ಚಿಕ್ಕಮಗಳೂರು: ಚಿಕ್ಕಮಗಳೂರು ನಗರದ ಬೇಲೂರು ರಸ್ತೆಯ ಕೋಟೆ ಬಳಿ ಕೆಎಸ್‌ಆರ್‌ಟಿಸಿ ಬಸ್ಸಿನ ಅಕ್ಸಲ್ ತುಂಡಾದ ಪರಿಣಾಮ ನಿಯಂತ್ರಣ ತಪ್ಪಿ ಡಿವೈಡರ್ ಹಾಗೂ ರಸ್ತೆ ಬದಿಯ ವಿದ್ಯುತ್ ಟ್ರಾನ್ಸ್‌ಫಾರ್ಮರ್ ಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ.
ಹಾಸನದಿಂದ ಚಿಕ್ಕಮಗಳೂರಿಗೆ ಬರುತ್ತಿದ್ದ ಬಸ್ಸಿನ ಅಕ್ಸಲ್ ಏಕಾಏಕಿ ತುಂಡಾದ ಪರಿಣಾಮ ಬಸ್ ಮುಂಭಾಗ ಡಿವೈಡರ್‌ಗೆ ಹಾಗೂ ಹಿಂಭಾಗ ವಿದ್ಯುತ್ ಟ್ರಾನ್ಸ್‌ಫಾರ್ಮರ್‌ಗೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಬಸ್ಸಿನ ಹಿಂಬದಿ ಸೀಟ್‌ನಲ್ಲಿ ಕುಳಿತಿದ್ದ ಮೂವರು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಸ್ಸಿನ ವೇಗ ಕಡಿಮೆ ಇದ್ದುದರಿಂದ ಹಾಗೂ ಡಿಕ್ಕಿಯ ಸಂದರ್ಭದಲ್ಲಿ ವಿದ್ಯುತ್ ಟ್ರಿಪ್ ಆದ ಕಾರಣ ದೊಡ್ಡ ಅನಾಹುತ ತಪ್ಪಿದೆ. ಆದರೆ ಬಸ್ ರಸ್ತೆ ಮಧ್ಯೆ ಸಿಲುಕಿರುವುದರಿಂದ ಒಂದೇ ಬದಿಯಲ್ಲಿ ವಾಹನ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಸ್ಥಳಕ್ಕೆ ಚಿಕ್ಕಮಗಳೂರು ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.