ಮಂಡ್ಯ:- ಹಳೆ ಮೈಸೂರು ಭಾಗದ ಜೀವನಾಡಿ ಕೆಆರ್‌ಎಸ್ ಅಣೆಕಟ್ಟೆ ಇತಿಹಾಸದಲ್ಲೇ ಮೊದಲ ಬಾರಿಗೆ ಜೂನ್ ತಿಂಗಳಲ್ಲಿ ಭರ್ತಿಯಾಗಿದೆ. ಈ ಹಿನ್ನೆಲೆ ಇಂದು ಸಿಎಂ ಸಿದ್ದರಾಮಯ್ಯ ಕಾವೇರಿ ಬಾಗಿನ ಅರ್ಪಿಸಿ ಹೊಸ ದಾಖಲೆ ಬರೆಯಲಿದ್ದಾರೆ.
ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೃಷ್ಣರಾಜ ಸಾಗರ ಜಲಾಶಯಕ್ಕೆ ಇದೇ ಮೊದಲ ಬಾರಿಗೆ ಮುಖ್ಯಮಂತ್ರಿಯೊಬ್ಬರು ಜೂನ್ ತಿಂಗಳಲ್ಲಿಯೇ ಬಾಗಿನ ಅರ್ಪಿಸಲಿದ್ದಾರೆ. ಇದಕ್ಕೆ ಕಾರಣ ಅವಧಿಪೂರ್ವ ಮುಂಗಾರು ಮಳೆ ಹಾಗೂ ಕಾವೇರಿ ಜಲಾನಯನ ಪ್ರದೇಶದಲ್ಲಿ ಕಳೆದೊಂದು ತಿಂಗಳಿನಿಂದ ಭಾರಿ ಮಳೆಯಾಗುತ್ತಿರುವುದು.
ಜೂನ್ 30ರಂದು, ಅಂದರೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಆರ್‌ಎಸ್ ಡ್ಯಾಂಗೆ ಬಾಗಿನ ಅರ್ಪಿಸಲಿದ್ದಾರೆ. ಈ ಬಗ್ಗೆ ಈಗಾಗಲೇ ಕೆಆರ್‌ಎಸ್ ಡ್ಯಾಂ ಆಡಳಿತ ಮತ್ತು ಮುಖ್ಯಮಂತ್ರಿಗಳ ಕಚೇರಿ ಮಾಹಿತಿ ನೀಡಿವೆ. ಕೆಆರ್‌ಎಸ್ ಡ್ಯಾಂ ಸಾಮಾನ್ಯವಾಗಿ ಜುಲೈ ಅಥವಾ ಆಗಸ್ಟ್ ತಿಂಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಭರ್ತಿಯಾಗುತ್ತದೆ. ಆ ನಂತರ ಮುಖ್ಯಮಂತ್ರಿಗಳು ಬಾಗಿನ ಅರ್ಪಿಸುತ್ತಾರೆ. ಆದರೆ, ಈ ವರ್ಷ ಜೂನ್ ಕೊನೆಯ ವಾರದಲ್ಲೇ ಡ್ಯಾಂ ಭರ್ತಿಯಾಗಿದ್ದು, ಸಿದ್ದರಾಮಯ್ಯನವರಿಗೆ ಹೊಸ ಅವಕಾಶ ದೊರೆತಿದೆ.