ವಿಜಯಸಾಕ್ಷಿ ಸುದ್ದಿ, ನವದೆಹಲಿ: ಅಮೆರಿಕದ ಶಿಕ್ಷಣ ಕ್ಷೇತ್ರದಲ್ಲಿನ ವಿನೂತನ ಯೋಜನೆಗಳು ಹಾಗೂ ಆರೋಗ್ಯ ಕ್ಷೇತ್ರದಲ್ಲಿನ ಅತ್ಯಾಧುನಿಕ ತಂತ್ರಜ್ಞಾನ ಅಳವಡಿಕೆ ಮುಂತಾದ ವ್ಯವಸ್ಥೆಗಳನ್ನು ಅಳವಡಿಸಿಕೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಸಲಹೆ ನೀಡುವುದಾಗಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು.
ಅಮೇರಿಕಾದ ಬೋಸ್ಟನ್ ನಗರದಲ್ಲಿ `ಶಾಸಕಾಂಗ ಶೃಂಗಸಭೆ-2025’ರ ನೇಪಥ್ಯದಲ್ಲಿ ನಡೆದ ವಿಚಾರ ಗೋಷ್ಠಿಯಲ್ಲಿ ಅಮೆರಿಕದ ಶಿಕ್ಷಣ ಮತ್ತು ಆರೋಗ್ಯ ವ್ಯವಸ್ಥೆಗಳ ಹೋಲಿಕೆ ಮತ್ತು ನಮ್ಮ ದೇಶದ ಶಿಕ್ಷಣ ಮತ್ತು ಆರೋಗ್ಯ ವ್ಯವಸ್ಥೆಯನ್ನು ನಿರ್ದಿಷ್ಟವಾಗಿ ಸಂಪರ್ಕಿಸುವಲ್ಲಿ ಶಾಸಕಾಂಗದ ಪಾತ್ರಗಳ ಕುರಿತು ಸಭಾಪತಿ ಬಸವರಾಜ ಹೊರಟ್ಟಿ ಚರ್ಚೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಶೈಕ್ಷಣಿಕ ವ್ಯವಸ್ಥೆಗೆ ಅನುಗುಣವಾಗಿ ಸಮಗ್ರ ರಾಜ್ಯದ ಶಾಲಾ ಶಿಕ್ಷಣಕ್ಕೆ ಗುಣಮಟ್ಟದ ಶಿಕ್ಷಣ ವ್ಯವಸ್ಥೆಯನ್ನು ಸಂಯೋಜಿಸುವುದರಿಂದ ನಮ್ಮ ವಿದ್ಯಾರ್ಥಿಗಳಿಗೆ ಜಗತ್ತಿನ ಉನ್ನತ ಶಿಕ್ಷಣ ನೀಡಲು ಅನುಕೂಲವಾಗುತ್ತದೆ ಎಂದು ತಿಳಿಸಿದರು.
ಅಮೆರಿಕದ ಆರೋಗ್ಯ, ಶಿಕ್ಷಣ ಮತ್ತು ಉನ್ನತ ವೈದ್ಯಕೀಯ ಸೇವೆಗಳನ್ನು ನಮ್ಮ ರಾಜ್ಯದಲ್ಲಿ ಅಳವಡಿಸಲು ಕೈಗೊಳ್ಳಬೇಕಾಗಿರುವ ಕ್ರಮಗಳ ಕುರಿತು ವಿವರಿಸುವುದರ ಜೊತೆಗೆ ಈ ವಿಚಾರಗಳಿಗೆ ಸಂಬಂಧಿಸಿದಂತೆ ದುಂಡು ಮೇಜಿನ ಸಭೆಯಲ್ಲಿ ಗಾನಾ ಮತ್ತು ಅಮೆರಿಕದ ಸೆನೆಟರ್ (ಪ್ರತಿನಿಧಿ)ಗಳೊಂದಿಗೆ ಕೂಲಂಕಷವಾಗಿ ಚರ್ಚಿಸಿ ಅಲ್ಲಿನ ಮೂಲಭೂತ ಸೇವೆಗಳ ಬಗ್ಗೆ ಅರಿವು ಪಡೆದುಕೊಂಡಿದ್ದು, ನಮ್ಮ ಸರ್ಕಾರದ ಗಮನಕ್ಕೆ ತರಲಾಗುವುದು ಎಂದರು.