ಕಾರಣಕ್ಕಾಗಿ ವಿರೋಧ ಪಕ್ಷಗಳು ಕಲಾಪಕ್ಕೆ ಅಡ್ಡಿಪಡಿಸುತ್ತಿವೆ ಎಂದು ತೇಜಸ್ವಿ ಸೂರ್ಯ ಆರೋಪಿಸಿದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img