ಹಾಸನ: ಮಳೆಗಾಲ ಆರಂಭವಾಗುತ್ತಿದ್ದಂತೆ ಸಕಲೇಶಪುರ ತಾಲೂಕಿನಲ್ಲಿ ಭೂಕುಸಿತದ ಆತಂಕ ಮತ್ತೆ ಎದುರಾಗಿದೆ.
ಕೇರಳದಲ್ಲಿ ಇತ್ತೀಚೆಗೆ ಸಂಭವಿಸಿದ ಭೂದುರಂತಗಳ ಹಿನ್ನೆಲೆಯಲ್ಲಿ, ಸಕಲೇಶಪುರದ ಆನೆಮಹಲ್ ಪ್ರದೇಶದ ಹತ್ತಾರು ಕುಟುಂಬಗಳು ಜೀವಭಯದಲ್ಲಿ ದಿನ ಕಳೆಯುವಂತಾಗಿದೆ.
ಪ್ರತಿ ವರ್ಷ ಮಳೆಗಾಲದಲ್ಲಿ ಈ ಭಾಗದಲ್ಲಿ ಭೂಕುಸಿತದ ಅಪಾಯ ಎದುರಾಗುತ್ತಿದ್ದು, ಕಳೆದ ವರ್ಷ ಜಿಲ್ಲಾಡಳಿತವು ನಿವಾಸಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವುದಾಗಿ ಭರವಸೆ ನೀಡಿತ್ತು. ಆದರೆ ಇದುವರೆಗೂ ಯಾವುದೇ ಶಾಶ್ವತ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಮಳೆ ಹೆಚ್ಚಾದ ಸಂದರ್ಭದಲ್ಲಿ ಮನೆ ಖಾಲಿ ಮಾಡುವಂತೆ ಅಧಿಕಾರಿಗಳು ಸೂಚಿಸುತ್ತಿದ್ದಾರೆ. ಆದರೆ ಪರ್ಯಾಯ ವಸತಿ ವ್ಯವಸ್ಥೆ ಕಲ್ಪಿಸದೆ ಎಲ್ಲಿಗೆ ತೆರಳಬೇಕು ಎಂದು ಆನೆಮಹಲ್ ನಿವಾಸಿಗಳು ಪ್ರಶ್ನಿಸಿದ್ದಾರೆ.
ಮಳೆಗಾಲದಲ್ಲಿ ಜೀವಭಯದಿಂದ ಬದುಕುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಜಿಲ್ಲಾಡಳಿತ ತಕ್ಷಣ ಕ್ರಮ ಕೈಗೊಂಡು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ವ್ಯವಸ್ಥೆ ಮಾಡಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.



