ಬೆಂಗಳೂರು: ತುಮಕೂರಿನಲ್ಲಿ ನಡೆದ ಕಬಡ್ಡಿ ಪಂದ್ಯಾವಳಿಯಲ್ಲಿ ಅಕ್ರಮ ಬೆಟ್ಟಿಂಗ್ ಆರೋಪ ಸಂಬಂಧ ಗೃಹ ಸಚಿವ ಡಾ. ಜಿ. ಪರಮೇಶ್ವರ್ ವಿರುದ್ಧ ಎಫ್‌ಐಆರ್ ದಾಖಲಿಸಲು ಆದೇಶಿಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ.
ಈ ಸಂಬಂಧ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುನೀಲ್ ದತ್ತ ಯಾದವ್ ಅವರ ಪೀಠ, ಸರ್ಕಾರ ಮತ್ತು ದೂರುದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ಮುಂದೂಡಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ತುಮಕೂರಿನ ಕಬಡ್ಡಿ ಪಂದ್ಯಾವಳಿಯಲ್ಲಿ ಬೆಟ್ಟಿಂಗ್ ಕುರಿತು ಮಾಧ್ಯಮ ವರದಿಗಳ ಆಧಾರದಲ್ಲಿ ದೂರು ನೀಡಲಾಗಿದೆ ಎಂದು ವಾದಿಸಿದರು. ದೂರು ಸ್ವೀಕರಿಸಲು ಪೊಲೀಸರು ನಿರಾಕರಿಸಿದ ಹಿನ್ನೆಲೆಯಲ್ಲಿ ಖಾಸಗಿ ದೂರು ಸಲ್ಲಿಸಲಾಗಿದ್ದು, ಅದರ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲು ಸೂಚಿಸಲಾಗಿದೆ. ಆದ್ದರಿಂದ ಆ ಆದೇಶವನ್ನು ರದ್ದುಪಡಿಸಬೇಕು ಎಂದು ಕೋರಿದರು.
ಇದಕ್ಕೆ ಪ್ರತಿಯಾಗಿ ದೂರುದಾರರ ಪರ ವಕೀಲರು, ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಪತ್ರಿಕಾ ವರದಿಗಳು ಮತ್ತು ವಿಡಿಯೋ ದೃಶ್ಯಗಳನ್ನು ಸಲ್ಲಿಸಲಾಗಿದೆ. ಅವುಗಳನ್ನು ಪರಿಶೀಲಿಸಿದ ಬಳಿಕವೇ ಆದೇಶ ನೀಡಲಾಗಿದೆ ಎಂದು ವಾದಿಸಿದರು.
ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಭಾರತೀಯ ನ್ಯಾಯ ಸಂಹಿತೆ 112ನೇ ವಿಧಿ ಅನ್ವಯ ಪ್ರಕರಣ ದಾಖಲಾಗಬೇಕಾದರೆ, ಆರೋಪಿತರು ಬೆಟ್ಟಿಂಗ್ ಗುಂಪಿನ ಸದಸ್ಯರಾಗಿರಬೇಕು ಎಂದು ಸೂಚಿಸಿತು. ಆದರೆ ಅರ್ಜಿದಾರರು ಅಂತಹ ಯಾವುದೇ ಗುಂಪಿನ ಸದಸ್ಯರಾಗಿದ್ದಾರೆ ಎಂಬುದಕ್ಕೆ ಸಾಕ್ಷ್ಯವಿಲ್ಲ ಎಂದು ಪ್ರಶ್ನಿಸಿತು.
ಇದೇ ವೇಳೆ, ಪೊಲೀಸರು ದೂರು ಸ್ವೀಕರಿಸಲು ಏಕೆ ನಿರಾಕರಿಸಿದರು ಎಂಬುದನ್ನು ಪರಿಶೀಲಿಸದೇ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಆದೇಶ ನೀಡಿರುವುದು ನಿಯಮಬಾಹಿರವಾಗಿದೆ ಎಂದು ಅಭಿಪ್ರಾಯಪಟ್ಟ ನ್ಯಾಯಪೀಠ, ಎಫ್‌ಐಆರ್‌ಗೆ ತಾತ್ಕಾಲಿಕ ತಡೆ ನೀಡಿದೆ.
ಪ್ರಕರಣದ ಹಿನ್ನೆಲೆ:
2025ರ ಅಕ್ಟೋಬರ್ 19ರಂದು ತುಮಕೂರಿನಲ್ಲಿ ನಡೆದ ವಿದ್ಯಾರ್ಥಿಗಳ ಕಬಡ್ಡಿ ಪಂದ್ಯಾವಳಿಯಲ್ಲಿ, ದಕ್ಷಿಣ ಕನ್ನಡ ತಂಡ ಗೆಲ್ಲಲಿದೆ ಎಂದು ಹೇಳಿ ಜಿಲ್ಲಾಧಿಕಾರಿಯೊಂದಿಗೆ 500 ರೂಪಾಯಿ ಬೆಟ್ಟಿಂಗ್ ಕಟ್ಟಿದ್ದಾಗಿ ಪರಮೇಶ್ವರ್ ಹೇಳಿಕೆ ನೀಡಿದ್ದರು. ಬಳಿಕ ಈ ಕುರಿತು ಖಾಸಗಿ ದೂರು ದಾಖಲಾಗಿದ್ದು, ವಿಶೇಷ ನ್ಯಾಯಾಲಯ ಎಫ್‌ಐಆರ್ ದಾಖಲಿಸಲು ಆದೇಶಿಸಿತ್ತು.
ಈ ಆದೇಶವನ್ನು ಪ್ರಶ್ನಿಸಿ ಪರಮೇಶ್ವರ್ ಹೈಕೋರ್ಟ್ ಮೊರೆ ಹೋಗಿದ್ದು, ತನ್ನ ವಿರುದ್ಧ ಯಾವುದೇ ದೃಢವಾದ ಸಾಕ್ಷ್ಯವಿಲ್ಲ ಮತ್ತು ಇದು ಕಾನೂನು ಪ್ರಕ್ರಿಯೆಯ ದುರುಪಯೋಗವಾಗಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.



