ಬೆಂಗಳೂರು: ನಗರದಲ್ಲಿ ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಜಿಬಿಎ ಐದು ನಗರ ಪಾಲಿಕೆಗಳ 2026-27ನೇ ಸಾಲಿನ ಬಜೆಟ್ ಸಿದ್ಧತೆ ಕುರಿತು ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ರಸ್ತೆಗಳಲ್ಲಿ ಹೆಚ್ಚು ಕಾಲ ನಿಲ್ಲಿಸಿರುವ ಹಳೆಯ ವಾಹನಗಳನ್ನು ಟೋಯಿಂಗ್ ಮಾಡಿ ನಿರ್ದಿಷ್ಟ ಸ್ಥಳಗಳಿಗೆ ಕೊಂಡೊಯ್ಯಲಾಗುವುದು. ಈ ಕಾರ್ಯಕ್ಕಾಗಿ ಬೆಳ್ಳಳ್ಳಿ, ಮಿಟಗಾನಹಳ್ಳಿ, ಸೊಂಡೆಕೊಪ್ಪ ಹಾಗೂ ಗಿಡ್ಡೇನಹಳ್ಳಿ ಪ್ರದೇಶಗಳಲ್ಲಿ ಜಾಗಗಳನ್ನು ಈಗಾಗಲೇ ಗುರುತಿಸಲಾಗಿದೆ. ನಗರದಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಇದು ಮಹತ್ವದ ಹೆಜ್ಜೆಯಾಗಲಿದೆ ಎಂದರು.
ಇನ್ನು ಮುಂದೆ ನಾನ್-ಪಾರ್ಕಿಂಗ್ ಪ್ರದೇಶಗಳಲ್ಲಿ ವಾಹನ ನಿಲ್ಲಿಸಿದರೂ ಕೂಡ ಟೋಯಿಂಗ್ ಕ್ರಮ ಜರುಗಲಿದೆ. ಪ್ರತಿಯೊಂದು ಕಾರ್ಪೊರೇಷನ್‌ಗೆ ಎರಡು ಟೋಯಿಂಗ್ ವಾಹನಗಳನ್ನು ಒದಗಿಸಲಾಗಿದ್ದು, ಈಗಾಗಲೇ ಅಗತ್ಯ ಸೂಚನೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.
ಬೀದಿ ಬದಿ ವ್ಯಾಪಾರ ಸಂಬಂಧ ಮಾತನಾಡಿದ ಅವರು, ವ್ಯಾಪಾರ ನಡೆಸಲು ನಿಗದಿತ ಸ್ಥಳಗಳನ್ನು ಗುರುತಿಸಲಾಗುವುದು. ನೋಂದಣಿ ಮಾಡಿಕೊಂಡವರಿಗೆ ಮಾತ್ರ ವ್ಯಾಪಾರ ಮಾಡಲು ಅವಕಾಶ ನೀಡಲಾಗುವುದು. ಐಡೆಂಟಿಟಿ ಕಾರ್ಡ್ ಹೊಂದಿರುವವರಿಗೆ ಮಾತ್ರ ಮಾರಾಟಕ್ಕೆ ಅನುಮತಿ ನೀಡುವ ಕ್ರಮ ಜಾರಿಯಾಗಲಿದೆ ಎಂದರು.
ಅದೇ ರೀತಿ, ನಗರದಲ್ಲಿ ಅನಧಿಕೃತವಾಗಿ ಫ್ಲೆಕ್ಸ್ ಅಳವಡಿಸುವವರ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳಲಾಗುವುದು. ಫ್ಲೆಕ್ಸ್ ಹಾಕುವವರಿಗೆ 50 ಸಾವಿರದಿಂದ 1 ಲಕ್ಷ ರೂಪಾಯಿ ವರೆಗೆ ದಂಡ ವಿಧಿಸಲಾಗುವುದು ಎಂದು ಎಚ್ಚರಿಸಿದರು.
ಬೀದಿ ಬದಿ ವ್ಯಾಪಾರ ಹಾಗೂ ಫುಟ್‌ಪಾತ್ ಸಮಸ್ಯೆ ನಿವಾರಣೆಗೆ ಹೊಸ ಪಾಲಿಸಿ ತರಲು ಯೋಚನೆ ನಡೆಯುತ್ತಿದೆ. ಪಾರ್ಕ್‌ಗಳಲ್ಲಿ ನಡೆಯುತ್ತಿರುವ ಅನಧಿಕೃತ ಚಟುವಟಿಕೆಗಳನ್ನು ತಡೆಗಟ್ಟಲು ಪಾರ್ಕ್ ಸಮಯ ನಿಗದಿ ಮಾಡುವುದಾಗಿ ತಿಳಿಸಿದರು.
ಒಟ್ಟಾರೆ, ಬೆಂಗಳೂರು ನಗರದಲ್ಲಿ ಟ್ರಾಫಿಕ್, ವ್ಯಾಪಾರ ಮತ್ತು ಸಾರ್ವಜನಿಕ ಶಿಸ್ತಿನ ನಿಯಂತ್ರಣಕ್ಕಾಗಿ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದೆ.



