ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್ 2025) 47ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು 20 ಓವರ್ಗಳಲ್ಲಿ 209 ರನ್ ಕಲೆಹಾಕಿತು. ಈ ಗುರಿ ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ಪರ ವೈಭವ್ ಸೂರ್ಯವಂಶಿ 38 ಎಸೆತಗಳಲ್ಲಿ 11 ಸಿಕ್ಸ್ ಹಾಗೂ 7 ಫೋರ್ಗಳೊಂದಿಗೆ 101 ರನ್ ಬಾರಿಸಿದ್ದರು. ಈ ಸ್ಪೋಟಕ ಸೆಂಚುರಿ ನೆರವಿನಿನೊಂದಿಗೆ ರಾಜಸ್ಥಾನ್ ರಾಯಲ್ಸ್ 15.5 ಓವರ್ಗಳಲ್ಲಿ 212 ರನ್ ಬಾರಿಸಿ 8 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ.
ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ವೈಭವ್ ಕೇವಲ 35 ಎಸೆತಗಳಲ್ಲಿ ಶತಕ ಸಿಡಿಸಿದ್ದಾರೆ. ಈ ಶತಕದೊಂದಿಗೆ ಐಪಿಎಲ್ ಇತಿಹಾಸದಲ್ಲೇ ಶತಕ ಸಿಡಿಸಿದ ಅತ್ಯಂತ ಕಿರಿಯ ಬ್ಯಾಟರ್ ಎನಿಸಿಕೊಂಡಿದ್ದಾರೆ. ಹಾಗೆಯೇ ಐಪಿಎಲ್ನಲ್ಲಿ ಅತೀ ವೇಗವಾಗಿ ಶತಕ ಸಿಡಿಸಿದ ಭಾರತೀಯ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಗೆಲುವಿನ ನಂತರ ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್ನಲ್ಲಿ ಮಾತನಾಡಿದ ವೈಭವ್ ಸೂರ್ಯವಂಶಿ, ‘‘ಇದು ಅದ್ಭುತವೆನಿಸುತ್ತದೆ. ಐಪಿಎಲ್‌ನ ಮೂರು ಇನ್ನಿಂಗ್ಸ್‌ಗಳಲ್ಲಿ ಇದು ನನ್ನ ಮೊದಲ ಶತಕ. ಕಳೆದ ಮೂರು-ನಾಲ್ಕು ತಿಂಗಳುಗಳಿಂದ ನಾನು ಇದಕ್ಕಾಗಿ ಶ್ರಮಿಸುತ್ತಿದ್ದೆ ಮತ್ತು ಅದರ ಫಲಿತಾಂಶಗಳು ನನಗೆ ಸಿಕ್ಕಿವೆ. ನಾನು ಮೈದಾನದತ್ತ ಹೆಚ್ಚು ನೋಡುವುದಿಲ್ಲ, ನಾನು ಚೆಂಡಿನ ಮೇಲೆ ಮಾತ್ರ ಗಮನ ಹರಿಸುತ್ತೇನೆ’’ ಎಂದು ಹೇಳಿದ್ದಾರೆ.
ಯಶಸ್ವಿ ಜೈಸ್ವಾಲ್ ಅವರೊಂದಿಗಿನ ಶತಕದ ಜೊತೆಯಾಟದ ಬಗ್ಗೆ ಮಾತನಾಡಿದ ಅವರು, ‘‘ಅವರೊಂದಿಗೆ ಬ್ಯಾಟಿಂಗ್ ಮಾಡುವುದು ನನಗೆ ಆತ್ಮವಿಶ್ವಾಸವನ್ನು ನೀಡುತ್ತದೆ. ಏಕೆಂದರೆ ಅವರು ತುಂಬಾ ಸಕಾರಾತ್ಮಕ ವಿಷಯಗಳನ್ನು ಹೇಳುತ್ತಾರೆ ಮತ್ತು ನನಗೆ ಸಲಹೆಯನ್ನೂ ನೀಡುತ್ತಾರೆ. ಇದು ಬ್ಯಾಟಿಂಗ್ ಅನ್ನು ಸುಲಭಗೊಳಿಸುತ್ತದೆ’’ ಎಂದರು.