ಕಲಬುರಗಿ: ಸಿಇಟಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಪ್ರಕರಣ ರಾಜ್ಯದಾದ್ಯಂತ ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದು, ಹೈಕೋರ್ಟ್ ಮೆಟ್ಟಿಲೇರಿದೆ. ಇದೀಗ ನೀಟ್ ಪರೀಕ್ಷೆಯಲ್ಲೂ ಅಧಿಕಾರಿಗಳು ಬ್ರಾಹ್ಮಣ ವಿದ್ಯಾರ್ಥಿಯ ಜನಿವಾರ ತೆಗೆಸಿದ್ದಾರೆ.
ಕಲಬುರಗಿಯ ಸೇಂಟ್ ಮೇರಿ ಶಾಲೆಯಲ್ಲಿ ನಡೆದ ನೀಟ್ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿ ಶ್ರೀಪಾದ್ ಪಾಟೀಲ್ ಅವರ ಜನಿವಾರವನ್ನು ಅಧಿಕಾರಿಗಳು ತೆಗೆಸಿ, ಪರೀಕ್ಷೆ ಬರೆಯಲು ಅವಕಾಶ ನೀಡಿದ್ದಾರೆ. ಪರೀಕ್ಷಾ ಕೇಂದ್ರದ ಒಳಗೆ ಹೋಗುವಾಗ ಶ್ರೀಪಾದ್ ಪಾಟೀಲ್ ಅವರಿಗೆ ಜನಿವಾರ ತೆಗೆಯುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ಸೂಚನೆಯಂತೆ ಶ್ರೀಪಾದ್ ಪಾಟೀಲ್ ಅವರು ಜನಿವಾರ ತೆಗೆದು ಪರೀಕ್ಷಾ ಕೇಂದ್ರಕ್ಕೆ ತೆರಳಿ, ಪರೀಕ್ಷೆ ಬರೆದಿದ್ದಾರೆ. ಈ ಘಟನೆಯನ್ನು ಖಂಡಿಸಿ ಪರೀಕ್ಷಾ ಕೇಂದ್ರದ ಮುಂದೆ ಬ್ರಾಹ್ಮಣ ಸಮಾಜ ಪ್ರತಿಭಟನೆ ನಡೆಸಿತು. ಜನಿವಾರ ತೆಗೆಸಿದ ಅಧಿಕಾರಿಯನ್ನು ಅಮಾನತು ಮಾಡುವಂತೆ ಬ್ರಾಹ್ಮಣ ಸಮುದಾಯ ಒತ್ತಾಯಿಸಿದೆ.