ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿ ಹಾಗೂ ಮಲೆನಾಡು ಭಾಗದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಮಳೆಯ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರ ಕೂಡ ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದೆ.
ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 40 ಕಿ.ಮೀ. ವೇಗದ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ ಹಾಗೂ ಕೊಪ್ಪಳ ಜಿಲ್ಲೆಗಳ ಕೆಲವೆಡೆ ಗಂಟೆಗೆ 40 ರಿಂದ 50 ಕಿ.ಮೀ. ವೇಗದ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.
ಬಾಗಲಕೋಟೆ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆಯಿದೆ.
ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 40 ಕಿ.ಮೀ. ವೇಗದ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
ಇನ್ನು ಬಳ್ಳಾರಿ, ಚಿತ್ರದುರ್ಗ ಹಾಗೂ ವಿಜಯನಗರ ಜಿಲ್ಲೆಗಳ ಹಲವು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಮಳೆ ಮತ್ತು ಗಾಳಿ ಹಿನ್ನೆಲೆಯಲ್ಲಿ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.



