HomeUncategorizedಯೋಗ ದಿನಾಚರಣೆ ಅರ್ಥಪೂರ್ಣವಾಗಿರಲಿ: ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್

ಯೋಗ ದಿನಾಚರಣೆ ಅರ್ಥಪೂರ್ಣವಾಗಿರಲಿ: ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: 12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂನ್ 21ರಂದು ನಗರದ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಅರ್ಥಪೂರ್ಣ ಹಾಗೂ ಅಚ್ಚುಕಟ್ಟಾಗಿ ಆಚರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಆಯುಷ್ ಇಲಾಖೆಯ ವತಿಯಿಂದ ನಡೆದ ಯೋಗ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಯೋಗವು ದೈಹಿಕ ಹಾಗೂ ಮಾನಸಿಕ ಆರೋಗ್ಯ ಕಾಪಾಡುವ ಅತ್ಯುತ್ತಮ ಸಾಧನವಾಗಿದ್ದು, ಪ್ರತಿಯೊಬ್ಬರೂ ತಮ್ಮ ದೈನಂದಿನ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳಬೇಕು. ಇಂದಿನ ಒತ್ತಡದ ಬದುಕಿನಲ್ಲಿ ಮಾನಸಿಕ ಹಾಗೂ ದೈಹಿಕ ಸಮಸ್ಯೆಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಯೋಗಾಭ್ಯಾಸ ಅತ್ಯಗತ್ಯವಾಗಿದೆ ಎಂದು ಹೇಳಿದರು.

ಜಿಲ್ಲೆಯ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆ-ಕಾಲೇಜುಗಳಲ್ಲಿ ಯೋಗ ದಿನಾಚರಣೆಯನ್ನು ಕಡ್ಡಾಯವಾಗಿ ಆಯೋಜಿಸಬೇಕು. ಯೋಗ ಕೇವಲ ಒಂದು ದಿನದ ಆಚರಣೆಗೆ ಸೀಮಿತವಾಗದೆ, ವಿದ್ಯಾರ್ಥಿಗಳಲ್ಲಿ ಏಕಾಗ್ರತೆ, ನೆನಪಿನ ಶಕ್ತಿ ಹಾಗೂ ಆರೋಗ್ಯ ವೃದ್ಧಿಗೆ ನಿರಂತರ ಅಭ್ಯಾಸವಾಗಬೇಕು ಎಂದು ಜಿಲ್ಲಾಧಿಕಾರಿ ಸಲಹೆ ನೀಡಿದರು.

ಸಾರ್ವಜನಿಕರಲ್ಲಿ ಆರೋಗ್ಯ ಜಾಗೃತಿ ಮೂಡಿಸುವಲ್ಲಿ ಯೋಗ ಸಂಸ್ಥೆಗಳು ಪ್ರಮುಖ ಪಾತ್ರವಹಿಸಬೇಕು. ಯೋಗ ದಿನಾಚರಣೆಯಲ್ಲಿ ಸಾರ್ವಜನಿಕರು, ಹಿರಿಯ ನಾಗರಿಕರು ಹಾಗೂ ಯೋಗಾಸಕ್ತರು ಯಾವುದೇ ವಯೋಮಿತಿ ಇಲ್ಲದೆ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. ಕಾರ್ಯಕ್ರಮ ಸ್ಥಳದಲ್ಲಿ ಶುದ್ಧ ಕುಡಿಯುವ ನೀರು, ಶೌಚಾಲಯ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸುವಂತೆ ಸಂಬಂಧಿತ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಆಯುಷ್ ಅಧಿಕಾರಿ ಡಾ. ಜುಬೇದ ಬೇಗಂ ಮಾತನಾಡಿ, ಜೂನ್ 21ರಂದು ಬೆಳಿಗ್ಗೆ 6.15ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಬೆಳಿಗ್ಗೆ 7 ಗಂಟೆಯಿಂದ ಸಾಮೂಹಿಕ ಯೋಗಾಭ್ಯಾಸ ಕಾರ್ಯಕ್ರಮ ಜರುಗಲಿದೆ ಎಂದು ತಿಳಿಸಿದರು.

ಯೋಗ ದಿನಾಚರಣೆ ಅಂಗವಾಗಿ ಜೂನ್ 20ರಂದು ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದ್ದು, ಬೆಳಿಗ್ಗೆ 9.30ಕ್ಕೆ ಗದಗ-ಬೆಟಗೇರಿ ನಗರ ಆವರಣದಿಂದ ಹೊರಟು ಟಾಂಗಾ ಕೂಟ, ರೋಟರಿ ಸರ್ಕಲ್, ಗಾಂಧಿ ಸರ್ಕಲ್ ಮಾರ್ಗವಾಗಿ ನಗರಸಭೆ ಆವರಣ ತಲುಪಲಿದೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ., ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಶರಣು ಗೋಗೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ರಾಧಾ ಮಣ್ಣೂರ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಬಿ. ಮಸನಾಯಕ, ಆಯುಷ್ ವೈದ್ಯಾಧಿಕಾರಿಗಳ ಸಂಘದ ಅಧ್ಯಕ್ಷ ಡಾ. ಸಂಜೀವ ನಾರಪ್ಪನವರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಯೋಗ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

“ಯೋಗವು ಆರೋಗ್ಯಕರ ಜೀವನದ ಮೂಲಮಂತ್ರ. ಪ್ರತಿಯೊಬ್ಬರೂ ದೈನಂದಿನ ಜೀವನದಲ್ಲಿ ಯೋಗ ಅಳವಡಿಸಿಕೊಂಡರೆ ದೈಹಿಕ ಮತ್ತು ಮಾನಸಿಕ ಸದೃಢತೆ ಸಾಧ್ಯ.”

ಸಿ.ಎನ್. ಶ್ರೀಧರ್, ಜಿಲ್ಲಾಧಿಕಾರಿ, ಗದಗ


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!