ಬೆಂಗಳೂರು: KPSC ನಡೆಸುತ್ತಿರುವ 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆಯಲ್ಲಿ ಮತ್ತೆ ಅಕ್ರಮದ ಆರೋಪ ಕೇಳಿಬಂದಿದೆ. 384 ಹುದ್ದೆಗಳ ಭರ್ತಿಗಾಗಿ ಇಂಟರ್ವ್ಯೂಗೆ ಕರೆ ನೀಡಿರುವ 1:3 ಅನುಪಾತದ ಅರ್ಹ ಅಭ್ಯರ್ಥಿಗಳ ಪಟ್ಟಿಯಲ್ಲಿ ಗೊಂದಲಗಳಿವೆ ಎಂದು ಅಭ್ಯರ್ಥಿಗಳು ಆರೋಪಿಸಿ, ಸಮಗ್ರ ತನಿಖೆಗೆ ಆಗ್ರಹಿಸಿದ್ದಾರೆ.
ಮುಖ್ಯ ಪರೀಕ್ಷೆ ಪೂರ್ಣಗೊಂಡ ಬಳಿಕ ಇಂಟರ್ವ್ಯೂ ಹಂತಕ್ಕೆ ಆಯ್ಕೆಗೊಂಡ ಅಭ್ಯರ್ಥಿಗಳ ಪಟ್ಟಿಯನ್ನು ಮಾ. 2ರಂದು ಕೆಪಿಎಸ್ಸಿ ಪ್ರಕಟಿಸಿತ್ತು. ಆದರೆ, ಈ ಪಟ್ಟಿಯಲ್ಲಿ ಒಂದೇ ಪರೀಕ್ಷಾ ಕೊಠಡಿಯಲ್ಲಿ ಪರೀಕ್ಷೆ ಬರೆದ ಅಭ್ಯರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇದರಿಂದ ಆಯ್ಕೆ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಅನುಮಾನ ವ್ಯಕ್ತವಾಗಿದೆ.
ಕೆಪಿಎಸ್ಸಿ ಪರೀಕ್ಷೆಯಲ್ಲಿ ಅಕ್ರಮದ ಆರೋಪ ಇದೇ ಮೊದಲಲ್ಲ. ಇದೇ ಪರೀಕ್ಷೆಯಲ್ಲಿ ಕನ್ನಡ ಪ್ರಶ್ನೆಪತ್ರಿಕೆಯಲ್ಲಿ ಲೋಪ ಕಂಡುಬಂದಿದ್ದ ಹಿನ್ನೆಲೆ ಭಾರಿ ವಿರೋಧ ವ್ಯಕ್ತವಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಎರಡು ಬಾರಿ ಪರೀಕ್ಷೆ ನಡೆಸಲಾಗಿತ್ತು. ಇದೀಗ ಸಂದರ್ಶನಕ್ಕೆ ಆಯ್ಕೆಯಾದವರ ಪಟ್ಟಿಯಲ್ಲಿಯೂ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಇಡೀ ಪರೀಕ್ಷಾ ಪ್ರಕ್ರಿಯೆಯ ಪಾರದರ್ಶಕತೆ ಕುರಿತು ಪ್ರಶ್ನೆಗಳು ಉದ್ಭವಿಸಿವೆ.



