ವಿಜಯಸಾಕ್ಷಿ ಸುದ್ದಿ, ಧಾರವಾಡ:ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಜಿಲ್ಲಾ ನ್ಯಾಯಾಂಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಅಭಿಯೋಜನೆ ಇಲಾಖೆ, ಧಾರವಾಡ ವಕೀಲರ ಸಂಘ ಇವರ ಸಹಯೋಗದೊಂದಿಗೆ ಧಾರವಾಡ ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ಸಂವಿಧಾನ ದಿನಾಚರಣೆಯ ಅಂಗವಾಗಿ ಕಾನೂನು ಅರಿವು–ನೆರವು ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಎಸ್. ಭಾರತೀ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಭಾರತದ ಸಂವಿಧಾನವು ಜಗತ್ತಿನ ಅತೀ ದೊಡ್ಡ ಲಿಖಿತ ಸಂವಿಧಾನವಾಗಿದೆ. ಸಂವಿಧಾನದ ಸಂಪೂರ್ಣ ಅರ್ಥ ಅದರ ಪೀಠಿಕೆಯಲ್ಲಿ ಅಡಗಿದೆ. ಆದ್ದರಿಂದ, ಭಾರತದ ಪ್ರತಿಯೊಬ್ಬ ಪ್ರಜೆಯು ಸಂವಿಧಾನದ ಪೀಠಿಕೆಯನ್ನು ಅರಿತಿರಬೇಕು. ಸಂವಿಧಾನದಲ್ಲಿರುವ ಮೂಲಭೂತ ಹಕ್ಕುಗಳೊಂದಿಗೆ ಕರ್ತವ್ಯವನ್ನು ಪಾಲಿಸುವ ಮನೋಭಾವನೆ ಎಲ್ಲರಲ್ಲಿಯೂ ಮೂಡಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಖಾಯಂ ಜನತಾ ನ್ಯಾಯಾಲಯ ಅಧ್ಯಕ್ಷರು ಹಾಗೂ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಸುವರ್ಣಾ ಕೆ. ಮಿರ್ಜಿ ವಹಿಸಿದ್ದರು. ಅತಿಥಿಗಳಾಗಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ನಾಗರಾಜಪ್ಪ ಎ.ಕೆ, ರಾಜಕುಮಾರ ಸಿ, ಜರೀನಾ, ಪೂರ್ಣಿಮಾ ಭಂಡಾರಕರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ, ಹಿರಿಯ ಸಿವಿಲ್ ನ್ಯಾಯಾಧೀಶ ಪರಶುರಾಮ ಎಂ. ದೊಡ್ಡಮನಿ, ಧಾರವಾಡ ವಕೀಲರ ಸಂಘದ ಅಧ್ಯಕ್ಷ ಅಶೋಕ ವಿ. ಏಣಗಿ, ಸರ್ಕಾರಿ ಅಭಿಯೋಜಕಿ ಶೈಲಾ ಅಂಗಡಿ ಭಾಗವಹಿಸಿದ್ದರು.
ನಗರದ ನ್ಯಾಯಾಧೀಶರು, ವಕೀಲರ ಸಂಘದ ಸದಸ್ಯರು, ಜಿಲ್ಲಾ ನ್ಯಾಯಾಲಯದ ಸಿಬ್ಬಂದಿ, ಅಭಿಯೋಜನೆ ಇಲಾಖೆಯ ಸಿಬ್ಬಂದಿ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಿಬ್ಬಂದಿಗಳು ಭಾಗವಹಿಸಿದ್ದರು.



