HomeGadag Newsಖಾಲಿ ಇರುವ ಹುದ್ದೆ ಭರ್ತಿ ಮಾಡಿ : ಅಕ್ಷಯ್ ಡಿ.ಎಂ ಗೌಡ

ಖಾಲಿ ಇರುವ ಹುದ್ದೆ ಭರ್ತಿ ಮಾಡಿ : ಅಕ್ಷಯ್ ಡಿ.ಎಂ ಗೌಡ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ : ರಾಜ್ಯದಲ್ಲಿ ಸುಮಾರು 2.50 ಲಕ್ಷ ಹೊರ ಗುತ್ತಿಗೆ ನೌಕರರ ಹುದ್ದೆಗಳು ಖಾಲಿ ಇವೆ. ಈಗ ಕೆಲಸ ನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರಿಗೆ ಇದು ಹೊರೆಯಾಗುತ್ತಿದೆ. ಸರ್ಕಾರ ಇದುವರೆಗೂ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ನಿರ್ಣಯ ಕೈಗೊಳ್ಳುತ್ತಿಲ್ಲ. ಸರ್ಕಾರದ ಈ ನಿರ್ಣಯದಿಂದಾಗಿ ಸದ್ಯ ದುಡಿಯುತ್ತಿರುವ ಹೊರಗುತ್ತಿಗೆ ನೌಕರರಿಗೆ ತೀವ್ರ ತೊಂದರೆಯಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆ ವಿವಿಧ ವೃಂದದ ಹೊರಗುತ್ತಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ಅಕ್ಷಯ್ ಡಿ.ಎಂ ಗೌಡ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಆರೋಗ್ಯ ಇಲಾಖೆಯಲ್ಲಿ ಹತ್ತಾರು ವರ್ಷಗಳಿಂದ ಹೊರಗುತ್ತಿಗೆ ಆಧಾರದಲ್ಲಿ ಸುಮಾರು 9 ಸಾವಿರ ನೌಕರರು ಕಾರ್ಯನಿರ್ವಹಿಸುತ್ತಿದ್ದು, ಸರ್ಕಾರ ಒಂದು ಖಾಸಗಿ ಸಂಸ್ಥೆಗೆ ಟೆಂಡರ್ ನೀಡುವ ಮೂಲಕ ನೌಕರರನ್ನು ಶೋಷಿಸುತ್ತಿದೆ. ಗದಗ ಜಿಲ್ಲೆಯಲ್ಲಿ 142 ಹೊರಗುತ್ತಿಗೆ ನೌಕರರು ಆರೋಗ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದು, ಅವರಿಗೆ ದೊರೆಯಬೇಕಾದ ಮೂಲಭೂತ ಸೌಲಭ್ಯಗಳು ಸಿಗುತ್ತಿಲ್ಲ. ಕೂಡಲೇ ಅವರಿಗೆ ಸೌಲಭ್ಯಗಳನ್ನು ಒದಗಿಸಬೇಕು ಎಂದು ಆಗ್ರಹಿಸಿದರು.

ಬಾಗಲಕೋಟೆ ಜಿಲ್ಲೆಯ ಹೊರಗುತ್ತಿಗೆ ನೌಕರರೊಬ್ಬರು ಇತ್ತೀಚೆಗೆ ಮೃತಪಟ್ಟಿದ್ದು, ಅವರ ಅಗಲಿಕೆಯಿಂದ ಅವರ ಮನೆಯ ಜೀವನ ತೊಂದರೆ ಅನುಭವಿಸುವಂತಾಗಿದೆ. ಮೃತನ ಕುಟುಂಬಕ್ಕೆ ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆ ವಿವಿಧ ವೃಂದದ ಹೊರಗುತ್ತಿಗೆ ನೌಕರರ ಸಂಘದಿಂದ 36,211 ರೂ. ಧನಸಹಾಯ ನೀಡಲಾಗಿದೆ.

ಸರ್ಕಾರವು ಮಾನವೀಯತೆ ಆಧಾರದ ಮೇಲೆ ಮೃತಪಟ್ಟ ನೌಕರರ ಮನೆಯವರಿಗೆ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಕಲ್ಪಿಸಿ ಅವರ ಕುಟುಂಬಕ್ಕೆ ಆಸರೆಯಾಗಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿದರು.

ಕೋವಿಡ್‌ನಂತಹ ಸಂಕಷ್ಟದ ಸಂದರ್ಭದಲ್ಲಿ ಹೊರಗುತ್ತಿಗೆ ನೌಕರರು ಪ್ರಾಣದ ಹಂಗು ತೊರೆದು ಕಾರ್ಯನಿರ್ವಹಿಸಿದ್ದಾರೆ. ಆದರೆ, ಇತ್ತೀಚೆಗೆ ಹೊರಗುತ್ತಿಗೆ ಪದ್ಧತಿಯಲ್ಲಿಯೂ ಕೂಡ ಮೀಸಲಾತಿಯನ್ನು ತಂದು ನೌಕರರನ್ನು ಇಕ್ಕಟ್ಟಿಗೆ ಸುಲುಕಿಸುವ ಪ್ರಯತ್ನ ಸರ್ಕಾರ ಮಾಡುತ್ತಿದೆ. ಮೀಸಲಾತಿ ಜಾರಿಯಾದರೆ ಹೊರಗುತ್ತಿಗೆ ಆಧಾರದಲ್ಲಿ ದುಡಿಯುತ್ತಿರುವ ನೌಕರರ ಕುಟುಂಬಗಳು ಬೀದಿಗೆ ಬರುತ್ತವೆ. ಮೀಸಲಾತಿ ತಂದರೂ ಕೂಡ ಈಗ ಕೆಲಸ ನಿರ್ವಹಿಸುತ್ತಿರುವ ನೌಕರರ ಕೆಲಸವನ್ನು ಕಿತ್ತುಕೊಳ್ಳಬಾರದು. ಈ ಬಗ್ಗೆ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಡಿಎಚ್‌ಓ ಅವರಿಗೆ ಮನವಿ ನೀಡಲು ನಿರ್ಧರಿಸಲಾಗಿದೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆ ವಿವಿಧ ವೃಂದದ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಗದಗ ಜಿಲ್ಲೆಯಾದ್ಯಂತ 13 ಹೊರಗುತ್ತಿಗೆ ನೌಕರರನ್ನು ಈಗಾಗಲೇ ಕೆಲಸದಿಂದ ವಜಾಗೊಳಿಸಲಾಗಿದೆ. ಆದರೆ, ನಿಖರ ಕಾರಣವನ್ನು ತಿಳಿಸಿಲ್ಲ. ಹೀಗಾಗಿ ಅವರ ಕುಟುಂಬಗಳು ಈಗ ಬೀದಿಗೆ ಬಂದಿದ್ದು, ಕೂಡಲೇ ಅವರನ್ನು ಮರಳಿ ಕೆಲಸಕ್ಕೆ ಹಾಜರುಪಡಿಸಬೇಕು. ಈ ಬಗ್ಗೆ ಡಿಎಚ್‌ಓ ಹಾಗೂ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ನಂತರ ಟೆಂಡರ್ ಹಿಡಿದ ಏಜೆನ್ಸಿಯವರಿಗೂ ಮನವಿ ಮಾಡಲಾಗುವುದು ಎಂದು ತಿಳಿಸಿದರು.


Spread the love

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!