ಬೆಂಗಳೂರು: ಬೆಂಗಳೂರಿನ ಬನಶಂಕರಿ ಸಮೀಪದ ಕರಿಯಣ್ಣಪಾಳ್ಯದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ.
ಶನಿವಾರ ಸಂಜೆ ಸುಮಾರು 7 ಗಂಟೆ ವೇಳೆಗೆ ಕರಿಯಣ್ಣಪಾಳ್ಯದಲ್ಲಿ ಚಿರತೆ ಕಾಣಿಸಿಕೊಂಡಿದೆ. ಚಿರತೆಯನ್ನು ಕಂಡ ಸ್ಥಳೀಯರು ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.
ಮಾಹಿತಿ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿರತೆಯ ಸಂಚಾರದ ಬಗ್ಗೆ ಮಾಹಿತಿ ಕಲೆಹಾಕಲಾಗಿದ್ದು, ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಅಗತ್ಯವಿದ್ದಲ್ಲಿ ಚಿರತೆಯನ್ನು ಸೆರೆಹಿಡಿಯಲು ಬೋನು ಅಳವಡಿಸುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇತ್ತೀಚೆಗೆ ಬ್ಯಾಡರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಬಿಇಎಲ್ ಲೇಔಟ್ ಪ್ರದೇಶದಲ್ಲಿಯೂ ಚಿರತೆ ಕಾಣಿಸಿಕೊಂಡಿತ್ತು. ಅದರ ಸಂಚಾರದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದವು. ಇದೀಗ ಬನಶಂಕರಿ ಸಮೀಪವೂ ಚಿರತೆ ಕಾಣಿಸಿಕೊಂಡಿರುವುದು ಸ್ಥಳೀಯರ ಆತಂಕವನ್ನು ಮತ್ತಷ್ಟು ಹೆಚ್ಚಿಸಿದೆ.
ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು. ಚಿರತೆ ಕಂಡುಬಂದರೆ ಅದರ ಸಮೀಪ ಹೋಗದೆ, ತಕ್ಷಣ ಅರಣ್ಯ ಇಲಾಖೆ ಅಥವಾ ಪೊಲೀಸರಿಗೆ ಮಾಹಿತಿ ನೀಡುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.



