ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (KPSC) ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (SIT) ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದೆ. ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಕೆಪಿಎಸ್ಸಿ ಸದಸ್ಯೆ ಬಿ.ವಿ. ಗೀತಾ ಅವರ ನಿವಾಸದ ಮೇಲೆ ಎಸ್ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಮಹತ್ವದ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.
ಗೀತಾ ಅವರ ಬಂಧನದ ಬೆನ್ನಲ್ಲೇ ಈ ದಾಳಿ ನಡೆದಿದ್ದು, ನಿವಾಸದಲ್ಲಿ ದಾಖಲೆಗಳ ಪರಿಶೀಲನೆ ಹಾಗೂ ಮಹಜರು ಕಾರ್ಯವನ್ನು ಅಧಿಕಾರಿಗಳು ಕೈಗೊಂಡಿದ್ದಾರೆ. ಅಭ್ಯರ್ಥಿ ನಂದೀಶ್ ಅವರಿಂದ 20 ಲಕ್ಷ ರೂಪಾಯಿ ಹಣ ಪಡೆದ ಆರೋಪ ಬಿ.ವಿ. ಗೀತಾ ಅವರ ಮೇಲಿದೆ.
ಆರೋಪದ ಪ್ರಕಾರ, ಬೆಂಗಳೂರಿನ ರಾಜಮಹಲ್ ವಿಲಾಸ್ ಕ್ಲಬ್ ಸಮೀಪ ಗೀತಾ ಅವರು ತಮ್ಮದೇ ಕಾರಿನಲ್ಲಿ ತೆರಳಿ ಅಭ್ಯರ್ಥಿಯಿಂದ ಹಣ ಪಡೆದಿದ್ದಾರೆ ಎನ್ನಲಾಗಿದೆ. ಈ ಹಣ ವರ್ಗಾವಣೆ ಪ್ರಕರಣದ ಕುರಿತು ಎಸ್ಐಟಿ ತನಿಖೆ ಮುಂದುವರಿಸಿದೆ.
ಈ ಹಿಂದೆ ಪ್ರಕರಣದಲ್ಲಿ ಒಮ್ಮೆ ಬಂಧನಕ್ಕೊಳಗಾಗಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಗೀತಾ ಅವರನ್ನು ಎಸ್ಐಟಿ ಇದೀಗ ಮತ್ತೆ ಬಂಧಿಸಿದೆ. ಇದರ ಬೆನ್ನಲ್ಲೇ ಅವರ ನಿವಾಸದ ಮೇಲೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿರುವುದು ಪ್ರಕರಣಕ್ಕೆ ಮತ್ತಷ್ಟು ಮಹತ್ವ ತಂದಿದೆ.
ಇನ್ನು ಅಧಿಕಾರ ದುರ್ಬಳಕೆ ಹಾಗೂ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಆರೋಪಗಳ ಹಿನ್ನೆಲೆಯಲ್ಲಿ ಬಿ.ವಿ. ಗೀತಾ ಅವರನ್ನು ಕೆಪಿಎಸ್ಸಿ ಸದಸ್ಯ ಸ್ಥಾನದಿಂದ ಅಮಾನತುಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಸಂಬಂಧ ರಾಜ್ಯಪಾಲರಿಗೆ ಶಿಫಾರಸು ಸಲ್ಲಿಸುವ ಸಿದ್ಧತೆ ನಡೆಯುತ್ತಿದೆ. ಇಂದಿನ ಸಚಿವ ಸಂಪುಟ ಸಭೆಯಲ್ಲೂ ಈ ವಿಚಾರ ಚರ್ಚೆಗೆ ಬರುವ ಸಾಧ್ಯತೆಯಿದೆ.
ಮತ್ತೊಂದೆಡೆ, ಕೆಪಿಎಸ್ಸಿ ನೇಮಕಾತಿ ಹಗರಣದಲ್ಲಿ ಗೀತಾ ಅವರ ಪಾತ್ರದ ಕುರಿತು ಜಾರಿ ನಿರ್ದೇಶನಾಲಯ (ED) ಕೂಡ ತನಿಖೆ ನಡೆಸಿದ್ದು, ಈಗಾಗಲೇ ಚಾರ್ಜ್ಶೀಟ್ ಸಲ್ಲಿಸಿದೆ ಎನ್ನಲಾಗಿದೆ.









