ವಿಜಯಸಾಕ್ಷಿ ಸುದ್ದಿ, ಗದಗ: ಮಹಿಳೆಯರ ಸಮಸ್ಯೆಗಳಿಗೆ ಅಧಿಕಾರಿಗಳು ಮಾನವೀಯ ದೃಷ್ಟಿಕೋನದಿಂದ ಸ್ಪಂದಿಸಿ, ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಫಲಾನುಭವಿಗಳಿಗೆ ತ್ವರಿತವಾಗಿ ತಲುಪಿಸುವಲ್ಲಿ ಹೆಚ್ಚಿನ ಆಸಕ್ತಿಯಿಂದ ಕಾರ್ಯನಿರ್ವಹಿಸಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಸೂಚಿಸಿದರು.
ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಶನಿವಾರ ನಡೆದ ಮಹಿಳಾ ಸ್ಪಂದನಾ ಸಭೆ ಹಾಗೂ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಿವಿಧ ಇಲಾಖೆಗಳ ವಸತಿ ನಿಲಯಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ಸಮರ್ಪಕವಾಗಿ ಕಲ್ಪಿಸಬೇಕು ಎಂದು ಹೇಳಿದರು.
ವಿಧವಾ ವೇತನ, ವೃದ್ಧಾಪ್ಯ ವೇತನ ಸೇರಿದಂತೆ ಸಾಮಾಜಿಕ ಭದ್ರತಾ ಯೋಜನೆಗಳ ಸೌಲಭ್ಯಗಳನ್ನು ಫಲಾನುಭವಿಗಳಿಗೆ ಯಾವುದೇ ವಿಳಂಬವಿಲ್ಲದೆ ತಲುಪಿಸಬೇಕು. ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಸುರಕ್ಷಿತ ವಾತಾವರಣ ಒದಗಿಸುವುದು ಇಲಾಖೆಯ ಜವಾಬ್ದಾರಿಯಾಗಿದ್ದು, ವಿದ್ಯಾರ್ಥಿಗಳ ಚಲನವಲನದ ಬಗ್ಗೆ ವಾರ್ಡನ್‌ಗಳು ಕಟ್ಟುನಿಟ್ಟಿನ ನಿಗಾ ವಹಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಆಧಾರ್ ನವೀಕರಣ, ಪಡಿತರ ಚೀಟಿ, ಬಡ ಮಹಿಳೆಯರಿಗೆ ಮನೆ, ವಿಧವಾ ವೇತನ, ವೃದ್ಧಾಪ್ಯ ವೇತನ ಸೇರಿದಂತೆ ವಿವಿಧ ಸಮಸ್ಯೆಗಳ ಕುರಿತು ಸಾರ್ವಜನಿಕರಿಂದ ಅರ್ಜಿಗಳನ್ನು ಸ್ವೀಕರಿಸಿದ ಡಾ. ನಾಗಲಕ್ಷ್ಮಿ ಚೌಧರಿ, ಅವುಗಳ ಶೀಘ್ರ ವಿಲೇವಾರಿಗೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿ, ಸಂಬಂಧಿಸಿದ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನ ನೀಡಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಕುಲಪತಿ ಡಾ. ಸುರೇಶ ನಾಡಗೌಡ್ರ, ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಕಾರ್ಯದರ್ಶಿ ರೂಪಾ, ಡಿವೈಎಸ್‌ಪಿ ಮುರ್ತುಜಾ ಖಾದ್ರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ರಾಧಾ ಮಣ್ಣೂರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ಎಸ್. ನೀಲಗುಂದ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಡಾ. ನಂದಾ ಹಣಬರಟ್ಟಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಎಂ.ಎನ್. ತುಂಬರಮಟ್ಟಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
“ಮಹಿಳೆಯರ ಸಮಸ್ಯೆಗಳಿಗೆ ಅಧಿಕಾರಿಗಳು ತ್ವರಿತವಾಗಿ ಸ್ಪಂದಿಸಬೇಕು. ಸರ್ಕಾರದ ಯೋಜನೆಗಳ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ವಿಳಂಬವಿಲ್ಲದೆ ತಲುಪಬೇಕು.”
– ಡಾ. ನಾಗಲಕ್ಷ್ಮಿ ಚೌಧರಿ, ಅಧ್ಯಕ್ಷೆ, ಕರ್ನಾಟಕ ರಾಜ್ಯ ಮಹಿಳಾ ಆಯೋಗ



