ತುಮಕೂರು: ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಕಳ್ಳಿಪಾಳ್ಯ ಸಮೀಪ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿಯಾಗಿದ್ದು, ಭಾರೀ ದುರಂತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದ ಘಟನೆ ನಡೆದಿದೆ. ಬಸ್‌ನಲ್ಲಿದ್ದ 40ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ತಿಪಟೂರು ಡಿಪೋಗೆ ಸೇರಿದ ಈ ಬಸ್ ಹೊಸದುರ್ಗದಿಂದ ಬೆಂಗಳೂರಿನತ್ತ ಸಾಗುತ್ತಿದ್ದ ವೇಳೆ, ಗುಬ್ಬಿ ಸಮೀಪದ ಕಳ್ಳಿಪಾಳ್ಯ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಡಿಕ್ಕಿಯ ತೀವ್ರತೆಗೆ ಬಸ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.
ಅಪಘಾತದಲ್ಲಿ ಐದಾರು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
ಘಟನಾ ಸ್ಥಳಕ್ಕೆ ಗುಬ್ಬಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



