ವಿಜಯಸಾಕ್ಷಿ ಸುದ್ದಿ, ಕೊಪ್ಪಳ: ಕರ್ನಾಟಕ ಮಾಧ್ಯಮ ಅಕಾಡೆಮಿಯ 2025ನೇ ಸಾಲಿನ ವಿವಿಧ ದತ್ತಿನಿಧಿ ಪ್ರಶಸ್ತಿಗಳ ಪೈಕಿ `ಪ್ರಜಾ ಸಂದೇಶ ದತ್ತಿ ಪ್ರಶಸ್ತಿ’ಗೆ ಟಿವಿ 5 ವಾಹಿನಿ ಕೊಪ್ಪಳ ಜಿಲ್ಲಾ ವರದಿಗಾರ ನಾಗರಾಜ್ ವೈ ಆಯ್ಕೆಯಾಗಿದ್ದಾರೆ.
ಬೆಂಗಳೂರಿನ ಮಾಧ್ಯಮ ಅಕಾಡೆಮಿ ಕಚೇರಿಯಲ್ಲಿ ಅಕಾಡೆಮಿಯ ಅಧ್ಯಕ್ಷರಾದ ಆಯೇಶಾ ಖಾನಂ ಅವರ ಅಧ್ಯಕ್ಷತೆಯಲ್ಲಿ ನಡೆದ ಮಾಧ್ಯಮ ಅಕಾಡೆಮಿಯ ವಾರ್ಷಿಕ ಪ್ರಶಸ್ತಿ ಹಾಗೂ ವಿವಿಧ ದತ್ತಿ ಪ್ರಶಸ್ತಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಪ್ರಜಾ ಸಂದೇಶ ದತ್ತಿ ಪ್ರಶಸ್ತಿಗೆ ನಾಗರಾಜ್ ಅವರನ್ನು ಆಯ್ಕೆ ಮಾಡಲಾಗಿದೆ.
ಕಳೆದ ಹಲವು ವರ್ಷಗಳಿಂದ ದೃಶ್ಯ ಹಾಗೂ ಮುದ್ರಣ ಮಾಧ್ಯಮದಲ್ಲಿ ಸೇವೆ ಸಲ್ಲಿಸುತ್ತಿರುವ ಇವರು, ಕೊಪ್ಪಳ ತಾಲೂಕಿನ ಚಿಲಕಮುಖಿ ಗ್ರಾಮದಲ್ಲಿ ಯುವಕನೊಬ್ಬ ಅನ್ಯಜಾತಿ ಯುವತಿಯನ್ನು ಮದುವೆಯಾಗಿರುವ ಕಾರಣಕ್ಕೆ 8 ವರ್ಷಗಳ ಕಾಲ ಬಹಿಷ್ಕಾರ ಹಾಕಿದ ಘಟನೆ ಬಗ್ಗೆ ಟಿವಿ 5 ವಾಹಿನಿಯಲ್ಲಿ ವಿಶೇಷ ವರದಿ ಮಾಡಿದ್ದರು.
ಕೊಪ್ಪಳ ಜಿಲ್ಲೆಯ ಪತ್ರಕರ್ತ ಬಳಗ ಹರ್ಷ ವ್ಯಕ್ತಪಡಿಸಿದ್ದು ಅರ್ಹ ಪತ್ರಕರ್ತನಿಗೆ ಪ್ರಶಸ್ತಿ ದೊರಕಲು ಕಾರಣರಾದ ಮಾಧ್ಯಮ ಅಕಾಡೆಮಿ ಅಧ್ಯಕ್ಷರಿಗೂ, ಮಾಧ್ಯಮ ಅಕಾಡೆಮಿ ಸದಸ್ಯರು, ಕೊಪ್ಪಳದ ಹಿರಿಯ ಪತ್ರಕರ್ತರಾದ ನಿಂಗಜ್ಜ ಅವರಿಗೆ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರು ಹಾಗೂ ಅಕಾಡೆಮಿ ಸದಸ್ಯರಾದ ಶಿವಾನಂದ ತಗಡೂರು ಅವರಿಗೆ ಕೊಪ್ಪಳ ಜಿಲ್ಲೆಯ ಪತ್ರಕರ್ತರು ಅಭಿನಂದನೆ ತಿಳಿಸಿದ್ದಾರೆ.
ಪ್ರಶಸ್ತಿಯು ಸಾಮಾಜಿಕವಾಗಿ ಹೆಚ್ಚಿನ ಜವಾಬ್ದಾರಿ ನೀಡಿದೆ. ನಾನು ಮಾಡಿದ ವರದಿ ಪರಿಗಣಿಸಿ ಪ್ರಶಸ್ತಿ ನೀಡಿದ್ದಕ್ಕೆ ಸರ್ಕಾರಕ್ಕೆ ಹಾಗೂ ಮಾಧ್ಯಮ ಅಕಾಡೆಮಿಗೆ ನಾನು ಸದಾ ಚಿರಋಣಿಯಾಗಿದ್ದೇನೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಅರ್ಹರನ್ನು ಗುರುತಿಸುತ್ತಿರುವ ಅಕಾಡೆಮಿ ಸದಸ್ಯರು, ಹಿರಿಯ ಪತ್ರಕರ್ತ ಕೆ. ನಿಂಗಜ್ಜ, ಮಾಧ್ಯಮ ಅಕಾಡೆಮಿ ಸದಸ್ಯರಾದ ಶಿವಾನಂದ ತಗಡೂರು, ಅಕಾಡೆಮಿಯ ಅಧ್ಯಕ್ಷರಾದ ಆಯೇಶಾ ಖಾನಂ, ಕಾರ್ಯದರ್ಶಿ ಸಹನಾ ಎಂ ಸೇರಿದಂತೆ ಅಕಾಡೆಮಿಯ ಎಲ್ಲಾ ಸದಸ್ಯರಿಗೆ ನಾಗರಾಜ್ ವೈ ಧನ್ಯವಾದಗಳನ್ನು ತಿಳಿಸಿದ್ದಾರೆ.



