ಚಿಕ್ಕಮಗಳೂರು: ಎನ್.ಆರ್.ಪುರ ತಾಲೂಕಿನ ಕಟ್ಟಿನಮನೆ ಗ್ರಾಮದಲ್ಲಿ ಮತ್ತೋರ್ವ ಯುವಕನಿಗೆ ಮಂಗನ ಕಾಯಿಲೆ ಸೋಂಕು ದೃಢಪಟ್ಟಿದೆ. ಈ ಮೂಲಕ ಗ್ರಾಮದ ಇಬ್ಬರಲ್ಲಿ ಸೋಂಕು ಪತ್ತೆಯಾದಂತಾಗಿದೆ.
ಗ್ರಾಮದ 30 ವರ್ಷದ ಯುವಕನಿಗೆ ಕೆಎಫ್‌ಡಿ ಸೋಂಕು ಪತ್ತೆಯಾಗಿದ್ದು, ಸೋಂಕಿತ ಯುವಕನನ್ನು ಕೊಪ್ಪ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೊಬ್ಬ ವ್ಯಕ್ತಿಗೆ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.
ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳು ಕಟ್ಟಿನಮನೆ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮದಲ್ಲಿ ಸ್ವಚ್ಛತೆ ಕಾಪಾಡುವಂತೆ ಹಾಗೂ ಯಾರಿಗಾದರೂ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಂಡರೆ ತಕ್ಷಣವೇ ವೈದ್ಯರನ್ನು ಸಂಪರ್ಕಿಸುವಂತೆ ಗ್ರಾಮಸ್ಥರಿಗೆ ಸೂಚನೆ ನೀಡಿದ್ದಾರೆ.
ಇತ್ತೀಚೆಗೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಿಳ್ಕೋಡಿ ಗ್ರಾಮದಲ್ಲಿ ಆರು ಮಂದಿಗೆ ಮಂಗನ ಕಾಯಿಲೆ ದೃಢಪಟ್ಟಿರುವುದು ಆತಂಕಕ್ಕೆ ಕಾರಣವಾಗಿತ್ತು.



