ವಿಜಯಸಾಕ್ಷಿ ಸುದ್ದಿ, ರೋಣ: ದೇಹ ಮತ್ತು ಮನಸ್ಸಿನ ಮೇಲೆ ದುಷ್ಪರಿಣಾಮ ಬೀರುವ ಯಾವುದೇ ಚಟವನ್ನು ವ್ಯಸನ ಎನ್ನಲಾಗುತ್ತದೆ. ಇಂತಹ ವ್ಯಸನಗಳಿಂದ ದೂರವಿರುವ ಮೂಲಕ ಸಮಾಜವನ್ನು ವ್ಯಸನ ಮುಕ್ತವಾಗಿಸುವುದು ನಮ್ಮೆಲ್ಲರ ಕರ್ತವ್ಯವಾಗಬೇಕು ಎಂದು ರೋಣ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಬಿ.ಕಂದಕೂರ ಹೇಳಿದರು.
ಗದಗ ಜಿಲ್ಲಾಡಳಿತ ಮತ್ತು ರೋಣ ತಾಲೂಕಾಡಳಿತದ ಸಂಯುಕ್ತ ಆಶ್ರಯದಲ್ಲಿ ಡಾ. ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆಯ ಅಂಗವಾಗಿ ರೋಣ ತಾಲೂಕಿನ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ವ್ಯಸನಮುಕ್ತ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಶಿಸ್ತು ಮತ್ತು ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು. ಮದ್ಯಪಾನ, ಧೂಮಪಾನ, ಮಾದಕ ದ್ರವ್ಯಗಳ ಸೇವನೆಯಂತಹ ದುಶ್ಚಟಗಳು ದೇಹದ ಜೊತೆಗೆ ಮನಸ್ಸಿನ ಮೇಲೂ ದೀರ್ಘಕಾಲೀನ ದುಷ್ಪರಿಣಾಮ ಬೀರುತ್ತವೆ. ಇವುಗಳಿಂದ ದೂರವಿರುವುದರ ಜೊತೆಗೆ ಸಮಾಜದಲ್ಲಿ ಜಾಗೃತಿ ಮೂಡಿಸುವ ಕಾರ್ಯದಲ್ಲಿ ಯುವಕರು ಭಾಗಿಯಾಗಬೇಕು ಎಂದು ಹೇಳಿದರು.
ಸಹಾಯಕ ಅರೋಗ್ಯ ಅಧಿಕಾರಿ ಕೆ.ಎ. ಹಾದಿಮನಿ ವ್ಯಸನದಿಂದ ಉಂಟಾಗುವ ಕಾಯಿಲೆಗಳು, ಸಾಮಾಜಿಕ ಮತ್ತು ಆರ್ಥಿಕ ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಿ, ವ್ಯಸನ ಮುಕ್ತ ಸಮಾಜವು ಕೇವಲ ಕನಸಲ್ಲ, ಅದನ್ನು ನಾವೆಲ್ಲರೂ ಒಗ್ಗಟ್ಟಿನಿಂದ ಸಾಧಿಸಬಹುದು. ಇದಕ್ಕಾಗಿ ಯುವಕರು ಮುಂಚೂಣಿಯಲ್ಲಿ ನಿಲ್ಲಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ತಾಲೂಕಾ ಆರೋಗ್ಯ ಇಲಾಖೆಯ ಅಧಿಕಾರಿಗಳಾದ ಡಾ. ಬಸವರಾಜ ಭಜಂತ್ರಿ, ಸಹಾಯಕ ಅರೋಗ್ಯ ಅಧಿಕಾರಿ ಕೆ.ಎ. ಹಾದಿಮನಿ, ಉಪ ತಹಸೀಲ್ದಾರ ಗಣೇಶ ಕೊಪ್ಪದ, ತಾಲೂಕಾ ಸಮಜಾ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಗೀತಾ ಆಲೂರ ಸೇರಿದಂತೆ ಗಣ್ಯರು, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.