ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯಲ್ಲಿ ಮಾರ್ಚ್ 21ರಿಂದ ಏಪ್ರಿಲ್ 4ರವರೆಗೆ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗಳು ಜರುಗಲಿದ್ದು, ಪರೀಕ್ಷೆಗಳು ಶಾಂತಿಯುತವಾಗಿ, ಪಾರದರ್ಶಕವಾಗಿ ನಡೆಯುವಂತೆ ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗಳ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯ 61 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ಜರುಗಲಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಗೋಡೆಗಡಿಯಾರಗಳು ಇರುವಂತೆ ನೋಡಿಕೊಳ್ಳಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ಅಗತ್ಯವಿರುವ ಗಾಳಿ, ಬೆಳಕು, ನೀರಿನ ವ್ಯವಸ್ಥೆ ಕಲ್ಪಿಸಬೇಕು. ಪರೀಕ್ಷಾರ್ಥಿಗಳಿಗೆ ಪರೀಕ್ಷೆ ಬರೆಯಲು ಸೂಕ್ತ ಆಸನದ ಸೌಲಭ್ಯ ಕಲ್ಪಿಸಬೇಕು. ಪರೀಕ್ಷಾ ಸಮಯದಲ್ಲಿ ಯಾವುದೇ ಅಕ್ರಮ, ಲೋಪ-ದೋಷಗಳಾಗದಂತೆ ಎಚ್ಚರಿಕೆ ವಹಿಸಬೇಕು. ಪರೀಕ್ಷೆಗಳನ್ನು ಸುಗಮವಾಗಿ ನಡೆಸಲು ಸಂಬಂಧಿತ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸಬೇಕೆಂದರು.
ಪರೀಕ್ಷಾ ಕೇಂದ್ರಗಳಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ಪರಿಮಿತಿಯೊಳಗೆ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ. ಪರೀಕ್ಷಾರ್ಥಿಗಳು ಹಾಗೂ ಪರೀಕ್ಷೆಯಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ಹೊರತುಪಡಿಸಿ ಇತರ ಯಾವುದೇ ವ್ಯಕ್ತಿ ಅಥವಾ ಐದು ಐದಕ್ಕಿಂತ ಹೆಚ್ಚು ಜನರು ಗುಂಪು ಕೂಡುವುದು, ವ್ಯಕ್ತಿಗಳ ಗುಂಪುಗಳ ಪ್ರವೇಶವನ್ನು ಹಾಗೂ ಅನಧಿಕೃತ ವ್ಯಕ್ತಿಗಳಿಗೆ ಪರೀಕ್ಷಾ ಕೇಂದ್ರಗಳ ಪ್ರವೇಶವನ್ನು ನಿರ್ಬಂಧಿಸಿದೆ. ಈ ಪ್ರದೇಶ ವ್ಯಾಪ್ತಿಯಲ್ಲಿ ಬರುವ ಝರಾಕ್ಸ್ ಅಂಗಡಿ, ಸೈಬರ್ ಸೆಂಟರ್, ಬುಕ್‌ಸ್ಟಾಲ್, ಫೋಟೋ ಕಾಪಿಯರ್‌ಗಳನ್ನು ಬಂದ್ ಮಾಡಲು ಆದೇಶಿಸಿದೆ.
ಈ ಪ್ರದೇಶ ವ್ಯಾಪ್ತಿಯಲ್ಲಿ ಪರೀಕ್ಷೆಗಳು ನಡೆಯುವ ಸಮಯದಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿರ್ಬಂಧಿಸಿದೆ. ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ಕ್ಯಾಮರಾ ಹೊಂದಿರದ ಸಾಮಾನ್ಯ ಮೊಬೈಲ್ ಇರಿಸಿಕೊಳ್ಳಲು ಅವಕಾಶವಿದ್ದು, ಉಳಿದ ಎಲ್ಲ ಪರೀಕ್ಷಾ ಸಿಬ್ಬಂದಿ/ ವಿದ್ಯಾರ್ಥಿಗಳು ಮೊಬೈಲ್ ಫೋನ್ ಮತ್ತು ಇತರೇ ಸಂಪರ್ಕ ಸಲಕರಣೆಗಳನ್ನು ತರುವುದನ್ನು/ ಉಪಯೋಗಿಸುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದರು.
ಜಿ.ಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಭರತ್ ಎಸ್, ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಪಾರದರ್ಶಕವಾಗಿ ಹಾಗೂ ವ್ಯವಸ್ಥಿತವಾಗಿ ಜರುಗುವಂತೆ ಅಧಿಕಾರಿಗಳು ಕ್ರಮ ವಹಿಸಬೇಕೆಂದು ಸೂಚಿಸಿದರು.
ಸಭೆಯಲ್ಲಿ ಪರೀಕ್ಷಾ ಕೇಂದ್ರಗಳಿಗೆ ಆಗಮಿಸಲು ವಿದ್ಯಾರ್ಥಿಗಳಿಗೆ ಸಮಯಕ್ಕೆ ಸರಿಯಾಗಿ ಬಸ್ ಸೌಲಭ್ಯ ಕಲ್ಪಿಸುವುದು, ಪರೀಕ್ಷಾ ಕೇಂದ್ರಗಳ ಸ್ವಚ್ಛತೆ, ಸೂಕ್ತ ಬಂದೋಬಸ್ತ್, ಸಿ.ಸಿ ಟಿವಿ ಅಳವಡಿಕೆ ಕುರಿತು ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ಡಯಟ್ ಉಪನಿರ್ದೆಶಕ ಜಿ.ಎಲ್. ಬಾರಾಟಕ್ಕೆ ಸೇರಿದಂತೆ ಪರೀಕ್ಷಾ ಕೇಂದ್ರದ ಮುಖ್ಯಸ್ಥರು, ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.
ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಎಸ್. ಬುರುಡಿ ಮಾತನಾಡಿ, ಮಾರ್ಚ್ 21ರಿಂದ ಏಪ್ರಿಲ್ 4ರವರೆಗೆ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗಳು ಜಿಲ್ಲೆಯ 61 ಪರೀಕ್ಷಾ ಕೇಂದ್ರಗಳಲ್ಲಿ ಜರುಗಲಿವೆ. ಜಿಲ್ಲೆಯಲ್ಲಿ ಒಟ್ಟು 16458 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆಗಳು ಶಾಂತಿಯುತವಾಗಿ ಹಾಗೂ ಸುಗಮವಾಗಿ ಜರುಗಲು ಕ್ರಮ ವಹಿಸಲಾಗಿದೆ ಎಂದರು.