ಬೆಂಗಳೂರು: ರಾಜ್ಯದ ಗಡಿ ಜಿಲ್ಲೆಯಾದ ಬೆಳಗಾವಿಯನ್ನು ಅಭಿವೃದ್ಧಿಪರ ಕೇಂದ್ರವಾಗಿ ರೂಪಿಸಲು ಐಟಿ ಪಾರ್ಕ್ ಹಾಗೂ ಸೆಮಿಕಂಡಕ್ಟರ್ ಪಾರ್ಕ್ ಸ್ಥಾಪನೆಗೆ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್, ಐಟಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ ಖರ್ಗೆ ತಿಳಿಸಿದ್ದಾರೆ.
ವಿಧಾನಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಶಾಸಕ ಅಭಯ ಪಾಟೀಲ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಬೆಳಗಾವಿಯಲ್ಲಿ ಈ ಯೋಜನೆಗಳನ್ನು ಜಾರಿಗೆ ತಂದು ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ ಸೃಷ್ಟಿಸುವ ಉದ್ದೇಶ ಸರ್ಕಾರಕ್ಕಿದೆ ಎಂದು ಹೇಳಿದರು.
ಐಟಿ ಕ್ಷೇತ್ರದ ಅಭಿವೃದ್ಧಿಗಾಗಿ ಪ್ಲಗ್-ಅಂಡ್-ಪ್ಲೇ ಮೂಲಸೌಕರ್ಯ, ಸ್ಟಾರ್ಟ್‌ಅಪ್ ಮತ್ತು ನಾವೀನ್ಯತೆ ಪರಿಸರ ಬಲಪಡಿಸುವ ಕಾರ್ಯಕ್ರಮಗಳು, ಸೀಡ್ ಫಂಡ್ ಬೆಂಬಲ, ಟೆಕ್ಸಿಲರೇಷನ್ ಹಾಗೂ ವಿವಿಧ ಉದ್ಯಮಶೀಲತೆ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ವಿವರಿಸಿದರು.
ರಾಜೀವ್ ಗಾಂಧಿ ಉದ್ಯಮಶೀಲತೆ ಯೋಜನೆ, ಎಲಿವೇಟ್ ಕಾರ್ಯಕ್ರಮ, ಮಹಿಳಾ ಉದ್ಯಮಶೀಲತೆ ಉತ್ತೇಜನ ಹಾಗೂ ಗ್ರಾಸ್‌ರೂಟ್ ಇನೋವೇಷನ್ ಕಾರ್ಯಕ್ರಮಗಳ ಮೂಲಕ ಹೊಸ ಆವಿಷ್ಕಾರಗಳಿಗೆ ಪ್ರೋತ್ಸಾಹ ನೀಡಲಾಗುತ್ತಿದೆ ಎಂದರು.
ಬೆಳಗಾವಿಯಲ್ಲಿ ಐಟಿ ಮತ್ತು ಸೆಮಿಕಂಡಕ್ಟರ್ ಪಾರ್ಕ್ ಸ್ಥಾಪನೆಗೆ ಅಗತ್ಯವಾದ ಜಮೀನು ಹಸ್ತಾಂತರಕ್ಕೆ ಕೇಂದ್ರ ರಕ್ಷಣಾ ಇಲಾಖೆಗೆ ಹಲವು ಬಾರಿ ಪತ್ರ ಬರೆದಿದ್ದರೂ ಇನ್ನೂ ಜಮೀನು ಹಸ್ತಾಂತರವಾಗಿಲ್ಲ. ಈ ಸಂಬಂಧ ಸರ್ಕಾರ ನಿರಂತರವಾಗಿ ಪ್ರಯತ್ನ ಮುಂದುವರಿಸುತ್ತಿದೆ ಎಂದು ಸಚಿವರು ತಿಳಿಸಿದರು.



