ಬೆಂಗಳೂರು: 2026ರ ಬಜೆಟ್‌ನಲ್ಲಿ ಕರ್ನಾಟಕದ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ. ಬೆಂಗಳೂರಿನ ಐತಿಹಾಸಿಕ ವಿಕ್ಟೋರಿಯಾ ಆಸ್ಪತ್ರೆಗೆ ಇನ್ನು ಮುಂದೆ “ಶಾಂತವೇರಿ ಗೋಪಾಲಗೌಡ ಆಸ್ಪತ್ರೆ” ಎಂದು ಮರುನಾಮಕರಣ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ದಕ್ಷಿಣ ಭಾರತದ ಅತಿದೊಡ್ಡ ಸರ್ಕಾರಿ ಆಸ್ಪತ್ರೆಗಳಲ್ಲಿ ಒಂದಾದ ವಿಕ್ಟೋರಿಯಾ ಆಸ್ಪತ್ರೆ ಸುಮಾರು 125 ವರ್ಷಗಳ ಸುದೀರ್ಘ ಇತಿಹಾಸ ಹೊಂದಿದ್ದು, ಬೆಂಗಳೂರಿನ ಹೃದಯಭಾಗದಲ್ಲಿ ಪ್ರಮುಖ ಆರೋಗ್ಯ ಸೇವಾ ಕೇಂದ್ರವಾಗಿ ಕಾರ್ಯನಿರ್ವಹಿಸುತ್ತಿದೆ.
1897ರಲ್ಲಿ ರಾಣಿ ವಿಕ್ಟೋರಿಯಾ ಅವರ ಪಟ್ಟಾಭಿಷೇಕದ ವಜ್ರಮಹೋತ್ಸವದ ನೆನಪಿಗಾಗಿ ಈ ಆಸ್ಪತ್ರೆಯ ಶಂಕುಸ್ಥಾಪನೆಯನ್ನು ಮೈಸೂರು ಮಹಾರಾಣಿ ಕೆಂಪನಂಜಮ್ಮಣ್ಣಿ ವಾಣಿ ವಿಲಾಸ ಸನ್ನಿಧಾನ ಅವರು ನೆರವೇರಿಸಿದ್ದರು.
1898ರಲ್ಲಿ ಬೆಂಗಳೂರಿನಲ್ಲಿ ಉಂಟಾದ ಭೀಕರ ಪ್ಲೇಗ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಆಸ್ಪತ್ರೆಯನ್ನು ತುರ್ತಾಗಿ ಸಿದ್ಧಪಡಿಸಿ ರೋಗಿಗಳಿಗೆ ಚಿಕಿತ್ಸೆ ನೀಡಲಾಗಿತ್ತು. ಬಳಿಕ 1900ರ ಡಿಸೆಂಬರ್ 8ರಂದು ವೈಸರಾಯ್ ಲಾರ್ಡ್ ಕರ್ಜನ್ ಅವರಿಂದ ಆಸ್ಪತ್ರೆ ಅಧಿಕೃತವಾಗಿ ಉದ್ಘಾಟನೆಗೊಂಡಿತ್ತು.
ಆರಂಭದಲ್ಲಿ 140 ಹಾಸಿಗೆಗಳಿಂದ ಪ್ರಾರಂಭವಾದ ಈ ಆಸ್ಪತ್ರೆ ಈಗ ಸಾವಿರಕ್ಕೂ ಹೆಚ್ಚು ಹಾಸಿಗೆಗಳೊಂದಿಗೆ ದೊಡ್ಡ ಆರೋಗ್ಯ ಸಂಸ್ಥೆಯಾಗಿ ಬೆಳೆದಿದೆ. ಕೋವಿಡ್-19 ಸೇರಿದಂತೆ ಅನೇಕ ತುರ್ತು ಸಂದರ್ಭಗಳಲ್ಲಿ ಸಾವಿರಾರು ಜನರ ಜೀವ ಉಳಿಸುವಲ್ಲಿ ಈ ಆಸ್ಪತ್ರೆ ಪ್ರಮುಖ ಪಾತ್ರ ವಹಿಸಿದೆ.
ಇದೀಗ ರಾಜ್ಯದ ಗೌರವಾನ್ವಿತ ನಾಯಕ ಶಾಂತವೇರಿ ಗೋಪಾಲಗೌಡ ಅವರ ಸ್ಮರಣಾರ್ಥವಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಹೊಸ ಹೆಸರು ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಇದರ ಜೊತೆಗೆ ರಾಜ್ಯದ ಆರೋಗ್ಯ ಮೂಲಸೌಕರ್ಯವನ್ನು ಬಲಪಡಿಸಲು ಸರ್ಕಾರ ಹಲವಾರು ಹೊಸ ಯೋಜನೆಗಳನ್ನು ಘೋಷಿಸಿದೆ. ಕಾರವಾರ ಮತ್ತು ಯಾದಗಿರಿಯಲ್ಲಿ ತಲಾ 100 ಕೋಟಿ ರೂ. ವೆಚ್ಚದಲ್ಲಿ ಎರಡು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ನಿರ್ಮಿಸಲಾಗುತ್ತದೆ. ಜೊತೆಗೆ ಹೊಸದುರ್ಗ–ಟಿ.ಬಿ ಡ್ಯಾಂ ಸಮೀಪ ಕ್ಯಾನ್ಸರ್ ಆಸ್ಪತ್ರೆ ಸ್ಥಾಪನೆ ಮಾಡುವುದಾಗಿ ಸಿಎಂ ಘೋಷಿಸಿದ್ದಾರೆ. ಈ ಯೋಜನೆಗಳು ರಾಜ್ಯದಾದ್ಯಂತ ಆರೋಗ್ಯ ಸೇವೆಗಳ ಪ್ರವೇಶ ಮತ್ತು ಗುಣಮಟ್ಟವನ್ನು ಹೆಚ್ಚಿಸುವ ಉದ್ದೇಶ ಹೊಂದಿವೆ.



