ಬೆಂಗಳೂರು:- ಮುತ್ಸದ್ದಿ ನಾಯಕನ ರೀತಿ ರಾಜ್ಯದ ಹಿತರಕ್ಷಣೆಗೆ ದೇವೇಗೌಡ ಮುಂದಾಗಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರಿಗೆ ಮನವಿ ಮಾಡಿದ್ದಾರೆ.
ಮಾಧ್ಯಮ ಪ್ರಕಟಣೆ ಹೊರಡಿಸಿದ ಸಿದ್ದರಾಮಯ್ಯ ಅವರು, ನೀರಾವರಿ ವಿಚಾರದಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯದ ವಿರುದ್ಧ ಪಕ್ಷಾತೀತವಾಗಿ ಹೋರಾಡಲು ಸಿದ್ಧ ಎಂಬ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಹೇಳಿಕೆಯನ್ನು ನಾನು ಸಂಪೂರ್ಣ ಸ್ವಾಗತಿಸುತ್ತೇನೆ ಎಂದರು.
ವೈಯಕ್ತಿಕವಾಗಿ ಇದು ನನ್ನ ಅಭಿಪ್ರಾಯವಾಗಿದ್ದು, ನೆಲ-ಜಲ-ಭಾಷೆ ವಿಚಾರದಲ್ಲಿ ನಾನು ಸದಾ ಕನ್ನಡಿಗನಾಗಿ ನಡೆದುಕೊಂಡಿದ್ದೇನೆಯೇ ಹೊರತು ರಾಜಕಾರಣಿಯಾಗಿ ಅಲ್ಲ ಎನ್ನುವುದನ್ನು ಹಿರಿಯರಾದ ದೇವೇಗೌಡರ ಗಮನಕ್ಕೆ ತರಬಯಸುತ್ತೇನೆ. ಹತ್ತು ದಿನಗಳ ಅವಧಿಯಲ್ಲಿ 15,000 ಕ್ಯುಸೆಕ್ಸ್ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಬೇಕೆಂದು 2016ರ ಸೆಪ್ಟೆಂಬರ್ ತಿಂಗಳಲ್ಲಿ ಸುಪ್ರೀಂ ಕೋರ್ಟ್ ಆದೇಶ ನೀಡಿದಾಗ ಉದ್ಭವವಾದ ಬಿಕ್ಕಟ್ಟಿನ ಸಂದರ್ಭದಲ್ಲಿ ಸಿಎಂ ನಾನು ನಿಮ್ಮ ಮನೆಗೆ ಬಂದು ಕೈಹಿಡಿದು ಕರೆದುಕೊಂಡು ಬಂದು ಸರ್ವಪಕ್ಷಗಳ ಸಭೆ ನಡೆಸಿದ್ದು ನಿಮಗೆ ನೆನಪಿರಬಹುದೆಂದು ಭಾವಿಸಿದ್ದೇನೆ ಎಂದರು.
ಹಿಂದೆಲ್ಲ ರಾಜ್ಯದ ಹಿತಾಸಕ್ತಿಯ ರಕ್ಷಣೆಯ ಪ್ರಶ್ನೆ ಎದುರಾದಾಗ ಒಬ್ಬ ಮುತ್ಸದ್ದಿಯಾಗಿ ಇದಕ್ಕಿಂತಲೂ ಮುಖ್ಯವಾಗಿ ಒಬ್ಬ ಹೆಮ್ಮೆಯ ಕನ್ನಡಿಗನಾಗಿ ರಾಜ್ಯಕ್ಕೆ ನ್ಯಾಯ ಕೊಡಲು ನೀವು ಹೋರಾಟ ನಡೆಸಿದ್ದನ್ನು ರಾಜ್ಯದ ಜನರು ಗಮನಿಸಿದ್ದಾರೆ. ಆದರೆ ಇತ್ತೀಚೆಗೆ ನೀವು ಮತ್ತು ನಿಮ್ಮ ಪಕ್ಷ ಕೇಂದ್ರ ಸರ್ಕಾರದ ವಕ್ತಾರರಂತೆ ಪಕ್ಷಪಾತಿಯಾಗಿ ವರ್ತಿಸುತ್ತಿರುವುದನ್ನು ಕೂಡಾ ನನ್ನನ್ನೂ ಸೇರಿದಂತೆ ಏಳುಕೋಟಿ ಕನ್ನಡಿಗರು ಗಮನಿಸುತ್ತಿದ್ದಾರೆ ಎಂದು ವಾಗ್ದಾಳಿ ಮಾಡಿದರು.
