ವಿಜಯಸಾಕ್ಷಿ ಸುದ್ದಿ, ಬೆಂಗಳೂರು: ದ್ವೇಷ ಭಾಷಣ ನಿಯಂತ್ರಣ ಮಸೂದೆ ಆಗಸ್ಟ್ 11ರಂದು ನಡೆಯಲಿರುವ ಮುಂಗಾರು ಅಧಿವೇಶನದಲ್ಲಿ ಅಂಗೀಕಾರವಾಗಿ ಆದಷ್ಟು ಶೀಘ್ರ ಅನುಷ್ಠಾನಕ್ಕೆ ಬರಬೇಕು ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷ, ವಕೀಲ ತಾಹಿರ್ ಹುಸೇನ್ ಅಗ್ರಹಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಮಂಗಳೂರಿನಲ್ಲಿ ಇತ್ತೀಚೆಗೆ ನಡೆದ ಸರಣಿ ಕೊಲೆಗಳ ಬಳಿಕ ದ್ವೇಷ ಭಾಷಣ, ರಾಜ್ಯದ ಕೆಲವೊಂದು ಡಿಜಿಟಲ್ ಮಾಧ್ಯಮಗಳು ಸುಳ್ಳು ಸುದ್ದಿ ಹಬ್ಬಿಸುವಲ್ಲಿ ನಿರಂತರವಾಗಿ ತೊಡಗಿದ್ದು, ಒಂದು ನಿರ್ದಿಷ್ಟ ಸಮುದಾಯದ ವಿರುದ್ಧ ದ್ವೇಷ ಸಾರಿದ್ದಾರೆ. ಇತ್ತೀಚೆಗೆ ರಾಜ್ಯದ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಧರ್ಮಸ್ಥಳ ಪ್ರಕರಣ ಸಂಬಂಧ ಒಂದು ಸಮುದಾಯವನ್ನು ಗುರಿಯಾಗಿಸಿ ಮಾಡಿರವ ದ್ವೇಷದ ಮಾತುಗಳಿಂದ ಸಮಾಜದಲ್ಲಿ ಸಾಕಷ್ಟು ಗೊಂದಲ ಉಂಟಾಯಿತು. ಎಸ್‌ಐಟಿ ತನಿಖೆ ನಡೆಸುವಾಗ ಒಂದು ಜವಾಬ್ದಾರಿಯುತ ಹುದ್ದೆಯಲ್ಲಿರುವ ಆರ್ ಅಶೋಕ್ ಇಂತಹ ಕೀಳುಮಟ್ಟದ ಹೇಳಿಕೆ ನೀಡಿದ್ದು ಅವರ ಹುದ್ದೆಗೆ ಶೋಭೆ ತರುವಂತದಲ್ಲ.
ಅಂತೆಯೇ ಮುಂಬರುವ ಮುಂಗಾರು ಅಧಿವೇಶನದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಮತ್ತು ಮೀಸಲಾತಿ ಮರು ಜಾರಿಗೆ ತಂದು ರಾಜ್ಯದ ಕಾಂಗ್ರೆಸ್ ಸರಕಾರವು ನುಡಿದಂತೆ ನಡೆಯಬೇಕೆಂದು ಆಗ್ರಹಿಸಿದ್ದಾರೆ.