ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯಲ್ಲಿ ಕೋಟ್ಪಾ ಕಾಯ್ದೆ ಪರಿಣಾಮಕಾರಿಯಾಗಿ ಅನುಷ್ಠಾನವಾಗಬೇಕು. ಕೋಟ್ಪಾ ಕಾಯ್ದೆ ಉಲ್ಲಂಘನೆಯಾದಲ್ಲಿ ಅಂತಹ ಅಂಗಡಿಗಳ ಪರವಾನಿಗೆಯನ್ನು ರದ್ದುಗೊಳಿಸಬೇಕೆಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಜಿಲ್ಲಾ ತಂಬಾಕು ನಿಷೇಧ ಕೋಶದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೋಟ್ಪಾ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಕೋಟ್ಪಾ ಕಾಯ್ದೆ ಪ್ರಕಾರ ಶಿಕ್ಷಣ ಸಂಸ್ಥೆಗಳ 100 ಗಜದ ಸುತ್ತಳತೆಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಶಿಕ್ಷಾರ್ಹ ಅಪರಾಧವಾಗಿದ್ದು, ಶಾಲಾ/ಕಾಲೇಜು ಹಾಗೂ ಶಿಕ್ಷಣ ಸಂಸ್ಥೆಗಳ ಆವರಣದಿಂದ 100 ಗಜದಲ್ಲಿ ತಂಬಾಕು ಮಾರಾಟವಾಗುತ್ತಿದ್ದರೆ ಅಗತ್ಯ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ಎನ್.ಟಿ.ಸಿ.ಪಿ ಕಾರ್ಯಕ್ರಮಾಧಿಕಾರಿ ಡಾ. ವೆಂಕಟೇಶ ರಾಥೋಡ್ ಮಾತನಾಡಿ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಗದಗದಿಂದ ಹಮ್ಮಿಕೊಳ್ಳಲಾದ ಕಾರ್ಯಕ್ರಮಗಳ ಕುರಿತು ವಿವರಿಸಿ, ಜಿಲ್ಲೆಯಲ್ಲಿ ಜಿಲ್ಲಾ ತಂಬಾಕು ನಿಷೇಧ ಕೋಶದಿಂದ 18 ದಾಳಿ ನಡೆಸಿ 219 ಪ್ರಕರಣ ದಾಖಲಿಸಿ 35 ಸಾವಿರ ರೂ ದಂಡ ಸಂಗ್ರಹಿಸಲಾಗಿದೆ. ಪೊಲೀಸ್ ಇಲಾಖೆಯಿಂದ ಒಟ್ಟು 1381 ಪ್ರಕರಣ ದಾಖಲಿಸಿ ರೂ. 121550 ದಂಡ ಸಂಗ್ರಹಿಸಲಾಗಿದೆ. ಜಿಲ್ಲೆಯ 11 ಗ್ರಾಮಗಳಲ್ಲಿ ಪ್ರಾಥಮಿಕ ಸಭೆ ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ತಂಬಾಕು ನಿಷೇಧ ಕೋಶದಿಂದ 28 ಶಾಲೆ/ಕಾಲೇಜುಗಳನ್ನು ತಂಬಾಕು ಮುಕ್ತ ಶಿಕ್ಷಣ ಸಂಸ್ಥೆ ಘೋಷಣೆ ಪ್ರಕ್ರಿಯೆ ಮಾಡಲಾಗಿದೆ ಎಂದು ವಿವರಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್, ಡಿವೈಎಸ್‌ಪಿ ಮಹಾಂತೇಶ್ ಸಜ್ಜನರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ಎಸ್. ನೀಲಗುಂದ, ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ. ಮೀನಾಕ್ಷಿ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ವೈ.ಕೆ. ಭಜಂತ್ರಿ, ಜಿಲ್ಲಾ ಶಸ್ತçಚಿಕಿತ್ಸಕ ಡಾ. ಬಿ.ಸಿ. ಕರಿಗೌಡ್ರ, ಡಾ. ರಾಜೇಂದ್ರ ಬಸರಿಗಿಡದ, ಡಾ. ಅರುಂಧತಿ ಕುಲಕರ್ಣಿ, ತಾಲೂಕು ಆರೋಗ್ಯಾಧಿಕಾರಿಗಳು, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಲಹೆಗಾರರಾದ ಗೋಪಾಲ ಸುರಪುರ, ಮತ್ತಿತರರು ಇದ್ದರು.
ಎಲ್ಲಾ ಅಂಗಡಿ ಮುಂಗಟ್ಟುಗಳ ಮುಂದೆ ಧೂಮಪಾನ ನಿಷೇಧ ಹಾಗೂ 21 ವರ್ಷದೊಳಗಿನವರಿಗೆ ತಂಬಾಕು ನಿಷೇಧ ಕುರಿತ ನಾಮಫಲಕ ಬಿತ್ತರಿಸುವುದು ಅಂಗಡಿ ಮಾಲಿಕರ, ಸ್ಥಳದ ಮುಖ್ಯಸ್ಥರ ಜವಾಬ್ದಾರಿಯೂ ಆಗಿರುತ್ತದೆ. ಕೋಟ್ಪಾ ಕಾಯ್ದೆ ಉಲ್ಲಂಘನೆಯಾದಲ್ಲಿ ಅಂತಹ ಅಂಗಡಿಗಳ ಪರವಾನಿಗೆಯನ್ನು ರದ್ದುಗೊಳಿಸಿ ಕಾನೂನು ರೀತಿ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದರು.