ನವದೆಹಲಿ: ಕರ್ನಾಟಕ ಮೂಲದ ವಿದ್ಯಾರ್ಥಿಯೊಬ್ಬರು ಅಮೆರಿಕದ ಕ್ಯಾಲಿಫೋರ್ನಿಯಾ ರಾಜ್ಯದಲ್ಲಿ ಕಾಣೆಯಾಗಿರುವ ಘಟನೆ ಆತಂಕ ಮೂಡಿಸಿದೆ. ಈ ಕುರಿತು ಸ್ಯಾನ್ ಫ್ರಾನ್ಸಿಸ್ಕೋದಲ್ಲಿನ ಭಾರತೀಯ ದೂತಾವಾಸ ಕಚೇರಿ ಕಳವಳ ವ್ಯಕ್ತಪಡಿಸಿದೆ.
22 ವರ್ಷದ ಸಾಕೇತ್ ಶ್ರೀನಿವಾಸಯ್ಯ ಫೆಬ್ರವರಿ 10ರಂದು ಕ್ಯಾಲಿಫೋರ್ನಿಯಾದ ಬರ್ಕ್ಲೇ ನಗರದ ಡ್ವೈಟ್ ವೇ ಪ್ರದೇಶದಲ್ಲಿ ಕೊನೆಯಾಗಿ ಕಾಣಿಸಿಕೊಂಡಿದ್ದಾರೆ ಎಂದು ಅಲ್ಲಿನ ಪೊಲೀಸರು ತಿಳಿಸಿದ್ದಾರೆ. ಅವರನ್ನು ಪತ್ತೆಹಚ್ಚಲು ಸ್ಥಳೀಯ ಪೊಲೀಸರು ವ್ಯಾಪಕ ಹುಡುಕಾಟ ನಡೆಸುತ್ತಿದ್ದಾರೆ.
ಸಾಕೇತ್ ಅಮೆರಿಕದ ಯೂನಿವರ್ಸಿಟಿ ಆಫ್ ಕ್ಯಾಲಿಫೋರ್ನಿಯಾನಲ್ಲಿ ವಿಜ್ಞಾನ ಸ್ನಾತಕೋತ್ತರ ಪದವಿ ಅಭ್ಯಾಸ ಮಾಡುತ್ತಿದ್ದರು. ಅವರು ರಾಸಾಯನಿಕ ಅಭಿಯಾಂತ್ರಿಕೆಯಲ್ಲಿ ಪದವಿ ಪಡೆದಿದ್ದು, ಚೆನ್ನೈನ ಮದ್ರಾಸ್ ಐಐಟಿಯಲ್ಲಿ ಬಿ.ಟೆಕ್ ಮಾಡಿದ್ದರು.
ಸ್ಯಾನ್ ಫ್ರಾನ್ಸಿಸ್ಕೋದಲ್ಲಿನ ಭಾರತೀಯ ರಾಯಭಾರಿ ಕಚೇರಿ ಸಾಕೇತ್ ಅವರ ಕುಟುಂಬದವರೊಂದಿಗೆ ಸಂಪರ್ಕದಲ್ಲಿದ್ದು, ಸ್ಥಳೀಯ ಅಧಿಕಾರಿಗಳ ಸಹಕಾರದಿಂದ ಅವರನ್ನು ಪತ್ತೆಹಚ್ಚಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದೆ.
ಸಾಕೇತ್ ಸುಮಾರು 6 ಅಡಿ 1 ಇಂಚು ಎತ್ತರ ಹೊಂದಿದ್ದು, ಕಪ್ಪು ಕೂದಲು ಹಾಗೂ ಕಂದು ಬಣ್ಣದ ಕಣ್ಣುಗಳನ್ನು ಹೊಂದಿದ್ದಾರೆ. ಅವರು ಅಪಾಯದ ಸ್ಥಿತಿಯಲ್ಲಿ ಇರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ. ಅವರ ಬಗ್ಗೆ ಯಾವುದೇ ಮಾಹಿತಿ ದೊರೆತರೆ ತಕ್ಷಣ ಸ್ಥಳೀಯ ಪೊಲೀಸರನ್ನು ಸಂಪರ್ಕಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ.
ಕರ್ನಾಟಕ ಮೂಲದವರಾದ ಸಾಕೇತ್ ಅವರ ಕುಟುಂಬದವರು ಮಗನ ನಾಪತ್ತೆ ಸುದ್ದಿಯಿಂದ ಕಂಗಾಲಾಗಿದ್ದಾರೆ. ಭಾರತ ಸರ್ಕಾರ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಮಗನನ್ನು ಹುಡುಕಿಕೊಡಲು ಸಹಾಯ ಮಾಡಬೇಕು ಎಂದು ಅವರು ಮನವಿ ಮಾಡಿದ್ದಾರೆ.



