ಮಂಡ್ಯ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಆದೇಶದ ವಿರುದ್ಧ ಮಂಡ್ಯ ಜಿಲ್ಲೆಯಲ್ಲಿ ಹೋರಾಟದ ಕಾವು ಮತ್ತಷ್ಟು ಹೆಚ್ಚಾಗಿದೆ.
ಕಾವೇರಿ ನೀರು ನಿಯಂತ್ರಣ ಸಮಿತಿ 3,500 ಕ್ಯೂಸೆಕ್ ನೀರು ಬಿಡುಗಡೆ ಮಾಡುವಂತೆ ನೀಡಿರುವ ಆದೇಶಕ್ಕೆ ವಿರೋಧ ವ್ಯಕ್ತಪಡಿಸಿರುವ ಬಿಜೆಪಿ ನಾಯಕರು ಇಂದು ಕೆಆರ್ಎಸ್ ಜಲಾಶಯಕ್ಕೆ ಮುತ್ತಿಗೆ ಹಾಕಲು ಮುಂದಾಗಿದ್ದಾರೆ.
ಬಿಜೆಪಿ ಪ್ರತಿಭಟನೆಯ ನೇತೃತ್ವವನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಹಿಸಲಿದ್ದು, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಹಲವು ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ.
ಇಂದು ಬೆಳಗ್ಗೆ 11 ಗಂಟೆಗೆ ಕೆಆರ್ಎಸ್ ಜಲಾಶಯದ ಬಳಿ ಪ್ರತಿಭಟನೆ ಆರಂಭವಾಗಲಿದ್ದು, ಬಳಿಕ ಅಣೆಕಟ್ಟಿಗೆ ಮುತ್ತಿಗೆ ಹಾಕುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡಬಾರದು ಎಂದು ಬಿಜೆಪಿ ನಾಯಕರು ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಪ್ರತಿಭಟನೆ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯಲ್ಲಿ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ಕೆಆರ್ಎಸ್ ಸೇರಿದಂತೆ ಜಿಲ್ಲೆಯ ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತೆ ಹೆಚ್ಚಿಸಲಾಗಿದ್ದು, ಒಟ್ಟು 1,500ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಶೋಭಾರಾಣಿ ಮಾಹಿತಿ ಪ್ರಕಾರ, ಇಬ್ಬರು ಎಸ್ಪಿ, 9 ಡಿವೈಎಸ್ಪಿ, 27 ಇನ್ಸ್ಪೆಕ್ಟರ್ಗಳು, 45 ಪಿಎಸ್ಐ ಹಾಗೂ 78 ಎಎಸ್ಐ ಸೇರಿದಂತೆ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ.
ಕೆಆರ್ಎಸ್ ಸುತ್ತಮುತ್ತ ಬ್ಯಾರಿಕೇಡ್ಗಳನ್ನು ಅಳವಡಿಸಲಾಗಿದ್ದು, ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಬೃಂದಾವನ ಉದ್ಯಾನವನಕ್ಕೂ ತಾತ್ಕಾಲಿಕವಾಗಿ ಪ್ರವೇಶ ನಿಷೇಧಿಸಲಾಗಿದೆ. ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಪ್ರವಾಸಿಗರಿಗೆ ಅವಕಾಶ ಇರುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇತ್ತ ಮಂಡ್ಯ ಜಿಲ್ಲಾದ್ಯಂತ ರೈತ ಸಂಘಟನೆಗಳು ಹಾಗೂ ವಿವಿಧ ಕನ್ನಡಪರ ಸಂಘಟನೆಗಳು ಕೂಡ ಕಾವೇರಿ ನೀರು ವಿಚಾರವಾಗಿ ಪ್ರತಿಭಟನೆ ಮುಂದುವರಿಸಿವೆ. ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಪೊಲೀಸರು ಕಟ್ಟೆಚ್ಚರ ವಹಿಸಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ.



