ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಪಟ್ಟಣದಲ್ಲಿ ಮಾ.12ರಂದು ಸರಕಾರದ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ನಡೆಯಲಿರುವ ಹಿನ್ನೆಲೆಯಲ್ಲಿ ಸಮಾವೇಶ ನಡೆಯುವ ಉಮಾ ವಿದ್ಯಾಲಯ ಹೈಸ್ಕೂಲ್ ಮೈದಾನವನ್ನು ತಹಸೀಲ್ದಾರ ವಾಸುದೇವ ಎಂ.ಸ್ವಾಮಿ ಅವರ ನೇತೃತ್ವದ ಅಧಿಕಾರಿಗಳ ತಂಡ ರವಿವಾರ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.
ಮಾ12ರಂದು ಮದ್ಯಾಹ್ನ 3 ಗಂಟೆಗೆ ನಡೆಯುವ ಈ ಸಮಾವೇಶಕ್ಕೆ ಶಿರಹಟ್ಟಿ ಹಾಗೂ ಲಕ್ಷ್ಮೇಶ್ವರ ತಾಲೂಕುಗಳ ಸುಮಾರು 8-10 ಸಾವಿರ ಫಲಾನುಭವಿಗಳು ಸೇರಲಿದ್ದು, ಕಾರ್ಯಕ್ರಮಕ್ಕೆ ಗ್ರಾಮೀಣ ಪ್ರದೇಶಗಳಿಂದ ಬರುವ ಜನರಿಗೆ ವಾಹನ ವ್ಯವಸ್ಥೆ, ಸ್ಥಳದಲ್ಲಿ ಊಟ ಮತ್ತು ಕುಡಿಯುವ ನೀರಿನ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡಲಾಗಿದೆ. ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಭದ್ರತೆಯ ದೃಷ್ಟಿಯಿಂದ ಪಾರ್ಕಿಂಗ್ ವ್ಯವಸ್ಥೆ ಸೇರಿದಂತೆ ಯಾವುದೇ ಸಮಸ್ಯೆಯಾಗದಂತೆ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ತಹಸೀಲ್ದಾರ ವಾಸುದೇವ ಎಂ.ಸ್ವಾಮಿ ಹೇಳಿದರು.
ಸರಕಾರದ ಮಹತ್ವಾಕಾಂಕ್ಷಿ ಯೋಜನೆಗಳ ಫಲಾನುಭವಿಗಳ ಈ ಸಮಾವೇಶವನ್ನು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಉದ್ಘಾಟಿಸಲಿದ್ದಾರೆ. ಸಭೆಯ ಅಧ್ಯಕ್ಷತೆಯನ್ನು ಶಾಸಕ ಡಾ.ಚಂದ್ರು ಲಮಾಣಿ ವಹಿಸಲಿದ್ದಾರೆ. ಅನೇಕ ಸಚಿವರು, ವಿಧಾನಪರಿಷತ್ ಸದಸ್ಯರು, ಸಂಸದರು ಆಗಮಿಸಲಿದ್ದು, ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್, ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ, ತಾ.ಪಂ. ಆಡಳಿತಾಧಿಕಾರಿಗಳಾದ ಜಗದೇವ ಬಿ., ಎನ್.ಕೆ. ನಿರ್ಮಲಾ, ಉಪವಿಭಾಗಾಧಿಕಾರಿ ಹಾಗೂ ಪುರಸಭೆ ಆಡಳಿತಾಧಿಕಾರಿ ಡಾ.ವೆಂಕಟೇಶ ನಾಯ್ಕ್ ಆಗಮಿಸಲಿದ್ದಾರೆ ಎಂದು ಹೇಳಿದರು.
ಈ ವೇಳೆ ಲಕ್ಷ್ಮೇಶ್ವರ ತಾ.ಪಂ ಇಓ ಕೃಷ್ಣಪ್ಪ ಧರ್ಮರ, ಶಿರಹಟ್ಟಿ ತಾ.ಪಂ ಇ.ಓ ನಿಂಗಪ್ಪ ಓಲೇಕಾರ, ಶಿರಹಟ್ಟಿ ತಹಸೀಲ್ದಾರ ಅನಿಲ ಬಡಿಗೇರ, ಸಿಪಿಐ ನಾಗರಾಜ ಮಾಡಳ್ಳಿ, ಪುರಸಭೆ ಮುಖ್ಯಾಧಿಕಾರಿ ಮಹೇಶ ಹಡಪದ, ಶಿರಹಟ್ಟಿ ಪ.ಪಂ ಮುಖ್ಯಾಧಿಕಾರಿ ಸಿದ್ದರಾಯ ಕಟ್ಟಿಮನಿ, ಪಿಎಸೈ ಈರಣ್ಣ ರಿತ್ತಿ, ಕಂದಾಯ ನಿರೀಕ್ಷಕ ಬಿ.ಎಂ. ಕಾತ್ರಾಳ ಹಾಜರಿದ್ದು, ವೇದಿಕೆ ಸಿದ್ಧತೆ, ವಾಹನ ನಿಲುಗಡೆ, ಊಟದ ವ್ಯವಸ್ಥೆ, ಕುಡಿಯುವ ನೀರು ಸೇರಿದಂತೆ ಕಾರ್ಯಕ್ರಮದ ಸಿದ್ಧತೆಗಳ ಕುರಿತು ಚರ್ಚಿಸಿ, ಪರಿಶೀಲನೆ ನಡೆಸಿದರು.