ತಿರುವನಂತಪುರಂ:-ಕೇರಳದ ವಯನಾಡ್ ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ ಸಮಭವಸಿದ್ದ ಗುಡ್ಡ ಕುಸಿತ ದುರಂತದಲ್ಲಿ ಸಾವಿನ ಸಂಖ್ಯೆ 90 ಗಡಿ ದಾಟಿದೆ. ರಕ್ಷಣಾ ಕಾರ್ಯಕ್ಕೆ ಮಳೆ ಅಡ್ಡಿಯಾಗಿದ್ದು ಇನ್ನು 2 ದಿನ ವಯನಾಡು ಮತ್ತು ಸುತ್ತಮುತ್ತಲ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಈ ನಡುವೆ ಕೇರಳಕ್ಕೆ ಅಗತ್ಯ ನೆರವು ನೀಡುವುದಾಗಿ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ ಭರವಸೆ ನೀಡಿದ್ದಾರೆ.
ಈಗಾಗಲೇ ಸ್ಟಾಲಿನ್ ಸರ್ಕಾರದ ವತಿಯಿಂದ ರಕ್ಷಣಾ ಕಾರ್ಯಾಚರಣೆಗಾಗಿ 5 ಕೋಟಿ ರೂ. ತುರ್ತು ನೆರವು ಘೋಷಿಸಿದ್ದಾರೆ. ಅಲ್ಲದೇ ರಾಜ್ಯದಿಂದ ರಕ್ಷಣಾ ತಂಡಗಳನ್ನು ನಿಯೋಜಿಸುವಂತೆ ಹಿರಿಯ ಐಎಎಸ್ ಅಧಿಕಾರಿಗಳಾದ ಜಿ ಸಮೀರನ್ ಮತ್ತು ಜಾನಿ ಟಾಮ್ ವರ್ಗೀಸ್ ಅವರಿಗೆ ಜವಾಬ್ದಾರಿ ವಹಿಸಿದ್ದಾರೆ. ಸ್ಟಾಲಿನ್ ಅವರು ಕೇರಳ ಸಿಎಂ ಪಿಣರಾಯಿ ವಿಜಯನ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದು, ತಮಿಳುನಾಡು ಸರ್ಕಾರದಿಂದ ಸಾಧ್ಯವಿರುವ ಎಲ್ಲಾ ರೀತಿಯ ಸಹಾಯ ನೀಡುವುದಾಗಿ ಭರವಸೆ ನೀಡಿದ್ದಾರೆ. 20 ಅಗ್ನಿಶಾಮಕ ದಳದವರು, 20 ಸಿಬ್ಬಂದಿಯನ್ನು ಒಳಗೊಂಡ ಎಸ್‌ಡಿಆರ್‌ಎಫ್ ತಂಡ ಮತ್ತು 10 ವೈದ್ಯರು, ದಾದಿಯರು ಹಾಗೂ ಸಹಾಯಕ ಸಿಬ್ಬಂದಿಯನ್ನೊಳಗೊಂಡ ತಂಡವನ್ನು ಕೇರಳಕ್ಕೆ ಕಳುಹಿಸುವುದಾಗಿ ತಿಳಿಸಿದ್ದಾರೆಂದು ಎಂದು ಸರ್ಕಾರಿ ಮೂಲಗಳಿಂದ ತಿಳಿದುಬಂದಿದೆ.
ಅಲ್ಲದೇ ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಪ್ರತಿಕ್ರಿಯಿಸಿರುವ ಕರ್ನಾಟಕ ಸಿಎಂ ಸಿದ್ದರಾಮಯ್ಯ, ಕೇರಳದಲ್ಲಿ ಸಂಭವಿಸಿದ ಗುಡ್ಡ ಕುಸಿತ ಅವಘಡದಲ್ಲಿ 70ಕ್ಕೂ ಅಧಿಕ ಮಂದಿ ಸಾವಿಗೀಡಾಗಿದ್ದು, ಹಲವರು ಕಣ್ಮರೆಯಾಗಿರುವ ಸುದ್ದಿ ಕೇಳಿ ಎದೆ ನಲುಗಿತು. ಇಂತಹ ಸಂಕಷ್ಟದ ಸಮಯದಲ್ಲಿ ನೆರೆಯ ಕೇರಳ ಜನರ ಜೊತೆ ನಾವು ನಿಲ್ಲಲಿದ್ದೇವೆ. ಕೇರಳಕ್ಕೆ ಅಗತ್ಯವಿರುವ ಎಲ್ಲಾ ನೆರವನ್ನು ನಮ್ಮ ಸರ್ಕಾರ ನೀಡಲಿದೆ ಎಂದು ಭರವಸೆ ನೀಡಿದ್ದಾರೆ.



