ಬೆಂಗಳೂರು: ಕರ್ನಾಟಕದಲ್ಲಿ ನೈಋತ್ಯ ಮುಂಗಾರು ದುರ್ಬಲವಾಗಿದ್ದರೂ, ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದು ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಮೈಸೂರು ಜಿಲ್ಲೆಗಳ ಒಂದೆರಡು ಕಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಈ ಜಿಲ್ಲೆಗಳ ನಿವಾಸಿಗಳು ಹವಾಮಾನದಲ್ಲಿನ ಬದಲಾವಣೆಗಳ ಬಗ್ಗೆ ಗಮನಹರಿಸುವುದು ಸೂಕ್ತ.
ಬೆಂಗಳೂರು ನಗರ ಮತ್ತು ಗ್ರಾಮಾಂತರ ಸೇರಿದಂತೆ ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಗಳ ಕೆಲವು ಕಡೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಅಕ್ಟೋಬರ್ 10ರಂದು ಕೂಡ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.
ಕರಾವಳಿ ಜಿಲ್ಲೆಗಳಲ್ಲೂ ಮಳೆ ಸಾಧ್ಯತೆ:
ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲವು ಕಡೆ ಮಳೆಯಾಗುವ ಮುನ್ಸೂಚನೆ ಇದೆ. ಆದರೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಖ್ಯವಾಗಿ ಒಣಹವೆ ಇರಲಿದೆ. ಉತ್ತರ ಒಳನಾಡಿನ ಎಲ್ಲ ಜಿಲ್ಲೆಗಳಲ್ಲೂ ಒಣಹವೆ ಮುಂದುವರಿಯುವ ಸಾಧ್ಯತೆಯಿದೆ.
ಬೆಳ್ತಂಗಡಿಯಲ್ಲಿ 3 ಸೆಂ.ಮೀ ಮಳೆ ದಾಖಲು:
ಗುರುವಾರ ಸಂಜೆ ಅಂತ್ಯಗೊಂಡ ಮಳೆ ವರದಿ ಪ್ರಕಾರ, ರಾಜ್ಯದಲ್ಲಿ ನೈಋತ್ಯ ಮುಂಗಾರು ದುರ್ಬಲವಾಗಿತ್ತು. ಕರಾವಳಿಯ ಕೆಲವು ಕಡೆ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆ ಮಳೆಯಾಗಿದ್ದು, ಎಲ್ಲಿಯೂ ಭಾರಿ ಮಳೆ ದಾಖಲಾಗಿಲ್ಲ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ 3 ಸೆಂ.ಮೀ ಮಳೆಯಾಗಿದೆ. ಬಂಟ್ವಾಳ, ಬಳ್ಳಾರಿ, ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ಮತ್ತು ತುಮಕೂರು ಜಿಲ್ಲೆಯ ಶಿರಾದಲ್ಲಿ ತಲಾ 2 ಸೆಂ.ಮೀ ಮಳೆ ದಾಖಲಾಗಿದೆ.



