ವಿಜಯಸಾಕ್ಷಿ ಸುದ್ದಿ, ಮುಳಗುಂದ: ಪಟ್ಟಣದ ಎಸ್‌ಜೆಜೆಎಂ ಪದವಿಪೂರ್ವ ಮಾಹಾವಿದ್ಯಾಲಯದಲ್ಲಿ ಎಪ್ರಿಲ್ 19ರಂದು ಜಿಲ್ಲಾ ಮಟ್ಟದ ಜನತಾ ದರ್ಶನ ಹಮ್ಮಿಕೊಂಡಿದ್ದು, ಸಾರ್ವಜನಿಕರಲ್ಲಿ ನಿರೀಕ್ಷೆಗಳನ್ನು ಹೆಚ್ಚಿಸಿದೆ.
ಪಟ್ಟಣದಲ್ಲಿ ಮೊಟ್ಟ ಮೊದಲ ಬಾರಿಗೆ ಗದಗ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲರ ವಿಶೇಷ ಕಾಳಜಿಯಿಂದ ಮುಳಗುಂದ ಪಟ್ಟಣದಲ್ಲಿ ಜಿಲ್ಲಾ ಮಟ್ಟದ ಜನತಾ ದರ್ಶನ ಹಮ್ಮಿಕೊಳ್ಳಲಾಗಿದೆ. ಜಿಲ್ಲಾಡಳಿತದ ಎಲ್ಲಾ ಇಲಾಖೆಗಳು ಭಾಗವಹಿಸುವುದರಿಂದ ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸೂಕ್ತ ವೇದಿಕೆ ನಿರ್ಮಾಣಗೊಂಡಿದ್ದು, ಸಾರ್ವಜನಿಕರು ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು.
ಪಟ್ಟಣದ ಶಾಶ್ವತ ಕುಡಿಯುವ ನೀರು, ಸಮುದಾಯ ಆರೋಗ್ಯ ಕೇಂದ್ರ, ಕ್ರೀಡಾಪಟುಗಳಿಗೆ ಕ್ರೀಡಾಂಗಣ, ಈಜುಕೊಳ, ನಾಡ ಕಛೇರಿ, ವಿದ್ಯುತ್ ಗ್ರಿಡ್ ಸೇರಿದಂತೆ ಹಲವಾರು ಸಮಸ್ಯೆಗಳಿಗೆ ಪರಿಹಾರದ ನಿರೀಕ್ಷೆಯಲ್ಲಿದ್ದಾರೆ.
ಪಟ್ಟಣದ ಹೃದಯ ಭಾಗದಲ್ಲಿರುವ ಅಬ್ಬಗೇರಿ ಕೆರೆಯಲ್ಲಿ ದೋಣಿ ವಿಹಾರಕ್ಕೆ ಚಾಲನೆ, ಇಂದಿರಾ ಕ್ಯಾಂಟೀನ್ ಉದ್ಘಾಟನೆ, ಪೌರ ಕಾರ್ಮಿಕರ ವಿಶ್ರಾಂತಿ ಗೃಹ ಹಾಗೂ ವಿವಿಧ ಮಳಿಗೆಗಳ ಉದ್ಘಾಟನೆಯನ್ನು ಇದೇ ಸಂದರ್ಭದಲ್ಲಿ ಸಚಿವರು ನೆರವೇರಿಸಲಿದ್ದಾರೆ.