ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಬಂಧಿಸಿದ್ದಾರೆ.
ಕೆಪಿಎಸ್‌ಸಿ ಹಗರಣಕ್ಕೆ ಸಂಬಂಧಿಸಿದ ತನಿಖೆಯ ಭಾಗವಾಗಿ ಇ.ಡಿ ಅಧಿಕಾರಿಗಳು ಶಿವಶಂಕರಪ್ಪ ಸಾಹುಕಾರ್ ಅವರ ನಿವಾಸದ ಮೇಲೆ ಎರಡನೇ ಬಾರಿಗೆ ದಾಳಿ ನಡೆಸಿದ್ದರು. ಈ ದಾಳಿ ನಡೆದ ಬೆನ್ನಲ್ಲೇ ಅವರನ್ನು ಅಧಿಕಾರಿಗಳು ವಶಕ್ಕೆ ಪಡೆದು ಬಂಧಿಸಿದ್ದಾರೆ.
ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಶಿವಶಂಕರಪ್ಪ ಸಾಹುಕಾರ್ ಅವರ ನಿವಾಸದ ಮೇಲೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಮನೆಯಲ್ಲಿದ್ದ ಶಿವಶಂಕರಪ್ಪ ಸಾಹುಕಾರ್ ಅವರನ್ನು ವಿಚಾರಣೆಗೆ ಒಳಪಡಿಸಲಾಗಿದ್ದು, ಬಳಿಕ ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ.
ಇದೀಗ ಮಾಜಿ ಕೆಪಿಎಸ್‌ಸಿ ಅಧ್ಯಕ್ಷರ ಬಂಧನದೊಂದಿಗೆ ಪ್ರಕರಣದ ತನಿಖೆ ಮತ್ತಷ್ಟು ಚುರುಕುಗೊಂಡಿದ್ದು, ಹಗರಣಕ್ಕೆ ಸಂಬಂಧಿಸಿದ ಹಣಕಾಸಿನ ವ್ಯವಹಾರಗಳು ಹಾಗೂ ಇತರ ಅಂಶಗಳ ಕುರಿತು ಇ.ಡಿ ಅಧಿಕಾರಿಗಳು ವಿಚಾರಣೆ ನಡೆಸುವ ಸಾಧ್ಯತೆಯಿದೆ.



