ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ : ನವೆಂಬರ್ 1ರಂದು ನಡೆಯಲಿರುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಅತ್ಯಂತ ವ್ಯವಸ್ಥಿತವಾಗಿ ಮತ್ತು ಅರ್ಥಪೂರ್ಣವಾಗಿ ಆಚರಣೆ ಮಾಡುವ ನಿಟ್ಟಿನಲ್ಲಿ ಎಲ್ಲ ಇಲಾಖೆಯ ಅಧಿಕಾರಿಗಳು, ಚುನಾಯಿತ ಜನಪ್ರತಿನಿಧಿಗಳು ಮತ್ತು ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು ಸೇರಿದಂತೆ ಎಲ್ಲರ ಸಹಕಾರ ಅಗತ್ಯ ಎಂದು ತಹಸೀಲ್ದಾರ ಅನಿಲ ಬಡಿಗೇರ ಹೇಳಿದರು.
ಅವರು ತಹಸೀಲ್ದಾರ ಕಚೇರಿಯಲ್ಲಿ ಜರುಗಿದ ಕರ್ನಾಟಕ ರಾಜ್ಯೋತ್ಸವ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ನ.1 ನಮ್ಮೆಲ್ಲರಿಗೂ ಹೆಮ್ಮೆಯ ದಿನ. ಅಂದು ಬೆಳಿಗ್ಗೆ 10 ಗಂಟೆಗೆ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ತಾಲೂಕು ಕಚೇರಿ ಆವರಣದಲ್ಲಿ ಪೂಜೆ ಸಲ್ಲಿಸುವ ಮೂಲಕ ಮೆರವಣಿಗೆಗೆ ಚಾಲನೆ ನೀಡಲಾಗುವುದು. ಮೆರವಣಿಗೆ ತಾಲೂಕು ಕಚೇರಿಯಿಂದ ನೆಹರು ವೃತ್ತದ ಮಾರ್ಗವಾಗಿ ಎಸ್.ಎಮ್. ಡಬಾಲಿ ತಾಲೂಕಾ ಕ್ರೀಡಾಂಗಣಕ್ಕೆ ತಲುಪಲಿದ್ದು, ತಾಲೂಕು ಕ್ರೀಡಾಂಗಣದಲ್ಲಿ ವೇದಿಕೆ ಕಾರ್ಯಕ್ರಮ ನೆರವೇರಿಸಲಾಗುವುದು. ಎಲ್ಲ ಕಾರ್ಯಕ್ರಮಗಳು ಅಚ್ಚುಕಟ್ಟಾಗಿ, ವಿಜೃಂಭಣೆಯಿಂದ ಜರುಗಲು ಸರ್ವರೂ ಸಹಕಾರ ನೀಡುವಂತೆ ಕೋರಿದರು.
ಪ.ಪಂ ಮಾಜಿ ಅಧ್ಯಕ್ಷ ನಾಗರಾಜ ಲಕ್ಕುಂಡಿ ಮಾತನಾಡಿ, ಪ್ರತಿ ವರ್ಷದಂತೆ ಈ ವರ್ಷವೂ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದ ಯಶಸ್ಸಿಗೆ ಸಂಪೂರ್ಣ ಸಹಕಾರ ನೀಡಲಾಗುವುದು. ಬೆಳಿಗ್ಗೆ ತಾಲೂಕಾ ಕಚೇರಿಯಲ್ಲಿ ಸೇರುವುದರೊಂದಿಗೆ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.
ಎಡಿಎ ರೇವಣಪ್ಪ ಮನಗೂಳಿ, ಪ.ಪಂ ಮುಖ್ಯಾಧಿಕಾರಿ ಸಿದ್ದರಾಯ ಕಟ್ಟಮನಿ, ನಾಗರಾಜ ಲಕ್ಕುಂಡಿ, ಕಸಾಪ ಕಾರ್ಯದರ್ಶಿ ಸತೀಶ ದೇಶಪಾಂಡೆ, ವಿವಿಧ ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳಾದ ವೀರೇಶಪ್ರಸಾರದ, ರಾಜು ಶಿರಹಟ್ಟಿ, ಸಂಜೀವ ಪೋತರಾಜ, ಹಸನ ತಹಸೀಲ್ದಾರ, ಅಕ್ಬರ ಯಾದಗಿರಿ, ಕೆ.ಎ. ಬಳಿಗಾರ, ಎಚ್.ಎಮ್. ದೇವಗಿರಿ, ಸಿಡಿಪಿಒ ಮೃತ್ಯುಂಜಯ ಗುಡ್ಡದಾನ್ವೇರಿ, ತಾಲೂಕಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಮರಿಗೌಡ ಸುರಕೊಂಡ ಮುಂತಾದವರು ಉಪಸ್ಥಿತರಿದ್ದರು.