ಮುಂಬೈ: ಮುಂಬೈನ ವಾಂಖೆಡೆ ಕ್ರಿಕೆಟ್ ಮೈದಾನದಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧ ನಡೆದ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ ತಂಡವು ಸೋಲು ಕಂಡಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ 3ನೇ ಟೆಸ್ಟ್ನಲ್ಲಿ ಕಿವೀಸ್ ನಾಯಕ ಲಾಥಮ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದರು.
3ನೇ ಟೆಸ್ಟ್ ಪಂದ್ಯದಲ್ಲಿ ಕಿವೀಸ್ ಭಾರತದ ವಿರುದ್ಧ 26 ರನ್‌ಗಳ ಅಮೋಘ ಜಯ ಸಾಧಿಸಿ, ಮೂರು ಪಂದ್ಯಗಳ ಟೆಸ್ಟ್ ಸರಣಿಯನ್ನು ಕ್ಲೀನ್‌ಸ್ವೀಪ್ ಮಾಡಿದೆ. ಈ ಮೂಲಕ ಭಾರತದಲ್ಲಿ 3 ಅಥವಾ ಅದಕ್ಕಿಂತ ಹೆಚ್ಚಿನ ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ ತಂಡವನ್ನು ವೈಟ್‌ವಾಶ್ ಮಾಡಿದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
147 ರನ್‌ಗಳ ಗುರಿ ಬೆನ್ನಟ್ಟಿದ ಭಾರತ ಆರಂಭದಲ್ಲೇ ಪ್ರಮುಖ ವಿಕೆಟ್ ಕಳೆದುಕೊಂಡು ಹಿನ್ನಡೆ ಅನುಭವಿಸಿತು. ನಾಯಕ ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ವಿರಾಟ್ ಕೊಹ್ಲಿ ಅಲ್ಪಮೊತ್ತಕ್ಕೆ ಔಟಾಗಿ ಪೆವಿಲಿಯನ್ ಪರೇಡ್ ನಡೆಸಿದರು. ಅಗ್ರ ಕ್ರಮಾಂಕದ ಬ್ಯಾಟರ್‌ಗಳು ಅಲ್ಪಮೊತ್ತಕ್ಕೆ ಔಟಾಗಿದ್ದು ತಂಡಕ್ಕೆ ಭಾರಿ ಆಘಾತ ನೀಡಿತು.
ಈ ಸೋಲಿನೊಂದಿಗೆ 24 ವರ್ಷಗಳ ಬಳಿಕ ತವರಿನಲ್ಲಿ ಸರಣಿ ಸೋತ ಅಪಖ್ಯಾತಿಯನ್ನು ಹೆಗಲಿಗೇರಿಸಿಕೊಂಡಿದೆ. ಕೊನೆಯದ್ದಾಗಿ ಭಾರತ 2000 ಇಸವಿಯಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ವೈಟ್‌ವಾಶ್ ಆಗಿತ್ತು.