ಲಕ್ಷ್ಮೇಶ್ವರ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ಪ್ರಕರಣ: 8 ವರ್ಷಗಳ ನಂತರ 23 ಜನರ ಆರೋಪ ಸಾಬೀತು!

0
Spread the love

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: 2017ರ ಫೆಬ್ರವರಿ 5ರಂದು ಪಟ್ಟಣದ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 8 ವರ್ಷಗಳ ನಂತರ 23 ಜನ ಆರೋಪಿಗಳಿಗೆ ಶಿಕ್ಷೆ ಪ್ರಕಟಿಸಿದ್ದು, ಪ್ರಕರಣಕ್ಕೆ ಸಂಬಂದಿಸಿದಂತೆ ಆರೋಪಿತರಿಗೆ ಶಿಕ್ಷೆಯ ಪ್ರಮಾಣವನ್ನು ನ್ಯಾಯಾಲಯ ಕಾಯ್ದಿರಿಸಿದೆ.

Advertisement

ಘಟನೆಯ ವಿವರ: 2017ರ ಫೆ.5ರಂದು ಲಕ್ಷ್ಮೇಶ್ವರ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಅಕ್ರಮ ಮರಳು ಸಾಗಿಸುವ ವಾಹನ ತಡೆದು ಚಾಲಕನನ್ನು ಪೋಲಿಸರು ಥಳಿಸಿದ್ದರೆಂದು ಆರೋಪಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಬಟ್ಟೂರು ಗ್ರಾಮದ ಚಾಲಕ ಶಿವಪ್ಪ ಡೋಣಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದ. ಸುದ್ದಿ ತಿಳಿಯುತ್ತಿದ್ದಂತೆ ಆತನ ಕುಟುಂಬಸ್ಥರು ಆಸ್ಪತ್ರೆಯಿಂದ ಶವವನ್ನು ತಂದು ಪೊಲೀಸ್ ಠಾಣೆಯ ಮುಂದೆ ಇಟ್ಟು ಪ್ರತಿಭಟನೆ ನಡೆಸಿದ್ದರು.

ಪ್ರತಿಭಟನೆಯ ಕಾವು ಹೆಚ್ಚಾಗಿ ಗಲಾಟೆಯ ವೇಳೆ ಪೊಲೀಸ್ ಠಾಣೆಯಲ್ಲಿದ್ದ ಪೀಠೋಪಕರಗಳು, ಪೊಲೀಸ್ ಜೀಪ್, ಹತ್ತಾರು ದ್ವಿಚಕ್ರವಾಹನಗಳಿಗೆ ಬೆಂಕಿ ಹಚ್ಚಿ ಆರೋಪಿಗಳು ತಮ್ಮ ಅಕ್ರೋಶವನ್ನು ವ್ಯಕ್ತಪಡಿಸಿದ್ದರು. ಪ್ರಕರಣ ನಡೆದ ನಂತರ ಗೃಹ ಸಚಿವರು, ಹಿರಿಯ ಪೊಲೀಸ್ ಅಧಿಕಾರಿಗಳು ಸೇರಿದಂತೆ ವಿವಿಧ ಪಕ್ಷಗಳ ಮುಖಂಡರು ಸ್ಥಳಕ್ಕೆ ಭೇಟಿ ನೀಡಿದ್ದರು.

ಪ್ರಕರಣಕ್ಕೆ ಸಂಬಂದಿಸಿದಂತೆ ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ 112 ಜನರ ಮೇಲೆ ಪ್ರಕರಣ ದಾಖಲಾಗಿತ್ತು. ಈ 112 ಜನರಲ್ಲಿ 8 ಜನರು ಮೃತಪಟ್ಟಿದ್ದು, ಓರ್ವ ಬಾಲಪರಾಧಿ ಇದ್ದಾನೆ. ಉಳಿದ 103 ಜನರ ಮೇಲೆ ತನಿಖೆ ನಡೆಸಲಾಗಿದ್ದು, ಅದರಲ್ಲಿ 23 ಜನರಿಗೆ ಕೋರ್ಟ್ ಶಿಕ್ಷೆಯನ್ನು ನೀಡಿದೆ. ನ್ಯಾಯಾಲಯದ ನ್ಯಾಯಾಧೀಶರಾದ ರಾಜೇಶ್ವರ ಶೆಟ್ಟಿ ಅವರಿಂದ ಸೋಮವಾರ ಆದೇಶ ಪ್ರಕಟವಾಗಿದ್ದು, ಶಿಕ್ಷೆಗೊಳಗಾದ 23 ಜನ ಆರೋಪಿತರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.


Spread the love

LEAVE A REPLY

Please enter your comment!
Please enter your name here