ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೆ ಚಿರತೆ ಆತಂಕ ಶುರುವಾಗಿದೆ.
ನಗರದ ದಾಸನಪುರದ ಅಣ್ಣಿಗೆರೆ ಸಮೀಪದ ಸಪ್ತಗಿರಿ ಲೇಔಟ್ನಲ್ಲಿ ಮನೆಯ ಗೇಟ್ ಮುಂದೆಯೇ ಚಿರತೆ ಕಾಣಿಸಿಕೊಂಡಿದ್ದು, ಸ್ಥಳೀಯ ನಿವಾಸಿಗಳಲ್ಲಿ ಭೀತಿ ಮೂಡಿಸಿದೆ.
ನವೆಂಬರ್ 26ರಂದು ಮಧ್ಯರಾತ್ರಿ ಸುಮಾರು 12 ಗಂಟೆಯ ವೇಳೆಗೆ ಮನೆಯೊಂದರ ಸಿಸಿಟಿವಿ ಕ್ಯಾಮರಾದಲ್ಲಿ ಚಿರತೆಯ ಓಡಾಟದ ದೃಶ್ಯ ಸೆರೆಯಾಗಿದೆ. ಜನವಸತಿ ಪ್ರದೇಶದಲ್ಲೇ ಚಿರತೆ ರಾಜಾರೋಷವಾಗಿ ಓಡಾಡುತ್ತಿರುವುದನ್ನು ಕಂಡು ನಿವಾಸಿಗಳು ಬೆಚ್ಚಿಬಿದ್ದಿದ್ದಾರೆ.
ಈ ಭಾಗದಲ್ಲಿ ರಾತ್ರಿ ವೇಳೆ ಮನೆಯಿಂದ ಹೊರಬರಲು ಜನರು ಆತಂಕಪಡುವಂತಾಗಿದೆ. ಈಗಾಗಲೇ ಚಿರತೆಯ ಓಡಾಟದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸ್ಥಳೀಯರಲ್ಲಿ ಭಯ ಹೆಚ್ಚಾಗಿದೆ.
ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಚಿರತೆಯನ್ನು ಸೆರೆಹಿಡಿಯಬೇಕು. ಜನರ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ನಿವಾಸಿಗಳು ಒತ್ತಾಯಿಸಿದ್ದಾರೆ.









