ಬೆಂಗಳೂರು: 402 ಪಿಎಸ್ಐ ಹುದ್ದೆಗಳ ನೇಮಕಾತಿ ಪರೀಕ್ಷೆಯ ಹೊಣೆಯನ್ನು ಕೆಇಎಗೆ ವಹಿಸಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, 402 ಪಿಎಸ್ಐ ಹುದ್ದೆಗಳ ನೇಮಕಾತಿ ಪರೀಕ್ಷೆಯ ಹೊಣೆಯನ್ನು ಕೆಇಎಗೆ ವಹಿಸಲಾಗಿದೆ. ಸೆ.22ರಂದು ಪರೀಕ್ಷೆ ನಡೆಸಲು ನಿಗದಿ ಮಾಡಿದ್ದಾರೆ. ಪಿಎಸ್‌ಐ ಪರೀಕ್ಷೆ ಬರೆಯಬೇಕಾದ 100ಕ್ಕೂ ಹೆಚ್ಚು ಆಕಾಂಕ್ಷಿಗಳು, ಯುಪಿಎಸ್‌ಸಿ ಮುಖ್ಯಪರೀಕ್ಷೆಯನ್ನು ಬರೆಯುತ್ತಿದ್ದಾರೆ.
ಹೀಗಾಗಿ ಪರೀಕ್ಷಾ ದಿನ ಮುಂದೂಡುವಂತೆ ಮನವಿ ಸಲ್ಲಿಸಿದ್ದಾರೆ. ಪರೀಕ್ಷೆ ಮುಂದೂಡುವ ಕುರಿತ ಸಾಧಕ – ಬಾಧಕಗಳನ್ನು ಇಲಾಖೆಯ ಅಧಿಕಾರಿಗಳು ಹಾಗೂ ಕೆಇಎ ಅವರೊಂದಿಗೆ ಮತ್ತೊಮ್ಮೆ ಚರ್ಚಿಸಿ, ಕ್ರಮ ಕೈಗೊಳ್ಳಲಾಗುವುದು ಎಂದರು. ನಮಗೆ ಯುಪಿಎಸ್‌ಸಿ ಮುಖ್ಯವಲ್ಲ. ಇಲಾಖೆಯಲ್ಲಿ ಸಾವಿರ ಪಿಎಸ್ಐ ಹುದ್ದೆಗಳು ಖಾಲಿ ಇವೆ. ಈ ಹಿನ್ನೆಲೆಯಲ್ಲಿ ನಿಯಮ 32 ಅಡಿ ಎಎಸ್‌ಐಗಳಿಗೆ ಪಿಎಸ್ಐ ಹುದ್ದೆಗೆ ಬಡ್ತಿ ನೀಡಲಾಗಿದೆ. ಬೀದಿಯಲ್ಲಿ ನಿಂತು ಕರ್ತವ್ಯ ನಿರ್ವಹಿಸಬೇಕಾದ ಪಿಎಸ್ಐ ಇಲ್ಲವಾದರೆ, ಇಲಾಖೆ ಮುನ್ನಡೆಸುವುದು ಹೇಗೆ ಎಂದು ಪ್ರಶ್ನಿಸಿದರು.