ವಿಜಯಸಾಕ್ಷಿ ಸುದ್ದಿ, ಗದಗ: ಮಲ್ಲಸಮುದ್ರದ ಪೊಲೀಸ್ ಮೀಸಲು ಮೈದಾನಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿಯು ಗುಣಮಟ್ಟದಲ್ಲಿ ರಾಜ್ಯಕ್ಕೆ ಮಾದರಿಯಾಗುವಂತೆ ನಿರ್ಮಿಸಬೇಕು ಎಂದು ರಾಜ್ಯದ ಕಾನೂನು, ಪ್ರವಾಸೋದ್ಯಮ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.
ಅವರು ಶನಿವಾರ ಪೊಲೀಸ್ ಇಲಾಖೆ ಆಯೋಜಿಸಿದ್ದ ಗದಗಿನ ಮಲ್ಲಸಮುದ್ರದ ಪೊಲೀಸ್ ಮೀಸಲು ಕಚೇರಿ ಮೈದಾನಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.
ಗದಗ ಜಿಲ್ಲೆಯಲ್ಲಿ ಪೊಲೀಸ್ ಇಲಾಖೆಯಿಂದ `ಥರ್ಡ್ ಐ’ ಯೋಜನೆ ಜಾರಿಗೊಳಿಸುವ ಮೂಲಕ ಜಿಲ್ಲಾದ್ಯಂತ ಕಾನೂನು ಪಾಲನೆಗೆ ಸಹಕಾರಿಯಾಗಿದೆ. ಸಾರ್ವಜನಿಕರು ನಿಯಮ ಪಾಲನೆಯೊಂದಿಗೆ ಅಪಘಾತಗಳ ಸಂಖ್ಯೆ ಕಡಿಮೆಯಾಗಿದೆ. ವಿವಿಧ ಅಪರಾಧ ಪ್ರಕರಣಗಳನ್ನು ಭೇದಿಸಲೂ ಪೊಲೀಸರಿಗೆ ಸಹಕಾರಿಯಾಗಿದೆ. ಆ ಮೂಲಕ ಪ್ರಕರಣಗಳ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಇಂದು ಪೊಲೀಸ್ ಇಲಾಖೆಗೆ ಎರಡು ವಾಹನಗಳನ್ನು ಹಸ್ತಾಂತರಿಸಲಾಗಿದೆ. ಒಂದು ವಾಹನವನ್ನು ರಾಜ್ಯ ಖನಿಜ ಅಭಿವೃದ್ಧಿ ನಿಗಮದಿಂದ ಹಾಗೂ ಇನ್ನೊಂದನ್ನು ವಿ.ಪ ಸದಸ್ಯ ಎಸ್.ವಿ. ಸಂಕನೂರರ ಪ್ರದೇಶಾಭಿವೃದ್ಧಿ ಅನುದಾನದಿಂದ ಒದಗಿಸಿರುವುದು ಇಲಾಖೆಗೆ ಸಹಕಾರಿಯಾಗಿದೆ ಎಂದರು.
ಇದೇ ಸಂದರ್ಭದಲ್ಲಿ ರಸ್ತೆ ನಿರ್ಮಾಣಕ್ಕೆ ತೊಂದರೆಯಾಗಿದ್ದ ಅಡೆತಡೆಗಳನ್ನು ನಿವಾರಿಸಿದ ವಿವಿಧ ಇಲಾಖೆ ಅಧಿಕಾರಿ, ಸಿಬ್ಬಂದಿಗಳಿಗೆ ಸಚಿವರು ಪೊಲೀಸ್ ಇಲಾಖೆಯಿಂದ ಅಭಿನಂದನಾ ಪತ್ರ ನೀಡಿ ಗೌರವಿಸಿದರು. ರಸ್ತೆ ನಿರ್ಮಾಣಕ್ಕೆ ಸಹಕಾರ ನೀಡಿದ ಗಣ್ಯರಿಗೆ ಗೌರವ ಸಮರ್ಪಿಸಲಾಯಿತು.
ಈ ಸಂದರ್ಭದಲ್ಲಿ ರಾಜ್ಯ ಖನಿಜ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ರೋಣ ಶಾಸಕ ಜಿ.ಎಸ್. ಪಾಟೀಲ, ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಚಿ, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ, ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷಕುಮಾರ ಉಪಸ್ಥಿತರಿದ್ದರು.
ಜಿಲ್ಲಾ ಪೊಲೀಸ್ ಪರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ ಅತಿಥಿಗಳನ್ನು ಸ್ವಾಗತಿಸಿ ಪ್ರಸ್ತಾವಿಕವಾಗಿ ಮಾತನಾಡಿ, 1.6 ಕಿಲೋಮೀಟರ್ ರಸ್ತೆ ನಿರ್ಮಾಣಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಒಂದು ಕೋಟಿ ರೂ, ಸ್ಥಳೀಯ ಶಾಸಕರ ಪ್ರದೇಶಾಭಿವೃದ್ಧಿ ಅನುದಾನದಲ್ಲಿ 50 ಲಕ್ಷ ರೂ ನೀಡುವ ಮೂಲಕ ರಸ್ತೆ ನಿರ್ಮಾಣಕ್ಕೆ ಸಚಿವ ಎಚ್.ಕೆ. ಪಾಟೀಲ್ ಅನುದಾನ ಒದಗಿಸಿದ್ದಾರೆ ಎಂದರು.