ಬೆಂಗಳೂರು: ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ನಿವಾಸಕ್ಕೆ ಚಾಕುಗಳನ್ನು ಪಾರ್ಸೆಲ್ ಮೂಲಕ ಕಳುಹಿಸಿದ ಪ್ರಕರಣ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಈ ಸಂಬಂಧ ಛಲವಾದಿ ನಾರಾಯಣಸ್ವಾಮಿ ನೀಡಿದ ದೂರಿನ ಮೇರೆಗೆ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಚಾಕುಗಳ ಪಾರ್ಸೆಲ್ ಕಳುಹಿಸಿದವರ ಪತ್ತೆಗೆ ತನಿಖೆ ಆರಂಭಿಸಿದ್ದಾರೆ. ಕಳೆದೊಂದು ವಾರದಿಂದ ಕಾಂಗ್ರೆಸ್ನ ಕೆಲವು ಯುವಕರು ಪದೇಪದೇ ತಮ್ಮ ನಿವಾಸದ ಬಳಿ ಬಂದು ಗೂಂಡಾಗಿರಿ ಪ್ರದರ್ಶಿಸುತ್ತಿದ್ದಾರೆ. ಅಲ್ಲದೆ, ಇಂತಹ ಬೆದರಿಕೆಗಳಿಗೆ ತಾವು ಹೆದರುವುದಿಲ್ಲ. ಅಂಬೇಡ್ಕರ್ ನೀಡಿದ ಸಂವಿಧಾನದ ಅಡಿಯಲ್ಲಿ ಶಕ್ತಿ ಮತ್ತು ಯುಕ್ತಿಯಿಂದ ಹೋರಾಟ ಮುಂದುವರಿಸುವುದಾಗಿ ಹೇಳಿದ್ದಾರೆ.
ಇನ್ನು ಛಲವಾದಿ ನಾರಾಯಣಸ್ವಾಮಿ ನಿವಾಸಕ್ಕೆ ಭೇಟಿ ನೀಡಿದ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸೆವೆನ್ ಮಿನಿಸ್ಟರ್ ಕ್ವಾರ್ಟರ್ಸ್ನಲ್ಲಿ ಛಲವಾದಿ ಅವರ ನಿವಾಸವಿದ್ದು, ಪಕ್ಕದಲ್ಲೇ ನ್ಯಾಯಮೂರ್ತಿಗಳ ನಿವಾಸಗಳೂ ಇವೆ. ಇಂತಹ ಪ್ರದೇಶದಲ್ಲೇ ಕಾಂಗ್ರೆಸ್ ಕಾರ್ಯಕರ್ತರು ಬಂದು ಗಲಾಟೆ ಮಾಡುತ್ತಿರುವುದು ಸರಿಯಲ್ಲ. ಇದೆಲ್ಲವನ್ನೂ ಗಮನಿಸಿದರೆ ಕಾಂಗ್ರೆಸ್ನ ಅವನತಿ ಆರಂಭವಾಗಿದೆ ಎಂದು ಟೀಕಿಸಿದ್ದಾರೆ.
ಛಲವಾದಿ ನಾರಾಯಣಸ್ವಾಮಿ ಅವರ ಬೆನ್ನಿಗೆ ಬಿಜೆಪಿ ನಿಂತಿದೆ. ಇಂತಹ ಘಟನೆಗಳಿಗೆ ಪಕ್ಷ ಜಗ್ಗುವುದಿಲ್ಲ, ಬಗ್ಗುವುದಿಲ್ಲ. ಮುಂದೆ ಏನೇ ಆದರೂ ಅದಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೇ ಹೊಣೆ ಎಂದು ಆರ್. ಅಶೋಕ್ ಎಚ್ಚರಿಕೆ ನೀಡಿದ್ದಾರೆ.
ಇದೇ ವಿಚಾರವಾಗಿ ಫ್ರೀಡಂ ಪಾರ್ಕ್ನಲ್ಲಿ ಬಿಜೆಪಿ ಎಸ್ಸಿ ಮೋರ್ಚಾ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮತ್ತೊಂದೆಡೆ, ಛಲವಾದಿ ನಾರಾಯಣಸ್ವಾಮಿ ಅವರ ವಿರೋಧಿಗಳೇ ಚಾಕುಗಳ ಪಾರ್ಸೆಲ್ ಕಳುಹಿಸಿರಬಹುದು ಎಂದು ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ.







