ಬೆಂಗಳೂರು: “ಕೊಡವರು ಅಂದ್ರೆ ಹಾಕಿ, ಹಾಕಿ ಅಂದ್ರೆ ಕೊಡವರು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.
ಗೃಹ ಕಚೇರಿ ಕೃಷ್ಣದಲ್ಲಿ ಚೆನ್ನಡ ಹಾಕಿ ಪಂದ್ಯಾವಳಿಯ ಲೋಗೋ ಬಿಡುಗಡೆ ಮಾಡಿ ಮಾತನಾಡಿದ ಅವರು, ಕೊಡಗಿನ ಹಾಕಿ ಪಟುಗಳು ದೇಶಕ್ಕೆ ಕೀರ್ತಿ ತಂದಿದ್ದಾರೆ ಎಂದು ಶ್ಲಾಘಿಸಿದರು. ಏಷ್ಯನ್ ಗೇಮ್ಸ್ ಸೇರಿದಂತೆ ಅನೇಕ ಅಂತಾರಾಷ್ಟ್ರೀಯ ಮಟ್ಟದ ಸ್ಪರ್ಧೆಗಳಲ್ಲಿ ಕೊಡವ ಕ್ರೀಡಾಪಟುಗಳು ದೇಶದ ಹೆಮ್ಮೆ ಹೆಚ್ಚಿಸಿದ್ದಾರೆ ಎಂದರು.
ಕೊಡವ ಸಂಸ್ಕೃತಿ ತನ್ನದೇ ಆದ ವೈಶಿಷ್ಟ್ಯತೆ ಉಳಿಸಿಕೊಂಡು ಬೆಳೆದಿರುವುದು ನಮ್ಮ ರಾಜ್ಯದ ಹೆಮ್ಮೆ ಎಂದ ಸಿಎಂ, 2026ರ ಮೇ ತಿಂಗಳಲ್ಲಿ ನಡೆಯಲಿರುವ ಚೆನ್ನಡ ಹಾಕಿ ಪಂದ್ಯಾವಳಿಗೆ ಸರ್ಕಾರದಿಂದ ಒಂದು ಕೋಟಿ ರೂಪಾಯಿ ಅನುದಾನ ನೀಡಲಾಗುವುದು ಎಂದು ಘೋಷಿಸಿದರು.
“ಪಂದ್ಯಾವಳಿ ನೋಡಲು ನಾನೂ ಬರುವೆ” ಎಂದು ಭರವಸೆ ನೀಡಿದ ಅವರು, ಕ್ರೀಡೆಗೆ ಸರ್ಕಾರ ಸದಾ ಬೆಂಬಲ ನೀಡುತ್ತದೆ ಎಂದರು. ಈ ಸಂದರ್ಭದಲ್ಲಿ ಸಚಿವರಾದ ಬೋಸರಾಜು, ಬೈರತಿ ಸುರೇಶ್, ಶಿವರಾಜ್ ತಂಗಡಗಿ, ಶಾಸಕರಾದ ರಾಘವೇಂದ್ರ ಹಿಟ್ನಾಳ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಪೊನ್ನಣ್ಣ ಸೇರಿದಂತೆ ಕೊಡವ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.


