ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಹಾಗೂ ಅಚ್ಚುಕಟ್ಟಾಗಿ ಆಚರಿಸಲು ವಿವಿಧ ಇಲಾಖೆಯ ಅಧಿಕಾರಿಗಳು ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ ಕುರಿತು ಜರುಗಿದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸ್ವಾತಂತ್ರ್ಯೋತ್ಸವ ದಿನಾಚರಣೆಯ ಹಿಂದಿನ ದಿನ ಆಗಸ್ಟ್ 14 ಹಾಗೂ ಸ್ವಾತಂತ್ರ್ಯೋತ್ಸವದ ದಿನ ಆಗಸ್ಟ್ 15ರಂದು ನಗರದ ಪ್ರಮುಖ ವೃತ್ತಗಳಲ್ಲಿ, ಜಿಲ್ಲಾಡಳಿತ ಭವನದ ಸೇರಿದಂತೆ ವಿವಿಧ ಸರ್ಕಾರಿ ಕಟ್ಟಡಗಳಿಗೆ ಸೂಕ್ತ ದೀಪಾಲಂಕಾರವಾಗಬೇಕು ಎಂದರು.
ಸ್ವಾತಂತ್ರ್ಯೋತ್ಸವ ದಿನಾಚರಣೆ ಪ್ರಯುಕ್ತ ಆಗಸ್ಟ್ 15ರಂದು ಬೆಳಿಗ್ಗೆ 8 ಗಂಟೆಗೆ ಗದಗ ಜಿಲ್ಲಾಡಳಿತ ಭವನದ ಆವರಣದಲ್ಲಿ ಜಿಲ್ಲಾಧಿಕಾರಿಗಳಿಂದ ಧ್ವಜಾರೋಹಣ ಕಾರ್ಯಕ್ರಮ ಜರುಗಲಿದೆ. ನಂತರ ಬೆಳಿಗ್ಗೆ 9 ಗಂಟೆಗೆ ನಗರದ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಸಾರ್ವಜನಿಕ ಧ್ವಜಾರೋಹಣ ಕಾರ್ಯಕ್ರಮ ಜರುಗಲಿದ್ದು, ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸುವರು. ಅಂದು ಕಾರ್ಯಕ್ರಮ ಪ್ರಾರಂಭವಾಗುವದಕ್ಕಿಂತ ಮುಂಚೆಯೇ ಎಲ್ಲ ಶಾಲಾ ಕಾಲೇಜು ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಎಲ್ಲ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ಕಡ್ಡಾಯವಾಗಿ ಕ್ರೀಡಾಂಗಣದಲ್ಲಿ ಹಾಜರಿರಬೇಕು. ನಗರದ ಜಿಲ್ಲಾ ಕ್ರೀಡಾಂಗಣ ಹಾಗೂ ಪ್ರಮುಖ ವೃತ್ತಗಳ ಸ್ವಚ್ಛತೆಗೆ ನಗರಸಭೆ ಪೌರಾಯುಕ್ತರು ಕ್ರಮ ವಹಿಸಬೇಕು ಎಂದು ಸೂಚಿಸಿದರು.
ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ ಮಾತನಾಡಿ, ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮದ ಸಂದರ್ಭದಲ್ಲಿ ವಿವಿಧ ರಂಗಗಳಲ್ಲಿ ಸಾಧನೆ ಮಾಡಿದವರ ಸನ್ಮಾನಕ್ಕೆ ಆಯಾ ಇಲಾಖಾಧಿಕಾರಿಗಳು ಕ್ರಮ ವಹಿಸಬೇಕು. ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ತಮಗೆ ವಹಿಸಿದ ಕಾರ್ಯಗಳನ್ನು ಅಚ್ಚಕಟ್ಟಾಗಿ ನಿರ್ವಹಿಸಬೇಕು ಎಂದರು.
ಸಭೆಯಲ್ಲಿ ಶಿಷ್ಟಾಚಾರದನುಸಾರ ಆಮಂತ್ರಣ ಪತ್ರಿಕೆ ಮುದ್ರಣ, ಅಲ್ಪೋಪಹಾರದ ವ್ಯವಸ್ಥೆ, ಪರೇಡ್ ವ್ಯವಸ್ಥೆ, ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ, ಧ್ವನಿವರ್ಧಕ, ವಿದ್ಯುತ್ ಸರಬರಾಜು ಸೇರಿದಂತೆ ಕಾರ್ಯಕ್ರಮದ ವೇದಿಕೆ ವ್ಯವಸ್ಥೆ ಕುರಿತು ಚರ್ಚಿಸಲಾಯಿತು.