ಕೇಂದ್ರ ಸಂಪುಟದಲ್ಲಿ ಮಗನನ್ನು ಸಚಿವನನ್ನಾಗಿ ಮಾಡಲು ಗೌಡರು ಇಷ್ಟೊಂದು ರಾಜಿ ಮಾಡಿಕೊಳ್ಳುವ ಅಗತ್ಯ ಇತ್ತಾ? ಎಂದು ಜನ ಪ್ರಶ್ನಿಸುತ್ತಿದ್ದಾರೆ. ನೀರಾವರಿ ವಿಚಾರದಲ್ಲಿ ನ್ಯಾಯಪಕ್ಷಪಾತಿಯಾಗಿ ಕರ್ನಾಟಕದ ಹಿತಾಸಕ್ತಿಯ ರಕ್ಷಣೆ ಮಾಡಬೇಕಾಗಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಸರ್ಕಾರ ಸತತವಾಗಿ ಕನ್ನಡಿಗರ ಹಿತವನ್ನು ಬಲಿಗೊಡಲು ಹೊರಟಿರುವುದನ್ನು ದೇವೇಗೌಡರಿಗೆ ನಾನು ಬಿಡಿಸಿ ಹೇಳಬೇಕಾಗಿಲ್ಲ ಎಂದು ತಿಳಿದುಕೊಂಡಿದ್ದೇನೆ ಎಂದು ಹೇಳಿದರು.
ಕೃಷ್ಣಾ ಮತ್ತು ಕಾವೇರಿ ನದಿಗಳ ಜೋಡಣೆಯ ನೀರಾವರಿ ಯೋಜನೆಯ ಬಗ್ಗೆ ನಿಮ್ಮ ಕಳಕಳಿಗೆ ನಮ್ಮ ಸಂಪೂರ್ಣ ಸಹಕಾರ ಇದೆ. ಈ ವಿಷಯದಲ್ಲಿ ನೀವು ನಡೆಸುವ ಹೋರಾಟಕ್ಕೆ ನಾನು ಮತ್ತು ಡಿ.ಕೆ.ಶಿವಕುಮಾರ್ ಮಾತ್ರವಲ್ಲ, ಸಮಸ್ತ ಕರ್ನಾಟಕ ನಿಮ್ಮ ಜೊತೆ ಇರುತ್ತದೆ. ಕರ್ನಾಟಕ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯಗಳ ಸರಮಾಲೆಯನ್ನು ಸದ್ಯ ನೀರಾವರಿ ಕ್ಷೇತ್ರಕ್ಕೆ ಅಷ್ಟೇ ಸೀಮಿತಗೊಳಿಸುತ್ತಿದ್ದೇನೆ. ಇನ್ನು ತೆರಿಗೆ ಹಂಚಿಕೆ, ಪ್ರಕೃತಿ ವಿಕೋಪ ಪರಿಹಾರ, ಕುಡಿಯುವ ನೀರು ಪೂರೈಕೆ, ರೈಲ್ವೆ ಯೋಜನೆಗಳ ವಿಚಾರದಲ್ಲಿಯೂ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಕರ್ನಾಟಕವನ್ನು ಶತ್ರು ರಾಜ್ಯದಂತೆ ನಡೆಸಿಕೊಳ್ಳುತ್ತಿದೆ. ಈ ವಿಚಾರಗಳು ಕೂಡಾ ನಿಮಗೆ ಗೊತ್ತಿರುವುದರಿಂದ ಸಂಸತ್‌ನಲ್ಲಿ ಈ ಬಗ್ಗೆ ನೀವು ದನಿ ಎತ್ತುತ್ತೀರಿ ಎಂದು ರಾಜ್ಯದ ಜನರು ನಿರೀಕ್ಷಿಸಿದ್ದರು ಎಂದು ತೀಕ್ಷ್ಣವಾಗಿ ತಿರುಗೇಟು ನೀಡಿದರು.