ಬೆಂಗಳೂರು: ಕೆ.ಆರ್. ನಗರ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್.ಡಿ.ರೇವಣ್ಣಗೆ ಹೈಕೋರ್ಟ್ ಶಾಕ್ ಕೊಟ್ಟಿದೆ. ಪ್ರಕರಣ ರದ್ದುಪಡಿಸುವಂತೆ ಸಲ್ಲಿಸಿದ್ದ ಹೆಚ್.ಡಿ.ರೇವಣ್ಣ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ ಮಹತ್ವದ ಆದೇಶ ಹೊರಡಿಸಿದೆ.
ವಿಚಾರಣೆ ವೇಳೆ ಹೆಚ್.ಡಿ.ರೇವಣ್ಣ ಪರ ವಕೀಲರು ವಾದ ಮಂಡನೆಗೆ ಕಾಲಾವಕಾಶ ಕೋರಿದರು. ಹಿರಿಯ ವಕೀಲರು ಮ್ಯಾಜಿಸ್ಟ್ರೇಟ್ ಕೋರ್ಟ್‌ನಲ್ಲಿ ತೊಡಗಿಸಿಕೊಂಡಿರುವ ಕಾರಣವನ್ನು ಉಲ್ಲೇಖಿಸಿ ಮನವಿ ಸಲ್ಲಿಸಲಾಯಿತು. ಆದರೆ, ಈ ಮನವಿಗೆ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿತು.
ಈ ಹಿನ್ನೆಲೆಯಲ್ಲಿ, ಹೆಚ್.ಡಿ.ರೇವಣ್ಣ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸದಂತೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಹೈಕೋರ್ಟ್ ತೆರವುಗೊಳಿಸಿದೆ.ಈ ಆದೇಶದಿಂದಾಗಿ ಕೆ.ಆರ್. ನಗರ ಮಹಿಳೆ ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಸಂಕಷ್ಟ ಮತ್ತಷ್ಟು ಹೆಚ್ಚಾಗಿದೆ.