ಸಭೆಯಲ್ಲಿ ಡಿವೈಎಸ್‌ಪಿ ಮಹಾಂತೇಶ ಸಜ್ಜನರ, ವಿದ್ಯಾನಂದ ನಾಯಕ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಬಿ.ಸಿ. ಕರಿಗೌಡ್ರ, ಜಂಟಿ ಕೃಷಿ ನಿರ್ದೇಶಕಿ ತಾರಾಮಣಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೊಟ್ಟೂರ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕ ವಿನೋದಕುಮಾರ ಹೆಗ್ಗಳಗಿ, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಎ.ಎ. ಕಂಬಾಳಿಮಠ, ಪ.ಪೂ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಸನಾಯಕ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ನಂದಾ ಹಣಬರಟ್ಟಿ, ನಗರಸಭೆ ಪೌರಾಯುಕ್ತ ರಾಜಾರಾಮ ಪವಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಬಿ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಶರಣು ಗೋಗೇರಿ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಕೊಟ್ರೇಶ್ವರ ವಿಭೂತಿ, ವಾರ್ತಾ ಮತ್ತು ಸಾ.ಸಂ ಇಲಾಖೆಯ ಸಹಾಯಕ ನಿರ್ದೇಶಕ ವಸಂತ ಮಡ್ಲೂರ, ಕೌಶಲ್ಯಾಭಿವೃದ್ಧಿ ಇಲಾಖೆ ಅಧಿಕಾರಿ ಬಸವರಾಜ ಮಲ್ಲೂರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.
ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್ ಮಾತನಾಡಿ, ಸ್ವಾತಂತ್ರ್ಯೋತ್ಸವ ದಿನಾಚರಣೆಯ ಸಮಾರಂಭದಲ್ಲಿ ಯಾವುದೇ ಗೊಂದಲಗಳಾಗದಂತೆ ಅಚ್ಚುಕಟ್ಟಾಗಿ ನಿರ್ವಹಿಸಲು ವಿವಿಧ ಇಲಾಖೆಯ ಅಧಿಕಾರಿಗಳು ಕ್ರಮ ವಹಿಸಬೇಕು. ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಎಲ್ಲ ಅಧಿಕಾರಿ ಹಾಗೂ ಸಿಬ್ಬಂದಿಗಳ ಹಾಜರಾತಿ ಕಡ್ಡಾಯವಾಗಿದೆ ಎಂದರು.
“ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಜರುಗಲಿದ್ದು, ಗಣ್ಯ ವ್ಯಕ್ತಿಗಳಿಗೆ ಶಿಷ್ಟಾಚಾರದನ್ವಯ ಆಸನದ ವ್ಯವಸ್ಥೆಗೆ ಕ್ರಮ ಕೈಗೊಳ್ಳಬೇಕು. ನಗರದ ಜಿಲ್ಲಾ ಕ್ರೀಡಾಂಗಣ ಸೇರಿದಂತೆ ಪ್ರಮುಖ ಬೀದಿ ಹಾಗೂ ವೃತ್ತಗಳ ಸ್ವಚ್ಛತೆ ಕುರಿತು ನಗರಸಭೆ ಪೌರಾಯುಕ್ತರು ನಿಗಾ ವಹಿಸಬೇಕು. ಕಾರ್ಯಕ್ರಮದ ದಿನ ತುರ್ತು ಸೇವೆಗಾಗಿ ಅಂಬುಲೆನ್ಸ್ನ ವ್ಯವಸ್ಥೆಗೆ ಕ್ರಮ ವಹಿಸಬೇಕು. ಒಟ್ಟಾರೆಯಾಗಿ ರಾಷ್ಟ್ರೀಯ ಹಬ್ಬವಾದ ಸ್ವಾತಂತ್ರ್ಯೋತ್ಸವ ಸಮಾರಂಭವನ್ನು ಶ್ರದ್ಧೆ ಹಾಗೂ ಆಸಕ್ತಿಯಿಂದ ಆಚರಿಸಲು ಕ್ರಮ ವಹಿಸಬೇಕು”
– ಸಿ.ಎನ್. ಶ್ರೀಧರ್.
ಗದಗ ಜಿಲ್ಲಾಧಿಕಾರಿಗಳು.